Saturday, January 18, 2025
Banner
Banner
Banner
Home » ಮಹಿಳೆಯರ ಸಬಲೀಕರಣಕ್ಕೆ ಸರ್ಕಾರ ಜಾರಿಗೆ ತಂದಿರುವ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ : ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ

ಮಹಿಳೆಯರ ಸಬಲೀಕರಣಕ್ಕೆ ಸರ್ಕಾರ ಜಾರಿಗೆ ತಂದಿರುವ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ : ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ

by NewsDesk

ಉಡುಪಿ : ಮಹಿಳೆಯರ ಸುರಕ್ಷತೆ, ಭದ್ರತೆ ಹಾಗೂ ಸಬಲೀಕರಣಕ್ಕಾಗಿ ಸರಕಾರ ಜಾರಿಗೆ ತಂದಿರುವ ಮಿಷನ್ ಶಕ್ತಿ ಯೋಜನೆಯನ್ನು ಹೆಚ್ಚು ಪರಿಣಾಮ ಕಾರಿಯಾಗಿ ಅನುಷ್ಠಾನಗೊಳಿಸುವುದರೊಂದಿಗೆ ಮಹಿಳೆಯರು ಸ್ವಾವಲಂಬಿ ಜೀವನ ನಡೆಸಲು ಅನುವು ಮಾಡಿಕೊಡಲು ಮುಂದಾಗಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಸೂಚನೆ ನೀಡಿದರು.

ಅವರು ಗುರುವಾರ ನಗರದ ಮಣಿಪಾಲದ ರಜತಾದ್ರಿಯ ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ನಡೆದ ಮಹಿಳಾ ಮತ್ತು ಮಕ್ಕಳ ಅಭಿವೃಧ್ಧಿ ಇಲಾಖೆಯ ಜಿಲ್ಲಾ ಮಟ್ಟದ ವಿವಿಧ ಸಮನ್ವಯ ಸಮಿತಿ ಸಭೆಗಳ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.

ಸರಕಾರವು ಮಹಿಳೆಯರ ಹಾಗೂ ಮಕ್ಕಳ ಅಭಿವೃದ್ಧಿಗೆ ಅನೇಕ ಯೋಜನೆ ಮತ್ತು ಕಾರ್ಯಕ್ರಮಗಳನ್ನು ರೂಪಿಸಿದೆ. ಇವುಗಳ ಬಗ್ಗೆ ಅವರುಗಳಿಗೆ ಅರಿವು ಮೂಡಿಸುವುದರ ಜೊತೆಗೆ ಅದನ್ನು ಪಲಫ್ರದವಾಗುವಂತೆ ನೋಡಿಕೊಳ್ಳುವುದು ಅಧಿಕಾರಿಗಳ ಕರ್ತವ್ಯವಾಗಿದ್ದು, ಇದನ್ನು ಜವಾಬ್ದಾರಿಯುತವಾಗಿ ಮಾಡಬೇಕೆಂದು ಸೂಚನೆ ನೀಡಿದರು.

ಸಮಾಜದಲ್ಲಿ ಲಿಂಗತಾರತಮ್ಯ ಹೋಗಲಾಡಿಸಿ, ಹೆಣ್ಣು ಮಕ್ಕಳ ರಕ್ಷಣೆ ಹಾಗೂ ಶಿಕ್ಷಣಕ್ಕೆ ಉತ್ತೇಜನ ನೀಡಬೇಕು. ಹೆಣ್ಣು ಮಕ್ಕಳ ವೈಯಕ್ತಿಕ ನೈರ್ಮಲ್ಯ ಹಾಗೂ ಸ್ವಚ್ಛತೆ ಕುರಿತು ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಯುವಜನರ ಸಹಭಾಗಿತ್ವದಲ್ಲಿ ಹಮ್ಮಿಕೊಳ್ಳಬೇಕು ಎಂದರು.

ಜಿಲ್ಲೆಯಲ್ಲಿ ಪ್ರಸವಪೂರ್ವ ಲಿಂಗ ಪತ್ತೆ ಹಾಗೂ ಭ್ರೂಣ ಹತ್ಯೆ ಪ್ರಕರಣಗಳು ನಡೆಯದಂತೆ ಅಗತ್ಯವಿರುವ ಎಲ್ಲಾ ರೀತಿಯ ಎಚ್ಚರಿಕಾ ಕ್ರಮಗಳನ್ನು ವಹಿಸಬೇಕು. ಸಾರ್ವಜನಿಕರಿಂದ ಈ ಬಗ್ಗೆ ಸಣ್ಣ ಮಾಹಿತಿಗಳೂ ಬಂದರೆ ಅವುಗಳ ಬಗ್ಗೆ ನಿರ್ಲಕ್ಷ್ಯ ವಹಿಸದೇ ಸೂಕ್ಷ್ಮವಾಗಿ ತನಿಖೆ ಕೈಗೊಳ್ಳಬೇಕು. ಒಂದೊಂಮ್ಮೆ ಉಲ್ಲಂಘನೆ ಆಗಿದ್ದಲ್ಲಿ ಕಾನೂನಿನ ಅಡಿಯಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.

