ಅಪ್ರಾಪ್ತೆಯ ಅತ್ಯಾಚಾರಗೈದ ಅಪರಾಧಿಗೆ 20 ವರ್ಷಗಳ ಕಠಿಣ ಶಿಕ್ಷೆ, ದಂಡ

ಮಂಗಳೂರು : ಅಪ್ರಾಪ್ತೆಯ ಅತ್ಯಾಚಾರಗೈದ ಅಪರಾಧಿಗೆ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಎಫ್ಟಿಎಸ್‌ಸಿ-2 ಪೊಕ್ಸೊ ವಿಶೇಷ ನ್ಯಾಯಾಲಯದ 20 ವರ್ಷಗಳ ಕಠಿಣ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.

ಬೆಳ್ತಂಗಡಿ ಸವಣಾಲು ಗ್ರಾಮದ ಸದಾಶಿವ (31) ಶಿಕ್ಷೆಗೊಳಗಾದ ಅಪರಾಧಿ.

ಬಾಲಕಿಯ ತಾಯಿಯ ಮೊಬೈಲ್‌ಗೆ ಕರೆ ಮಾಡಿ ಬಾಲಕಿಯೊಂದಿಗೆ ಮಾತನಾಡುತ್ತಿದ್ದ ಆರೋಪಿ ಬಳಿಕ ಫೇಸ್‌ಬುಕ್‌ನಲ್ಲಿ ಸಂಪರ್ಕವನ್ನಿಟ್ಟುಕೊಂಡಿದ್ದ. 2022ರ ಆ. 9ರಂದು ಬೆಳಗ್ಗೆ ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಗೆ ಬಂದು ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದ. ಬಳಿಕ ಫೇಸ್‌ಬುಕ್‌ನಲ್ಲಿ ಅಶ್ಲೀಲ ಸಂದೇಶ ಕಳುಹಿಸಿದ್ದ. ಇದರಿಂದ ಮನನೊಂದ ಬಾಲಕಿ ಡೀಸೆಲ್‌ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಳು. ಈ ಬಗ್ಗೆ ಬೆಳ್ತಂಗಡಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪೊಲೀಸ್‌ ವೃತ್ತ ನಿರೀಕ್ಷಕ ಶಿವಕುಮಾರ್‌ ಬಿ. ತನಿಖೆ ಪೂರ್ಣಗೊಳಿಸಿ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು.

ಅಭಿಯೋಜನೆಯ ಪರ ಒಟ್ಟು 14ಸಾಕ್ಷಿದಾರರನ್ನು ವಿಚಾರಣೆ ನಡೆಸಿ 33ದಾಖಲೆಗಳನ್ನು ಗುರುತಿಸಲಾಗಿತ್ತು. ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಮಾನು ಕೆ.ಎಸ್‌. ಅವರು ಸೆ.21ರಂದು ಆರೋಪಿಯ ವಿರುದ್ಧ ಅಪರಾಧ ಸಾಬೀತಾಗಿದೆ ಎಂದು ತೀರ್ಮಾನಿಸಿ ಪೊಕ್ಸೊ ಕಾಯ್ದೆಯಂತೆ 20ವರ್ಷಗಳ ಕಾಲ ಕಠಿಣ ಶಿಕ್ಷೆ ಮತ್ತು 50,000 ರೂ. ದಂಡ ವಿಧಿಸಿದ್ದಾರೆ.

ದಂಡದ ಮೊತ್ತದಲ್ಲಿ 50,000 ರೂ.ಗಳನ್ನು ನೊಂದ ಬಾಲಕಿಗೆ ಪಾವತಿಸುವಂತೆ ಆದೇಶಿಸಿದ್ದಾರೆ. ಅಲ್ಲದೆ ನೊಂದ ಬಾಲಕಿಗೆ ಹೆಚ್ಚುವರಿಯಾಗಿ 1.50 ಲಕ್ಷ ರೂ. ಪರಿಹಾರವನ್ನು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ನೀಡುವಂತೆ ನಿರ್ದೇಶನ ನೀಡಿದ್ದಾರೆ. ಪ್ರಕರಣದಲ್ಲಿ ಸರಕಾರದ ಪರವಾಗಿ ವಿಶೇಷ ಸರಕಾರಿ ಅಭಿಯೋಜಕ ಕೆ. ಬದರಿನಾಥ ನಾಯರಿ ಅವರು ಸಾಕ್ಷಿದಾರರನ್ನು ವಿಚಾರಿಸಿ ವಾದ ಮಂಡಿಸಿದ್ದರು.

Related posts

ಮೂಡುಬಿದಿರೆಯಲ್ಲಿ ಲ್ಯಾಪ್‌ ಟಾಪ್‌ ಕಳ್ಳತನ: ಅಂತರ್ ಜಿಲ್ಲಾ ಕಳ್ಳ ಅರೆಸ್ಟ್

ಶಾಸ್ತ್ರೀಪಾರ್ಕ್‌ ಫ್ಲೈಓವರ್‌ ತಳಭಾಗಕ್ಕೆ ಪೊಲೀಸ್‌ ನಿಯೋಜನೆ

ಕಾರು ಕಳವು ಗೈದ ಆರೋಪಿ ಪೊಲೀಸ್ ವಶಕ್ಕೆ