ಉಡುಪಿ : ಮತ ಎಣಿಕೆಗೆ ನಿಗದಿ ಪಡಿಸಿರುವ ಸೂಚನೆಗಳ ಕ್ರಮ ಬದ್ಧತೆಯಲ್ಲಿ ಯಾವುದೇ ರೀತಿಯ ವ್ಯತ್ಯಾಸ ಆಗದಂತೆ ನೋಡಿಕೊಂಡು ಮತ ಎಣಿಕೆ ಕಾರ್ಯವನ್ನು ಯಶಸ್ವಿಯಾಗಿ ನಡೆಸಬೇಕು ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ವೀಕ್ಷಕ ಹಿತೇಶ್ ಕೆ.ಕೋಯಲ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಉಡುಪಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾದ ಲೋಕಸಭಾ ಚುನಾವಣೆ-2024ರ ಮತ ಎಣಿಕೆ ಪೂರ್ವ ಸಿದ್ಧತೆ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡುತ್ತಿದ್ದರು.

ಮತ ಎಣಿಕೆ ಜೂ.4ರಂದು ನಗರದ ಸೆಂಟ್ ಸಿಸಿಲಿ ವಿದ್ಯಾ ಸಂಸ್ಥೆಯಲ್ಲಿ ನಡೆಯಲಿದೆ. ಅಂದು ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ಪ್ರಕ್ರಿಯೆ ಪ್ರಾರಂಭವಾಗಲಿದ್ದು, ಮತ ಎಣಿಕೆಗೆ ನಿಯೋಜನೆಗೊಂಡಿರುವ ಅಧಿಕಾರಿ ಮತ್ತು ಸಿಬ್ಬಂದಿ ಮತ ಎಣಿಕೆ ಕಾರ್ಯದಲ್ಲಿ ಲೋಪದೋಷಗಳಾಗದಂತೆ ನೋಡಿಕೊಳ್ಳಬೇಕು ಎಂದರು.
ಮತ ಎಣಿಕೆ ಪ್ರಾರಂಭವಾಗುವ ಮೊದಲು ಮತಯಂತ್ರದ ಎಣಿಕೆ ಸಂದರ್ಭದಲ್ಲಿ ಎಚ್ಚರಿಕೆಯಿಂದ ತಮಗೆ ವಹಿಸಿದ ಮಾರ್ಗಸೂಚಿಗಳಂತೆ ಕಾರ್ಯ ನಿರ್ವಹಿಸಬೇಕು. ಪ್ರತಿ ಮತಯಂತ್ರದ ಎಣಿಕೆಯಾದ ತಕ್ಷಣ ನಿಖರವಾಗಿ ಅಂಕಿ ಅಂಶಗಳನ್ನು ನಿಗದಿತ ನಮೂನೆಯಲ್ಲಿ ಬರೆದುಕೊಳ್ಳಬೇಕು ಎಂದು ಅವರು ಸೂಚನೆ ನೀಡಿದರು.
ಜಿಲ್ಲಾಧಿಕಾರಿ ಡಾ. ವಿದ್ಯಾ ಕುಮಾರಿ, ಮತ ಎಣಿಕೆ ಕೇಂದ್ರದಲ್ಲಿ ಮತ ಎಣಿಕೆಗೆ ಕೈಗೊಂಡಿರುವ ಪೂರ್ವ ಸಿದ್ಧತೆಗಳನ್ನು ಸವಿಸ್ತಾರವಾಗಿ ವಿವರಿಸಿದರು. ಸಭೆಯಲ್ಲಿ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ.ಅರುಣ್ ಕೆ., ಅಪರ ಜಿಲ್ಲಾಧಿಕಾರಿ ಮಮತಾ ದೇವಿ, ಸಹಾಯಕ ಚುನಾವಣಾ ಅಧಿಕಾರಿಗಳು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.