ಬಾಕಿ ಇರುವ ಮನೆಹಾನಿ, ಬೆಳೆಹಾನಿ ಪರಿಹಾರ ತಕ್ಷಣ ವಿತರಿಸಿ – ಅಧಿಕಾರಿಗಳಿಗೆ ಎಡಿಸಿ ಸೂಚನೆ

ಉಡುಪಿ : ಕಳೆದ ಮುಂಗಾರು ಮಳೆ ಸಂದರ್ಭದಲ್ಲಿ ಮನೆಹಾನಿ ಹಾಗೂ ಬೆಳೆಹಾನಿಗೆ ಒಳಗಾದವರಿಗೆ ಪರಿಹಾರದ ಹಣ ನೀಡುವುದು ಬಾಕಿ ಇದ್ದಲ್ಲಿ ಆದಷ್ಟು ಬೇಗನೆ ಅರ್ಹ ಫಲಾನುಭವಿಗಳಿಗೆ ಪರಿಹಾರದ ಹಣವನ್ನು ನೀಡುವಂತೆ ಅಪರ ಜಿಲ್ಲಾಧಿಕಾರಿ ಮಮತಾದೇವಿ ಜಿ.ಎಸ್. ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.

ಜಿಲ್ಲೆಯಲ್ಲಿ ಈ ಬಾರಿ ಸುರಿದ ಅಧಿಕ ಮುಂಗಾರು ಮಳೆಯಿಂದ ಉಂಟಾದ ಮೂಲಸೌಕರ್ಯಗಳ ಹಾನಿಯ ಪುನ‌ರ್ ನಿರ್ಮಾಣ ಕಾಮಗಾರಿಗಳನ್ನು ಶೀಘ್ರದಲ್ಲಿಯೇ ಪೂರ್ಣಗೊಳಿಸಬೇಕು ಎಂದು ತಾಕೀತು ಮಾಡಿದ ಎಡಿಸಿ, ಪ್ರಾಕೃತಿಕ ವಿಕೋಪ ಯಾವುದೇ ಗಳಿಗೆಯಲ್ಲಿ ಸಂಭವಿಸುವ ಸಾಧ್ಯತೆ ಇರುವುದರಿಂದ ಅವುಗಳನ್ನು ಎದುರಿಸಲು ಸದಾ ಸನ್ನದ್ಧರಾಗಿರಬೇಕು ಎಂದು ತಿಳಿಸಿದರು.

ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯಲ್ಲಿ ಜನವರಿ ತಿಂಗಳಿನಿಂದ ಈವರೆಗೆ ವಾಡಿಕೆಗಿಂತ ಹೆಚ್ಚು ಮಳೆ ಸುರಿದು ರಸ್ತೆ, ವಿದ್ಯುತ್ ಕಂಬ ಸೇರಿದಂತೆ ಹಲವು ಮೂಲಸೌಕರ್ಯಗಳ ಕಾಮಗಾರಿಗಳನ್ನು ಕೈಗೊಳ್ಳಲು ಈಗಾಗಲೇ ಅನುದಾನ ಬಿಡುಗಡೆಯಾಗಿದೆ. ಅವುಗಳನ್ನು ಶೀಘ್ರದಲ್ಲಿಯೇ ಪೂರ್ಣಗೊಳಿಸಬೇಕು ಎಂದು ಸೂಚನೆ ನೀಡಿದರು.

ಯಾವುದೇ ಇಲಾಖೆ ಈಗಾಗಲೇ ಆಗಿರುವ ಮನೆಹಾನಿ, ಮಾನವ ಜೀವ ಹಾನಿ, ಜಾನುವಾರು ಜೀವ ಹಾನಿಗೆ ಸಂಬಂಧಿಸಿದಂತೆ ಪರಿಹಾರ ಬಾಕಿ ಇರಿಸಿಕೊಳ್ಳಬಾರದು. ಶಾಲೆ, ಅಂಗನವಾಡಿ ಹಾಗೂ ರಸ್ತೆ ತುರ್ತು ದುರಸ್ಥಿ ಕಾರ್ಯಗಳಿಗೆ ಬಿಡುಗಡೆಯಾಗಿರುವ ಅನುದಾನವನ್ನು ಸಮರ್ಪಕವಾಗಿ ಬಳಸಿಕೊಂಡು ತ್ವರಿತಗತಿಯಲ್ಲಿ ಕೆಲಸಗಳನ್ನು ಪೂರ್ಣಗೊಳಿಸಬೇಕು ಎಂದ ಮಮತಾ ದೇವಿ, ತಹಶೀಲ್ದಾರರು ಕಾಮಗಾರಿ ನಡೆಯುವ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಬೇಕು ಎಂದು ಸೂಚನೆ ನೀಡಿದರು.

Related posts

ಕರ್ನಾಟಕ ಕ್ರೀಡಾಕೂಟದಲ್ಲಿ ಸಮರಾಗೆ ಚಿನ್ನದ ಪದಕ

ಯಕ್ಷಗಾನ ಪ್ರದರ್ಶನಕ್ಕೆ ಅಡ್ಡಿ – ಬ್ರಿಟಿಷ್ ಆಡಳಿತವನ್ನೂ ಮೀರಿಸಿದ ಸಿದ್ಧರಾಮಯ್ಯ ಸರ್ಕಾರ : ಯಶ್‌ಪಾಲ್ ಸುವರ್ಣ

ಮಾರಿದ ಹಳೆಯ ಬಸ್ಸನ್ನು ಕದ್ದು ತಂದ ಆರೋಪ – ತಂದೆ ಮಗನ ವಿರುದ್ಧ ದೂರು ದಾಖಲು !