ಮಾನವ ಕಳ್ಳಸಾಗಾಣಿಕೆ ಪ್ರಕರಣಗಳಾಗದಂತೆ ಜಾಗೃತೆ ವಹಿಸಿ : ಉಡುಪಿ ಡಿಸಿ ವಿದ್ಯಾಕುಮಾರಿ

ಉಡುಪಿ : ಮಾನವ ಕಳ್ಳ ಸಾಗಾಣಿಕೆಯು ಅತ್ಯಂತ ಗಂಭೀರ ವಿಚಾರವಾಗಿದ್ದು, ಸಾರ್ವಜನಿಕರಲ್ಲಿ ಈ ಬಗ್ಗೆ ಅರಿವು ಮೂಡಿಸುವ ಮೂಲಕ ಇದನ್ನು ತಡೆಗಟ್ಟುವಲ್ಲಿ ಪೊಲೀಸ್, ಕಾರ್ಮಿಕ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗಳ ಅಧಿಕಾರಿಗಳು ಅತ್ಯಂತ ಸಮನ್ವಯ‌ದೊಂದಿಗೆ ಕಾರ್ಯ ನಿರ್ವಹಿಸಿ ಇಂಥ ಪ್ರಕರಣಗಳು ನಡೆಯದಂತೆ ಎಚ್ಚರ ವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಹೇಳಿದ್ದಾರೆ.

ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಡುಪಿ ಇವರ ಸಹಯೋಗದೊಂದಿಗೆ ‘ಮಾನವ ಕಳ್ಳ ಸಾಗಾಣಿಕೆ ತಡೆ ದಿನಾಚರಣೆ’ ಅಂಗವಾಗಿ ಪ್ರತಿಜ್ಞಾ ವಿಧಿಯನ್ನು ಬೋಧಿಸಿ ಅವರು ಮಾತನಾಡುತ್ತಿದ್ದರು.

ಮಾನವ ಅಂಗಾಂಗಗಳಿಗಾಗಿ ವಿವಿಧ ರೀತಿಯ ಆಮಿಷ ತೋರಿಸಿ ಕಳ್ಳ ಸಾಗಾಣಿಕೆ ಮಾಡಲಾಗುತ್ತದೆ. ಬಡವರಿಗೆ ಹಾಗೂ ಹಣದ ಅಗತ್ಯ ಇರುವವರಿಗೆ ಆಮಿಷವೊಡ್ಡಿ ಇಂತಹ ಕೃತ್ಯಗಳಿಗೆ ತೊಡಗಿಸಲಾಗುತ್ತಿದೆ. ಇಂಥ ಪ್ರಕರಣಗಳು ಕಂಡು ಬಂದಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಶ್ಯಾಮಲಾ ಸಿ.ಕೆ. ಪ್ರಾಸ್ತಾವಿಕವಾಗಿ ಮಾತನಾಡಿ, ಮಾನವ ಕಳ್ಳ ಸಾಗಾಣಿಕೆ, ಜಾಗತಿಕವಾಗಿ ಸಮಾಜವನ್ನು ಕಾಡುತ್ತಿರುವ ಸಮಸ್ಯೆಯಾಗಿದೆ. ಬಲವಂತ‌ವಾಗಿ ದೈಹಿಕ ಶೋಷಣೆ, ಬಾಲಕಾರ್ಮಿಕತೆ, ಭಿಕ್ಷಾಟನೆ, ಗೃಹಬಳಕೆ, ಬಾಲ್ಯವಿವಾಹ, ಅಂಗಾಂಗ ಕಸಿಯುವಿಕೆ, ಸಮಾಜಬಾಹಿರ ಕೃತ್ಯ‌ಗಳಲ್ಲಿ ತೊಡಗಿಸುವ ಉದ್ದೇಶದಿಂದ ಇಂಥ ಕೃತ್ಯ ಮಾಡಲಾಗುತ್ತದೆ. ಇದೊಂದು ಸಂಘಟಿತ ಅಪರಾಧವಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಮತ್ತು ಮಕ್ಕಳೇ ಇದರಿಂದ ಶೋಷಣೆಗೆ ಒಳಗಾಗುತ್ತಿದ್ದಾರೆ. ಅಂಥವರನ್ನು ರಕ್ಷಣೆ ಮಾಡುವ ಜವಾಬ್ದಾರಿ ಸರಕಾರ ಹಾಗೂ ಇಲಾಖೆಯದ್ದಾಗಿದೆ ಎಂದರು.

Related posts

ಕರ್ನಾಟಕ ಕ್ರೀಡಾಕೂಟದಲ್ಲಿ ಸಮರಾಗೆ ಚಿನ್ನದ ಪದಕ

ಯಕ್ಷಗಾನ ಪ್ರದರ್ಶನಕ್ಕೆ ಅಡ್ಡಿ – ಬ್ರಿಟಿಷ್ ಆಡಳಿತವನ್ನೂ ಮೀರಿಸಿದ ಸಿದ್ಧರಾಮಯ್ಯ ಸರ್ಕಾರ : ಯಶ್‌ಪಾಲ್ ಸುವರ್ಣ

ಮಾರಿದ ಹಳೆಯ ಬಸ್ಸನ್ನು ಕದ್ದು ತಂದ ಆರೋಪ – ತಂದೆ ಮಗನ ವಿರುದ್ಧ ದೂರು ದಾಖಲು !