ಉಡುಪಿ : ಜಿಲ್ಲೆಯಾದ್ಯಂತ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದ್ದು. ದಿನಾಂಕ : 01-08-2024ರ ಹವಾಮಾನ ಇಲಾಖೆಯ ರೆಡ್ ಅಲರ್ಟ್ ಮುನ್ಸೂಚನೆಯಂತೆ ಮಳೆಯ ತೀವ್ರತೆ ಹೆಚ್ಚಾಗುವುದರಿಂದ ಮುಂಜಾಗೃತಾ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ದಿನಾಂಕ : 02.08.2024ರಂದು ಉಡುಪಿ ಜಿಲ್ಲೆಯ ಎಲ್ಲಾ ತಾಲೂಕಿನ ಅಂಗನವಾಡಿ ಕೇಂದ್ರಗಳಿಗೆ, ಹಾಗೂ ಪ್ರಾಥಮಿಕ, ಪ್ರೌಢ ಶಾಲೆ, ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ರಜೆಯನ್ನು ಘೋಷಿಸಲಾಗಿರುತ್ತದೆ.
Weather
ಬೈಂದೂರು ಮತ್ತು ಕುಂದಾಪುರದ ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿದ ಉಡುಪಿ ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ
ಕುಂದಾಪುರ : ಉಡುಪಿ ಜಿಲ್ಲೆಯಾದ್ಯಂತ ಕಳೆದ ಎರಡು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದೆ. ಅದರಲ್ಲೂ ಮುಖ್ಯವಾಗಿ ಬೈಂದೂರು ಮತ್ತು ಕುಂದಾಪುರ ಭಾಗಗಳಲ್ಲಿ ಅತಿ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗುತ್ತಿದೆ.
ಇಂದು ಉಡುಪಿ ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ಅವರು ಬೈಂದೂರು ಮತ್ತು ಕುಂದಾಪುರದ ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿದರು. ನಿನ್ನೆ ತಡರಾತ್ರಿ ಕುಂದಾಪುರದಲ್ಲಿ ಸುರಿದ ಭಾರಿ ಮಳೆಗೆ ಮನೆಗಳಿಗೆ ನೀರು ನುಗ್ಗಿತ್ತು. ಈ ಪ್ರದೇಶಕ್ಕೆ ಜಿಲ್ಲಾಧಿಕಾರಿ ಇಂದು ಭೇಟಿ ನೀಡಿದರು.
ಬಳಿಕ ಮಾಧ್ಯಮದ ಜೊತೆ ಮಾತನಾಡಿದ ಅವರು, ನಿನ್ನ ರಾತ್ರಿಯ ಮಳೆಯಿಂದ ಮನೆಗಳಿಗೆ ನೀರು ನುಗ್ಗಿತ್ತು. ಕಂದಾಯ ಇಲಾಖೆ ಅಧಿಕಾರಿಗಳು ಮತ್ತು ತಹಶೀಲ್ದಾರ್ ನಿನ್ನೆ ಇಲ್ಲಿಗೆ ಭೇಟಿ ನೀಡಿದ್ದಾರೆ. ಇವತ್ತು ನಾನು ಇಲ್ಲಿಗೆ ಬಂದಿದ್ದು, ಮಳೆನೀರು ಸಮರ್ಪಕವಾಗಿ ಹರಿದು ಹೋಗುವ ಸ್ಥಳದಲ್ಲಿ ಕಸಕಡ್ಡಿಗಳು ತುಂಬಿದ್ದು ಅವುಗಳನ್ನು ಸಮರ್ಪಕ ರೀತಿಯಲ್ಲಿ ಸ್ವಚ್ಛಗೊಳಿಸುವಂತೆ ಹೇಳಿದ್ದೇನೆ. ನಿರಂತರ ಮಳೆಯಿಂದ ತುಂಬಾ ಕಡೆ ಸಮಸ್ಯೆಗಳಾಗಿದ್ದು ಮುಂದಿನ ದಿನಗಳಲ್ಲಿ ಸಮಸ್ಯೆಗೆ ಪರಿಹಾರ ಒದಗಿಸಲಾಗುವುದು ಎಂದು ತಿಳಿಸಿದರು.
