ಉಡುಪಿ : ಪ್ರಸ್ತುತ ಸಾಲಿನ ವಾರ್ಷಿಕ ಪರೀಕ್ಷೆಗಳು ಪ್ರಾರಂಭವಾಗುತ್ತಿದ್ದು ವಿದ್ಯಾರ್ಥಿಗಳು ಹಾಗೂ ವಿದ್ಯಾರ್ಥಿಗಳ ಪೋಷಕರಿಂದ ಶಬ್ದ ಮಾಲಿನ್ಯದ ಕುರಿತಾದ ದೂರುಗಳು ಬರುತ್ತಿವೆ.
ಜಿಲ್ಲೆಯ ಪ್ರಜ್ಞಾವಂತ ಜನತೆ ತಮ್ಮ ತಮ್ಮ ಕಾರ್ಯಕ್ರಮಗಳಲ್ಲಿ ಶಬ್ದ ಮಾಲಿನ್ಯ ಉಂಟಾಗದಂತೆ ಕ್ರಮ ವಹಿಸುವುದು ಅಗತ್ಯವಾಗಿದೆ. ಈ ಸಂಬಂಧ ಸರಕಾರ 2022ರ ಮೇ10ರಂದು ಹೊರಡಿಸಿರುವ ಸುತ್ತೋಲೆಯಲ್ಲಿ ನೀಡಲಾದ ಮಾರ್ಗದರ್ಶನಗಳನ್ನು ಸರಿಯಾಗಿ ಕಾರ್ಯಗತಗೊಳಿಸಲು ಹಾಗೂ ಜಿಲ್ಲೆಯ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ನಿಗದಿ ಪಡಿಸಿದ ಅವಧಿಯೊಳಗೆ ಸಮಾರಂಭವನ್ನು ಮುಕ್ತಾಯಗೊಳಿಸುವಂತೆ ಜಿಲ್ಲಾಧಿಕಾರಿಗಳು ಮನವಿ ಮಾಡಿದ್ದಾರೆ.
ಅಲ್ಲದೇ ವಿಪರೀತ ಶಬ್ದ ಮಾಲಿನ್ಯ ಹಾಗೂ ಅಕ್ಕಪಕ್ಕದವರೆಗೆ ತೊಂದರೆ ಉಂಟಾಗದಂತೆ ಮತ್ತು ವಿದ್ಯಾರ್ಥಿಗಳಿಗೆ ತಮ್ಮ ಪರೀಕ್ಷೆ ತಯಾರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಹಾಗೂ ವಿದ್ಯಾರ್ಥಿಗಳು ಏಕಾಗ್ರತೆಯಿಂದ ಓದಲು ಅಡಚಣೆಯಾಗದಂತೆ ಸಾರ್ವಜನಿಕರು ಸಹಕರಿಸಬೇಕು. ಇದರ ಹೊರತಾಗಿಯೂ ಶಬ್ದ ಮಾಲಿನ್ಯದ ಕುರಿತು ದೂರುಗಳು ಸ್ವೀಕೃತವಾದಲ್ಲಿ ಪರಿಸರ (ಸಂರಕ್ಷಣೆ) ಕಾಯ್ದೆ 1986 ನಿಯಮ 15ರಡಿಯಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ದಂಡಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.