ಉಡುಪಿ : ಕೌಟುಂಬಿಕ ವ್ಯವಸ್ಥೆ ಪ್ರತಿಯೊಂದು ಮಗುವಿನ ಹಕ್ಕು. ಮಗುವಿಗೆ ಅವಶ್ಯವಿರುವ ಪ್ರೀತಿ ಮತ್ತು ಆರೈಕೆಯನ್ನು ಕುಟುಂಬದ ವಾತಾವರಣ ಕಲ್ಪಿಸುತ್ತದೆ. ದತ್ತು ಪಡೆಯಲು ಇಚ್ಚಿಸುವ ದಂಪತಿಗಳು ಕಾನೂನು ಬದ್ಧವಾಗಿ ದತ್ತು ಪ್ರಕ್ರಿಯೆ ಮೂಲಕ ದತ್ತು ಪಡೆಯಬಹುದು ಎಂದು ಜಿಲ್ಲಾಧಿಕಾರಿ ಡಾ. ಕೆ.ವಿದ್ಯಾಕುಮಾರಿ ಹೇಳಿದ್ದಾರೆ.
ಮಣಿಪಾಲದ ತಮ್ಮ ಕಚೇರಿಯಲ್ಲಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಉಡುಪಿ ವತಿಯಿಂದ ಗೋವಾ ಮತ್ತು ಬೆಂಗಳೂರು ಮೂಲದ ಇಬ್ಬರು ದಂಪತಿಗಳಿಗೆ ಮಕ್ಕಳನ್ನು ಕಾನೂನು ಬದ್ಧವಾಗಿ ನೀಡುವ ಮೂಲಕ ದತ್ತು ಆದೇಶವನ್ನು ವಿತರಿಸಿ ಅವರು ಮಾತನಾಡುತ್ತಿದ್ದರು.
ಬಾಲನ್ಯಾಯ (ಮಕ್ಕಳ ಪಾಲನೆ ಮತ್ತು ರಕ್ಷಣೆ) ತಿದ್ದುಪಡಿ ಕಾಯಿದೆ 2021ರ ಸೆಕ್ಷನ್ 56 (1) 58 ಮತ್ತು 61ರ ಅಡಿಯಲ್ಲಿ ಕುಟುಂಬದ ಪೋಷಕರನ್ನು ಕಳೆದುಕೊಂಡು ಪಾಲನೆ, ಪೋಷಣೆ ವಂಚಿತ ಪರಿತ್ಯಕ್ತ ಹಾಗೂ ನಿರ್ಗತಿಕ ಮಕ್ಕಳು ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯಿಂದ ದತ್ತು ಮುಕ್ತ ಆದೇಶ ಪಡೆದು ದತ್ತು ನೀಡಲು ಅರ್ಹರಾಗಿರುತ್ತಾರೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಮಗು ಬೇಡವಾದಲ್ಲಿ ಕಸದ ತೊಟ್ಟಿ, ಆಸ್ಪತ್ರೆ ಆವರಣ, ಶೌಚಾಲಯ, ರಸ್ತೆ ಬದಿ ಅಥವಾ ಪೊದೆಗಳಲ್ಲಿ ಎಸೆಯದೇ ಮಕ್ಕಳ ರಕ್ಷಣೆಗಾಗಿ ಇರುವ ವಿಶೇಷ ಮಮತೆಯ ತೊಟ್ಟಿಲುಗಳಲ್ಲಿ ಮಕ್ಕಳನ್ನು ಬಿಡಬಹುದಾಗಿದೆ. ಜಿಲ್ಲೆಯಲ್ಲಿ ಶ್ರೀಕೃಷ್ಣಾನುಗೃಹ ದತ್ತು ಕೇಂದ್ರ, ಮಹಿಳೆಯರ ಮತ್ತು ಮಕ್ಕಳ ಆಸ್ಪತ್ರೆ ಉಡುಪಿ ಹಾಗೂ ಸರಕಾರಿ ಬಾಲಕಿಯರ ಬಾಲ ಮಂದಿರ ನಿಟ್ಟೂರು ಇಲ್ಲಿ ಮಮತೆಯ ತೊಟ್ಟಿಲುಗಳನ್ನು ಇರಿಸಲಾಗಿದೆ ಎಂದರು.