ಉಡುಪಿ : ಬ್ರಹ್ಮಾವರದ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಫ್ಲೈಓವರ್ ನಿರ್ಮಾಣ ಅನಿವಾರ್ಯವಾಗಿದ್ದು, ಇದಕ್ಕಾಗಿ ಅಂದಾಜುಪಟ್ಟಿಯನ್ನು ತಯಾರಿಸುವಂತೆ ಸೂಚನೆ ನೀಡಲಾಗಿದ್ದು, ತಕ್ಷಣಕ್ಕೆ ಮಹೇಶ್ ಆಸ್ಪತ್ರೆಯಿಂದ ಎಸ್‌ಎಂಎಸ್ ವಿದ್ಯಾಸಂಸ್ಥೆಯವರೆಗೆ ಎರಡೂ ಕಡೆಗಳಲ್ಲಿ ಸರ್ವಿಸ್ ರಸ್ತೆಯನ್ನು ನಿರ್ಮಿಸುವಂತೆ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಅವರು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಸೂಚನೆಗಳನ್ನು ನೀಡಿದ್ದಾರೆ.
ಮಣಿಪಾಲದಲ್ಲಿ ಜಿಲ್ಲಾ ಪಂಚಾಯತ್‌ನ ಡಾ.ವಿ.ಎಸ್.ಆಚಾರ್ಯ ಸಭಾಂಗಣದಲ್ಲಿ ರಾಷ್ಟ್ರೀಯ ಹೆದ್ದಾರಿ-66 ರಲ್ಲಿ ಬ್ರಹ್ಮಾವರದ ಆಕಾಶವಾಣಿ ಜಂಕ್ಷನ್‌ನಿಂದ ಎಸ್‌ಎಂಎಸ್ ಪದವಿ ಪೂರ್ವ ಕಾಲೇಜುವರೆಗೆ ಫೈ ಓವರ್ ಅಥವಾ ಅಂಡರ್‌ಪಾಸ್ ನಿರ್ಮಿಸುವ ಕುರಿತು ಹಾಗೂ ರಾಷ್ಟ್ರೀಯ ಹೆದ್ದಾರಿಗೆ ಸಂಬಂಧಿಸಿದ ಕುಂದುಕೊರತೆಗಳ ಕುರಿತು ಚರ್ಚಿಸುವ ಸಲುವಾಗಿ ಆಯೋಜಿಸಲಾದ ಸಭೆಯಲ್ಲಿ ಅವರು ಅಧಿಕಾರಿಗಳನ್ನುದ್ದೇಶಿಸಿ ಮಾತನಾಡುತ್ತಿದ್ದರು.
ಬ್ರಹ್ಮಾವರ ರಾ.ಹೆದ್ದಾರಿಯಲ್ಲಿ ಹೆಚ್ಚುತ್ತಿರುವ ಅಪಘಾತ ಹಾಗೂ ಜೀವಹಾನಿಯನ್ನು ತಪ್ಪಿಸಲು ಕೈಗೊಳ್ಳ ಬೇಕಾದ ಪರಿಹಾರೋಪಾಯಗಳ ಕುರಿತು ವರದಿ ನೀಡಲು ನೇಮಿಸಿದ ತಾಂತ್ರಿಕ ಸಮಿತಿ ನೀಡಿದ ವರದಿಯ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು.
ಬ್ರಹ್ಮಾವರದಲ್ಲಿ ಫ್ಲೈಓವರ್ ನಿರ್ಮಾಣ ಅನಿವಾರ್ಯವಾಗಿದೆ. ಈ ಬಗ್ಗೆ ಪರಿಶೀಲಿಸಿ ಅಂದಾಜು ಪಟ್ಟಿಯನ್ನು ತಯಾರಿಸಲು ಎನ್‌ಎಚ್ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು. ಈ ವರದಿಯನ್ನು ಮುಂದಿನ ಕ್ರಮಕ್ಕಾಗಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಮೂಲಕ ಕೇಂದ್ರ ಸರಕಾರಕ್ಕೆ ಕಳುಹಿಸಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದರು.