ಉಡುಪಿ : ಜಿಲ್ಲೆಯಲ್ಲಿ ಇತ್ತೀಚಿನ ದಿನಗಳಲ್ಲಿ ನಾಯಿ ಕಡಿತ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಈ ಬಗ್ಗೆ ಅನೇಕ ದೂರುಗಳು ಸಹ ಬರುತ್ತಿವೆ. ಈ ನಿಟ್ಟಿನಲ್ಲಿ ನಗರ ಹಾಗೂ ಗ್ರಾಮೀಣ ಭಾಗದ ಸ್ಥಳೀಯ ಸಂಸ್ಥೆಗಳು ಬೀದಿ ನಾಯಿಗಳ ನಿಯಂತ್ರಣಕ್ಕೆ ಅಗತ್ಯ ಇರುವ ಎಲ್ಲಾ ಕ್ರಮಗಳನ್ನು ಕೈಗೊಳ್ಳಬೇಕೆಂದು ಉಡುಪಿ ಜಿಲ್ಲಾಧಿಕಾರಿ ಡಾ ಕೆ.ವಿದ್ಯಾಕುಮಾರಿ ತಿಳಿಸಿದ್ದಾರೆ.
ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಪ್ರಾಣಿ ದಯಾ ಸಂಘದ ವಿಶೇಷ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು.
ನಗರ ಹಾಗೂ ಗ್ರಾಮೀಣ ಮಟ್ಟದ ಸ್ಥಳೀಯ ಸಂಸ್ಥೆಗಳಾದ ನಗರಸಭೆ, ಪುರಸಭೆ, ಪಟ್ಟಣ ಪಂಚಾಯತ್ ಹಾಗೂ ಗ್ರಾಪಂಗಳು ನಾಯಿಗಳ ಸಂತಾನ ನಿಯಂತ್ರಣ ಶಸ್ತ್ರ ಚಿಕಿತ್ಸೆ ಮೂಲಕ ಬೀದಿ ನಾಯಿಗಳ ಸಂಖ್ಯೆ ನಿಯಂತ್ರಣಕ್ಕಾಗಿ ಬಜೆಟ್‌ನಲ್ಲಿ ಅನುದಾನ ಮಿಸಲಿರಿಸಬೇಕು ಎಂದು ಅವರು ಸೂಚನೆ ನೀಡಿದರು.
ಸ್ಥಳೀಯ ಸಂಸ್ಥೆಗಳು ಪ್ರತೀ ಮೂರು ತಿಂಗಳಿಗೊಮ್ಮೆ ಬೀದಿ ನಾಯಿಗಳ ಗಣತಿ ಕಾರ್ಯ ಕೈಗೊಳ್ಳಬೇಕು. ಒಂದೊಮ್ಮೆ ತಕ್ಷಣದಲ್ಲಿ ಗಣತಿ ಕಾರ್ಯ ಕೈಗೊಳ್ಳಲು ಸಾಧ್ಯವಾಗದೆ ಇದ್ದಲ್ಲಿ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿ ಪ್ರದೇಶದ ಜನ ಸಂಖ್ಯೆಯ ಶೇ.2ರಷ್ಟು ಬೀದಿ ನಾಯಿಗಳು ಇವೆ ಎಂದು ಪರಿಗಣಿಸಿ, ಒಟ್ಟು ನಾಯಿಗಳ ಅರ್ಧದಷ್ಟು ಪ್ರತೀ ವರ್ಷ ಸಂತಾನ ಹರಣ ಶಸ್ತ್ರಚಿಕಿತ್ಸೆಗೆ ಒಳಪಡಿಸಿರುವ ನಾಯಿಗಳ ಸಂಖ್ಯೆ ಎಂದು ಪರಿಗಣಿಸಬೇಕು ಎಂದರು.