ಮುಸ್ಲಿಂ ಮಹಿಳೆಯರ ವಿರುದ್ಧ ಹೇಳಿಕೆ ಆರೋಪ : ಡಾ.ಪ್ರಭಾಕರ ಭಟ್ ಕಲ್ಲಡ್ಕ ವಿಚಾರಣೆಗೆ ಹೈಕೋರ್ಟ್ ತಡೆ

ಬೆಂಗಳೂರು : ಮುಸ್ಲಿಂ ಮಹಿಳೆಯರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರ್.ಎಸ್.ಎಸ್) ಮುಖಂಡ ಡಾ. ಪ್ರಭಾಕರ ಭಟ್ ಕಲ್ಲಡ್ಕ ವಿರುದ್ಧ ಶ್ರೀರಂಗಪಟ್ಟಣ ಜೆಎಂಎಫ್‌‌ಸಿ ಕೋರ್ಟ್‌ನಲ್ಲಿರುವ ಪ್ರಕರಣದ ನ್ಯಾಯಿಕ ವಿಚಾರಣಾ ಪ್ರಕ್ರಿಯೆಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.

‘ನನ್ನ ವಿರುದ್ಧ ದಾಖಲಾಗಿರುವ ಪ್ರಕರಣವನ್ನು ರದ್ದುಪಡಿಸಬೇಕು’ ಎಂದು ಕೋರಿ ಡಾ.ಪ್ರಭಾಕರ ಭಟ್ ಕಲ್ಲಡ್ಕ (82) ಸಲ್ಲಿಸಿದ್ದ ರಿಟ್ ಅರ್ಜಿಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ವಿಚಾರಣೆ ನಡೆಸಿ ಈ ಕುರಿತಂತೆ ಆದೇಶಿಸಿದೆ. ಪ್ರಭಾಕರ ಭಟ್ ಪರ ಹೈಕೋರ್ಟ್ ಹಿರಿಯ ವಕೀಲ ಎಂ.ಅರುಣ್ ಶ್ಯಾಮ್ ವಾದ ಮಂಡಿಸಿದರು.

ಪ್ರಕರಣದ ಹಿನ್ನೆಲೆ : 2023ರ ಡಿಸೆಂಬರ್ 24ರ ಮಧ್ಯಾಹ್ನ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ಹಿಂದೂ ಜಾಗರಣ ವೇದಿಕೆ ವತಿಯಿಂದ ಆಯೋಜಿಸಲಾಗಿದ್ದ ಹನುಮಮಾಲೆ ಸಂಕೀರ್ತನಾ ಯಾತ್ರೆ ಸಮಾರಂಭದಲ್ಲಿನ ಸಾರ್ವಜನಿಕ ವೇದಿಕೆಯಲ್ಲಿ ಡಾ.ಪ್ರಭಾಕರ ಭಟ್ ಮಾತನಾಡಿದ್ದರು.

ಈ ಭಾಷಣದಲ್ಲಿ ಅವರು, ಮುಸ್ಲಿಂ ಮಹಿಳೆಯರಿಗೆ ಪರ್ಮನೆಂಟ್ ಗಂಡ ಇರಲಿಲ್ಲ. ಅವರಿಗೆ ದಿನಕ್ಕೊಬ್ಬ ಗಂಡ. ಪರ್ಮನೆಂಟ್ ಗಂಡನನ್ನು ಕೊಟ್ಟಿದ್ದು ಮೋದಿ ಸರ್ಕಾರ ಎಂದು ಹೇಳಿದ್ದಾರೆ ಎಂದು ಆರೋಪಿಸಿ, ಸಾಮಾಜಿಕ ಕಾರ್ಯಕರ್ತೆ ನಜ್ಮಾ ನಜೀರ್ ಬಿನ್ ನಜೀರ್ ಅಹ್ಮದ್ (27) ಶ್ರೀರಂಗಪಟ್ಟಣ ಪೊಲೀಸ್ ಠಾಣೆಯಲ್ಲಿ 2023ರ ಡಿಸೆಂಬರ್ 26ರಂದು ದೂರು ನೀಡಿದ್ದರು. ಡಾ.ಪ್ರಭಾಕರ ಭಟ್ ಕಲ್ಲಡ್ಕ ಹಾಗೂ ಇತರರ ವಿರುದ್ಧ ಭಾರತೀಯ ದಂಡ ಸಂಹಿತೆ-1860ರ ಕಲಂ 354, 294, 509, 506, 153ಎ, 295, 295ಎ ಹಾಗೂ 298ರ ಅಡಿಯಲ್ಲಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಕೋರಿದ್ದರು. ಈ ದೂರಿನ ಅನ್ವಯ ಎಫ್ಐಆರ್ ದಾಖಲಿಸಿ ತನಿಖೆ ನಡೆಸಿದ್ದ ಪೊಲೀಸರು ಶ್ರೀರಂಗಪಟ್ಟಣ ಜೆಎಂಎಫ್ ಸಿ ವಿಚಾರಣಾ ಕೋರ್ಟ್‌ಗೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು.

Related posts

ಮೂಡುಬಿದಿರೆಯಲ್ಲಿ ಲ್ಯಾಪ್‌ ಟಾಪ್‌ ಕಳ್ಳತನ: ಅಂತರ್ ಜಿಲ್ಲಾ ಕಳ್ಳ ಅರೆಸ್ಟ್

ಶಾಸ್ತ್ರೀಪಾರ್ಕ್‌ ಫ್ಲೈಓವರ್‌ ತಳಭಾಗಕ್ಕೆ ಪೊಲೀಸ್‌ ನಿಯೋಜನೆ

ಕಾರು ಕಳವು ಗೈದ ಆರೋಪಿ ಪೊಲೀಸ್ ವಶಕ್ಕೆ