ಉಡುಪಿ : ಜಿಲ್ಲೆಯಲ್ಲಿ ಹೊಸ ಕೈಗಾರಿಕಾ ಪ್ರದೇಶಗಳ ನಿರ್ಮಾಣಕ್ಕೆ ಗುರುತಿಸಿರುವ ಶಿವಪುರದ ಕೆರೆಬೆಟ್ಟು, ಕಾರ್ಕಳದ ನಿಟ್ಟೆ ಹಾಗೂ ಬ್ರಹ್ಮಾವರದ ಉಳ್ಳೂರು ಪ್ರದೇಶ ವ್ಯಾಪ್ತಿಯಲ್ಲಿ ಭೂಸ್ವಾಧೀನ ಪ್ರಕ್ರಿಯೆಯನ್ನು ತ್ವರಿತವಾಗಿ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಅವರು ಭೂಸ್ವಾಧೀನ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಕೈಗಾರಿಕಾ ಸ್ಪಂದನ ಸಮಿತಿ ಸಭೆ, ಕ್ಲಸ್ಟರ್ ಸಮಿತಿ ಸಭೆ, ಜಿಲ್ಲಾ ಮಟ್ಟದ ಏಕಗವಾಕ್ಷಿ ಸಮಿತಿ ಸಭೆ, ಜಿಲ್ಲಾ ಮಟ್ಟದ ರಫ್ತು ಉತ್ತೇಜನಾ ಸಮಿತಿ ಸಭೆ ಹಾಗೂ ಪ್ರಧಾನಮಂತ್ರಿಗಳ ಉದ್ಯೋಗ ಸೃಜನಾ ಯೋಜನೆಯ ಜಿಲ್ಲಾ ಮಟ್ಟದ ಅನುಷ್ಠಾನ ಸಮಿತಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.
ಜಿಲ್ಲೆಯಲ್ಲಿ ಹೊಸ ಕೈಗಾರಿಕಾ ಪ್ರದೇಶಗಳನ್ನು ನಿರ್ಮಿಸಿ, ಉದ್ಯೋಗಗಳನ್ನು ಸೃಷ್ಟಿಸುವ ಮೂಲಕ ಸ್ಥಳೀಯ ಜನರಿಗೆ ಉದ್ಯೋಗ ಲಭಿಸಬೇಕೆಂಬ ಆಶಯದೊಂದಿಗೆ ಹೆಬ್ರಿ ತಾಲೂಕಿನ ಶಿವಪುರ ಹಾಗೂ ಕೆರೆಬೆಟ್ಟು ಗ್ರಾಮಗಳಲ್ಲಿ 113.59 ಎಕ್ರೆ, ಕಾರ್ಕಳ ತಾಲೂಕಿನ ನಿಟ್ಟೆಯಲ್ಲಿ 50.42 ಎಕ್ರೆ ಹಾಗೂ ಬ್ರಹ್ಮಾವರ ತಾಲೂಕಿನ ಉಳ್ಳೂರಿನಲ್ಲಿ 101.19 ಎಕರೆ ಜಮೀನಿನ ಭೂ ಸ್ವಾಧೀನ ಪ್ರಕ್ರಿಯೆಯನ್ನು ಶೀಘ್ರದಲ್ಲಿಯೇ ಪೂರ್ಣಗೊಳಿಸಿ ಕೆಐಎಡಿಬಿಗೆ ಹಸ್ತಾಂತರಿಸಬೇಕು ಎಂದು ಅವರು ನಿರ್ದೇಶನ ನೀಡಿದರು.
ಜಿಲ್ಲೆಯಲ್ಲಿ ಸಣ್ಣ ಕೈಗಾರಿಕೆ ಹಾಗೂ ಮದ್ಯಮ ಕೈಗಾರಿಕೆಗಳಲ್ಲಿ ಡಾ. ಸರೋಜಿನಿ ಮಹಿಷಿ ವರದಿಯಂತೆ ಸ್ಥಳೀಯರಿಗೆ ಉದ್ಯೋಗಾವಕಾಶ ಕಲ್ಪಿಸಬೇಕು. ಕಳೆದ ಮಾರ್ಚ್ ವೇಳೆಗೆ ಜಿಲ್ಲೆಯ 21ಕ್ಕೂ ಹೆಚ್ಚು ಕೈಗಾರಿಕೆಗಳಲ್ಲಿ ಪ್ರಗತಿ ಕಂಡು ಬಂದಿಲ್ಲ. ಕೇವಲ ಡಿ ಗ್ರೂಪ್ ಹುದ್ದೆಗೆ ಮಾತ್ರ ಅವಕಾಶ ಕಲ್ಪಿಸಲಾಗುತ್ತಿದೆ. ಎಲ್ಲಾ ಹುದ್ದೆಗಳಲ್ಲಿಯೂ ಸ್ಥಳೀಯರ ನೇಮಕಾತಿಗೆ ಅವಕಾಶ ಮಾಡಿಕೊಡಬೇಕು. ನೇಮಕಾತಿಗೆ ಸಂಬಂಧಪಟ್ಟ ಸೂಕ್ತ ದಾಖಲೆಗಳನ್ನು ನಿರ್ವಹಣೆ ಮಾಡಬೇಕು ಎಂದವರು ಸೂಚನೆ ನೀಡಿದರು.