ಕುಂದಾಪುರ : ಉಡುಪಿ ಜಿಲ್ಲೆಯಲ್ಲಿ ಮಳೆ ಮತ್ತೆ ಅಬ್ಬರಿಸತೊಡಗಿದೆ. ಈಗಾಗಲೇ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಹಿನ್ನಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಜಿಲ್ಲೆಯಲ್ಲಿ ಹರಿಯುವ ನದಿಗಳು ಮತ್ತೆ ಪ್ರವಾಹ ಪರಿಸ್ಥಿತಿಯನ್ನು ನಿರ್ಮಾಣ ಮಾಡಿದೆ.
ಉಡುಪಿ ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿದೆ. ಪಶ್ಚಿಮ ಘಟ್ಟದ ತಪ್ಪಲು ಹೆಬ್ರಿ-ಕಾರ್ಕಳದಲ್ಲಿ ನಿರಂತರ ಮಳೆಯಾಗುತ್ತಿದೆ. ಕುಬ್ಜಾ ನದಿ ಮತ್ತೆ ತುಂಬಿ ಹರಿಯುತ್ತಿದೆ. ಕಮಲಶಿಲೆ ಬ್ರಾಹ್ಮೀ ದುರ್ಗಾಪರಮೇಶ್ವರಿ ದೇಗುಲಕ್ಕೆ ನೀರು ನುಗ್ಗಿದ್ದು. ಈ ವರ್ಷದಲ್ಲಿ ಎರಡನೇ ಬಾರಿಗೆ ನದಿ ನೀರು ದೇಗುಲದ ಗರ್ಭಗುಡಿಗೆ ಪ್ರವೇಶಿಸಿದೆ. ನಿನ್ನೆ ರಾತ್ರಿ 12.30 ರಿಂದ 2 ಗಂಟೆಯವರೆಗೆ ದೇಗುಲಕ್ಕೆ ನದಿ ನೀರು ಪ್ರವೇಶಿಸಿ ದುರ್ಗಾಪರಮೇಶ್ವರಿ ದೇವಿಯ ಪಾದ ಸ್ಪರ್ಶಿಸಿದೆ. ಈ ವೇಳೆ ವಿಶೇಷ ಪೂಜೆ ಸಲ್ಲಿಸಲಾಯಿತು. ಬಳಿಕ ನದಿಯ ಮಟ್ಟ ಇಳಿಕೆಯಾಗಿ ನೀರು ಸಂಪೂರ್ಣ ಇಳಿದು ಹೋಗಿದೆ.
ಮೂಡುಬಿದಿರೆ : ಭಾರೀ ಮಳೆಯಿಂದ ಮನೆಯೊಂದು ಸಂಪೂರ್ಣ ಕುಸಿದು ಬಿದ್ದ ಪರಿಣಾಮ ಮಹಿಳೆಯೋರ್ವರು ಮೃತಪಟ್ಟಿರುವ ಘಟನೆ ನೆಲ್ಲಿಕಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಬೋರುಗುಡ್ಡೆಯ ಜನತಾ ಕಾಲನಿಯಲ್ಲಿ ಬುಧವಾರ ರಾತ್ರಿ ನಡೆದಿದೆ.
ಮೃತಪಟ್ಟ ಮಹಿಳೆಯನ್ನು ಗೋಪಿ (68) ಎಂದು ಗುರುತಿಸಲಾಗಿದೆ. ಬುಧವಾರ ರಾತ್ರಿ ಸುರಿದ ಭಾರೀ ಮಳೆಯಿಂದಾಗಿ ಗೋಪಿ ಅವರ ಮನೆ ಕುಸಿದು ಬಿದ್ದಿದ್ದು ಈ ಸಂದರ್ಭದಲ್ಲಿ ಗೋಪಿ ಅವರು ಗಾಯಗೊಂಡಿದ್ದರು. ಮನೆಯಲ್ಲಿದ್ದ ಅವರ ಮಕ್ಕಳೆಲ್ಲಾ ಅಪಾಯದಿಂದ ಪಾರಾಗಿದ್ದಾರೆ.