ಪ್ರಧಾನಮಂತ್ರಿ ಮಾತೃ ವಂದನಾ ಯೋಜನೆಯಡಿ ಪ್ರಸಕ್ತ ಸಾಲಿನಲ್ಲಿ 5928 ವಾರ್ಷಿಕ ಗುರಿಯನ್ನು ಹೊಂದಿ, 4333 ಗರ್ಭಿಣಿ ಸ್ತ್ರೀಯರು ಹಾಗೂ ಬಾಣಂತಿಯನ್ನು ಫಲಾನುಭವಿಗಳನ್ನಾಗಿಸಿ, ಈಲ್ಲಿವರೆಗೆ ಮೊದಲನೇ ಕಂತಿನಲ್ಲಿ 4314 ಫಲಾನುಭವಿಗಳಿಗೆ 1,29,42,000 ಹಣವನ್ನು ಪಾವತಿ ಮಾಡಲಾಗಿದೆ. ಎರಡನೇ ಕಂತಿನಲ್ಲಿ 1,56,000 ರೂ. ಹಣ ಪಾವತಿಸಿದ್ದು, ಬಾಕಿ ಉಳಿದವರಿಗೆ ಶೀಘ್ರವಾಗಿ ವಿತರಿಸಲು ಕ್ರಮ ಕೈಗೊಳ್ಳಬೇಕು. ಸಣ್ಣ-ಪುಟ್ಟ ಕಾರಣಗಳಿಗಾಗಿ ಯಾರೊಬ್ಬರೂ ಈ ಯೋಜನೆಯಿಂದ ವಂಚಿತರಾಗದಂತೆ ನೋಡಿಕೊಳ್ಳಬೇಕು ಎಂದರು.

ನೊಂದ ಮಹಿಳೆಯರಿಗೆ ಒಂದೇ ಸೂರಿನಡಿ ಸೌಲಭ್ಯ ಕಲ್ಪಿಸುವ ಸಖಿ ಒನ್ ಸ್ಟಾಪ್ ಸೆಂಟರ್‌ನಲ್ಲಿ 2024 ರ ಏಪ್ರಿಲ್‌ನಿಂದ ಜೂನ್ 2024 ರ ವರೆಗೆ ಒಟ್ಟು 64 ಪ್ರಕರಣಗಳು ದಾಖಲಾಗಿದ್ದು, ಇವುಗಳಲ್ಲಿ 30 ಪ್ರಕರಣಗಳು ಇತ್ಯರ್ಥವಾಗಿದ್ದು, ಬಾಕಿ ಉಳಿದ 34 ಪ್ರಕರಣಗಳನ್ನು ಶೀಘ್ರವಾಗಿ ಇತ್ಯರ್ಥಪಡಿಸಲು ಕ್ರಮವಹಿಸಬೇಕು. ನ್ಯಾಯಾಲಯದಲ್ಲಿರುವ ಪ್ರಕರಣಗಳನ್ನು ಕಾನೂನು ಸಲಹೆಗಾರರ ನೆರವಿನೊಂದಿಗೆ ಬಗೆಹರಿಸಲು ಮುಂದಾಗಬೇಕು ಎಂದರು.

ಸಾಮಾಜಿಕ, ಆರ್ಥಿಕ ಕಾರಣದಿಂದ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಮರಳಿ ಶಾಲೆಗೆ ಸೇರಿಸಿಕೊಳ್ಳಲು ವಿವಿಧ ಇಲಾಖೆಯ ಅಧಿಕಾರಿಗಳ ಸಮನ್ವಯದೊಂದಿಗೆ ಆಗಬೇಕು. ಯಾರೊಬ್ಬ ಮಕ್ಕಳೂ ಸಹ ಶಾಲೆಯಿಂದ ಹೊರಗುಳಿಯದಂತೆ ನೋಡಿಕೊಳ್ಳಬೇಕು ಎಂದರು.

ಮಣಿಪಾಲದ ಉದ್ಯೋಗಸ್ಥ ಮಹಿಳೆಯರ ವಸತಿಗೃಹದ ನಿರ್ವಹಣೆಯನ್ನು ಉತ್ತಮವಾಗಿ ಮಾಡಬೇಕು. ಆಹಾರ ವಿತರಣೆಯಲ್ಲಿ ಸುಧಾರಣೆ ತರಬೇಕು. ಆಗಿಂದಾಗ್ಗೆ ವಸತಿಗೃಹದ ವ್ಯವಸ್ಥಾಪನಾ ಸಮಿತಿ ಸಭೆಯನ್ನು ನಡೆಸಿ, ಕುಂದುಕೊರತೆಗಳನ್ನು ಬಗೆಹರಿಸಬೇಕೆಂದರು.