ಗಾಯಗೊಂಡಿದ್ದ ಗೋಪಿ ಅವರನ್ನು ಪಂಚಾಯತ್ ಅಧ್ಯಕ್ಷ ಉದಯ ಪೂಜಾರಿ, ಮಾಜಿ ಅಧ್ಯಕ್ಷ ಜಯಂತ ಹೆಗ್ಡೆ ಸಹಿತ ಕೆಲವರು ಹೊಸ್ಮಾರಿನ ಕ್ಲಿನಿಕ್ನಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿದ ಬಳಿಕ ಕಾರ್ಕಳದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಘಟನಾ ಸ್ಥಳಕ್ಕೆ ಶಾಸಕ ಉಮಾನಾಥ ಕೋಟ್ಯಾನ್, ತಹಶಿಲ್ದಾರ್ ಪ್ರದೀಪ್ ಕುರ್ಡೇಕರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ದಕ್ಷಿಣ ಕನ್ನಡ : ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಬುಧವಾರ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಅವರು ಅಧಿಕಾರಿಗಳೊಂದಿಗೆ ಜಿಲ್ಲೆಯ ವಿವಿಧ ನೆರೆ ಪೀಡಿತ ಹಾಗೂ ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.
ಜಿಲ್ಲಾಧಿಕಾರಿಗಳು ಪರಿಸ್ಥಿತಿಯನ್ನು ಖುದ್ದು ಪರಿಶೀಲಿಸಿದರು. ಸ್ಥಳೀಯ ಸಾರ್ವಜನಿಕರೊಂದಿಗೆ ಅಹವಾಲು ಆಲಿಸಿದ ಅವರು, ನೆರೆ ಪೀಡಿತ ಪ್ರದೇಶಗಳಲ್ಲಿ ಹಾಗೂ ಸಂಭಾವ್ಯ ನೆರೆ ಪ್ರದೇಶಗಳಲ್ಲಿ ನಿರಂತರ ನಿಗಾ ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ನೆರೆ ಪ್ರದೇಶಗಳ ನಿವಾಸಿಗಳ ಸ್ಥಳಾಂತರ ಮತ್ತು ಕಾಳಜಿ ಕೇಂದ್ರಗಳ ಸ್ಥಾಪನೆಯ ಬಗ್ಗೆ ಸ್ಥಳೀಯ ಅಧಿಕಾರಿಗಳಿಗೆ ಅವರು ಸೂಚನೆ ನೀಡಿದರು. ಕಾಳಜಿ ಕೇಂದ್ರಗಳಲ್ಲಿ ತಂಗಿರುವ ನಾಗರಿಕರೊಂದಿಗೆ ಸಮಾಲೋಚಿಸಿ, ಧೈಯ೯ ತುಂಬಿದ ಜಿಲ್ಲಾಧಿಕಾರಿಗಳು, ಸಹಜ ಪರಿಸ್ಥಿತಿ ಬರುವವರೆಗೆ ಎಲ್ಲ ರೀತಿಯ ನೆರವು ನೀಡಲಾಗುವುದು ಎಂದು ತಿಳಿಸಿದರು. ಹರೇಕಳ, ಬಂಟ್ವಾಳ, ಆಲಡ್ಕ, ಉಪ್ಪಿನಂಗಡಿ ಮತ್ತಿತರ ಕಡೆಗೆ ಜಿಲ್ಲಾಧಿಕಾರಿಗಳು ಭೇಟಿ ನೀಡಿ, ನೆರೆ ಪರಿಸ್ಥಿತಿ ವೀಕ್ಷಿಸಿದರು.
ಮಂಗಳೂರು ಉಪವಿಭಾಗಾಧಿಕಾರಿ ಹರ್ಷವರ್ಧನ್, ಬಂಟ್ವಾಳ ತಹಶೀಲ್ದಾರ್ ಅರ್ಚನಾ ಭಟ್, ಪುತ್ತೂರು ತಹಶೀಲ್ದಾರ್ ಪುರಂದರ ಹೆಗ್ಡೆ, ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಉಡುಪಿ : ಕಳೆದ ಮೂರು ದಿನಗಳಿಂದ ಉಡುಪಿ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢ ಶಾಲೆ, ಪದವಿಪೂರ್ವ ಕಾಲೇಜುಗಳಿಗೆ ಆಗಸ್ಟ್ 1 (ಗುರುವಾರ)ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ.

ಉಳಿದಂತೆ ಎಲ್ಲಾ ಪದವಿ, ಸ್ನಾತಕೊತ್ತರ ಪದವಿ, ಡಿಪ್ಲೋಮ, ಇಂಜಿನಿಯರಿಂಗ್, ಐ.ಟಿ.ಐ ಗಳಿಗೆ ರಜೆ ಘೋಷಿಸಿರುವುದಿಲ್ಲ.
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಸುರಿಯುವ ಎಚ್ಚರಿಕೆಯ ಹಿನ್ನೆಲೆಯಲ್ಲಿ ನಾಳೆ (ಆ.1) ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು, (12ನೇ ತರಗತಿವರೆಗೆ) ರಜೆಯನ್ನು ಘೋಷಿಸಿ ದ.ಕ ಜಿಲ್ಲಾಧಿಕಾರಿ ಮುಲ್ಲೈಮುಗಿಲನ್ ಆದೇಶಿಸಿದ್ದಾರೆ.
ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿದ್ದು ಆಗಸ್ಟ್ 1ರಂದು ಆರೆಂಜ್ ಅಲರ್ಟ್ ಘೋಷಣೆಯಾಗಿರುವ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಈ ತುರ್ತು ಕ್ರಮಗಳನ್ನು ಕೈಗೊಂಡಿದೆ.
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶಿಸಿದ್ದಾರೆ.
ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು, (12ನೇ ತರಗತಿವರೆಗೆ) ಜು 31 ರಂದು ರಜೆಯನ್ನು ಘೋಷಿಸಲಾಗಿದೆ.
ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ನಾಳೆ ರೆಡ್ ಅಲರ್ಟ್ ಘೋಷಣೆಯಾಗಿರುವ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಈ ತುರ್ತು ಕ್ರಮಗಳನ್ನು ಕೈಗೊಂಡಿದೆ.
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೋಮವಾರ ರಾತ್ರಿಯಿಂದ ಮಳೆ ನಿರಂತರವಾಗಿ ಧಾರಾಕಾರವಾಗಿ ಸುರಿಯುತ್ತಿದ್ದು, ನೇತ್ರಾವತಿ ನದಿ ಉಕ್ಕಿ ಹರಿಯುತ್ತಿದೆ. ಪರಿಣಾಮ ಉಪ್ಪಿನಂಗಡಿ ಸಮೀಪದ ಪಂಜಳದಲ್ಲಿ ನದಿ ನೀರು ರಾಷ್ಟ್ರೀಯ ಹೆದ್ದಾರಿಗೆ ನುಗ್ಗಿದ ಘಟನೆ ನಡೆದಿದೆ.
ಉಪ್ಪಿನಂಗಡಿಯಲ್ಲಿ ನೇತ್ರಾವತಿ ನದಿಯಲ್ಲಿ ನೀರು 29.6ಮೀಟರ್ನಲ್ಲಿದ್ದು, ಅಪಾಯದ ಮಟ್ಟವನ್ನು ಮೀರಿ ಹರಿಯುತ್ತಿದೆ. ಪರಿಣಾಮ ನದಿನೀರು ಹಲವಾರು ಮನೆಗಳು ಸೇರಿದಂತೆ ಕೃಷಿ ತೋಟಗಳಿಗೆ ನುಗ್ಗಿ ಅವಾಂತರ ಸೃಷ್ಟಿಯಾಗಿದೆ. ಅಲ್ಲದೆ ಪಂಜಳದಲ್ಲಿ ನದಿ ನೀರು ರಾಷ್ಟ್ರೀಯ ಹೆದ್ದಾರಿಗೆ ನುಗ್ಗಿದ ಪರಿಣಾಮ ರಸ್ತೆ ಸಂಚಾರ ವ್ಯವಸ್ಥೆಗೂ ಸಂಕಷ್ಟ ತಂದೊಡ್ಡಿದೆ. ಸದ್ಯ ಸ್ಥಳದಲ್ಲಿ ಪೊಲೀಸರು, ಅಧಿಕಾರಿಗಳು, ಸ್ಥಳೀಯರ ನೆರವಿನಿಂದ ಸುರಕ್ಷಿತವಾಗಿ ವಾಹನಗಳನ್ನು ಕಳುಹಿಸುತ್ತಿದ್ದಾರೆ. ಅಲ್ಲದೆ ರಸ್ತೆಯುದ್ದಕ್ಕೂ ವಾಹನಗಳು ನಿಂತಿರುವ ದೃಶ್ಯ ವೀಡಿಯೋದಲ್ಲಿ ಸೆರೆಯಾಗಿದೆ.