ಜಿಲ್ಲೆಯಲ್ಲಿ ಏಪ್ರಿಲ್‌ನಿಂದ ಜೂನ್‌ವರೆಗೆ 26 ಸೇರಿದಂತೆ ಹಳೆಯ ಬಾಕಿ ಉಳಿದ 32 ಕೌಟುಂಬಿಕ ಹಿಂಸೆ ಪ್ರಕರಣಗಳಿದ್ದು, ಅವುಗಳಲ್ಲಿ 32 ಪ್ರಕರಣಗಳು ಇತ್ಯರ್ಥಗೊಂಡಿದ್ದು, 26 ಪ್ರಕರಣಗಳು ಬಾಕಿ ಉಳಿದಿವೆ. ಇವುಗಳಿಗೆ ಆದ್ಯತೆಯ ಮೇಲೆ ನಿಯಮಾನುಸಾರ ಆದಷ್ಟು ಜರೂರಾಗಿ ನ್ಯಾಯ ಒದಗಿಸಿಕೊಡಬೇಕು ಎಂದು ಸೂಚನೆ ನೀಡಿದರು. ಜಿಲ್ಲೆಯಲ್ಲಿ ಬಾಲ್ಯ ವಿವಾಹ 1 ಪ್ರಕರಣ ಕಂಡುಬಂದಿದೆ. ಮುಂದಿನ ದಿನಗಳಲ್ಲಿ ಯಾವುದೇ ಒಂದು ಪ್ರಕರಣಗಳು ಆಗದಂತೆ ಇಲಾಖೆಯ ಅಧಿಕಾರಿಗಳು ಸಮರ್ಪಕವಾಗಿ ಕಾರ್ಯನಿರ್ವಹಿಸಬೇಕು. ಗ್ರಾಮ ಪಂಚಾಯತಿಗಳಲ್ಲಿ ರಚಿಸಿರುವ ಕಾವಲು ಸಮಿತಿ ಸಭೆಗಳನ್ನು ನಿಯಮಿತವಾಗಿ ನಡೆಸುವುದರೊಂದಿಗೆ ಅಗತ್ಯ ಕ್ರಮವಹಿಸಬೇಕು ಎಂದರು.ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ಮಾತನಾಡಿ, ಕಡಿಮೆ ತೂಕ ಹಾಗೂ ತೀವ್ರ ಅಪೌಷ್ಠಿಕತೆ ಹೊಂದಿದ ಮಕ್ಕಳ ಪೌಷ್ಠಿಕ ಮಟ್ಟವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಪ್ರತೀ ತಿಂಗಳು ಆರೋಗ್ಯ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಮನ್ವಯದೊಂದಿಗೆ ಪೋಷಕರು ಆಹಾರ ಉತ್ಪನ್ನಗಳನ್ನು ಮಕ್ಕಳಿಗೆ ನೀಡುವ ಬಗ್ಗೆ ಮಾಹಿತಿ ನೀಡುವುದರೊಂದಿಗೆ ಪ್ರತೀ ಹದಿನೈದು ದಿನಗಳಿಗೊಮ್ಮೆ ಅಂತಹವರ ಮನೆಗಳನ್ನು ಭೇಟಿ ಮಾಡಿ, ಸುಧಾರಣೆ ಆಗಿರುವ ಬಗ್ಗೆ ಪರಿಶೀಲಿಸಬೇಕು ಹಾಗೂ ಜಿಲ್ಲಾಡಳಿತಕ್ಕೆ ಈ ಬಗ್ಗೆ ವರದಿ ಸಹ ನೀಡಬೇಕು ಎಂದರು.

ಕಟಪಾಡಿಯಲ್ಲಿ ಉದ್ಯೋಗಸ್ಥ ಮಹಿಳೆಯರಿಗಾಗಿ ನೂತನವಾಗಿ ನಿರ್ಮಿಸುತ್ತಿರುವ ವಸತಿ ಗೃಹದ ನಿರ್ಮಾಣಕ್ಕೆ ಅಗತ್ಯವಿರುವ ಅನುದಾನವನ್ನು ಸರಕಾರದಿಂದ ಅಥವಾ ಇತರೆ ಸಿ.ಆರ್.ಎಸ್ ನಿಧಿಯ ಅನುದಾನ ಬಳಕೆ ಮಾಡಿಕೊಳ್ಳುವುದರೊಂದಿಗೆ ಆದಷ್ಟು ಬೇಗ ಪೂರ್ಣಗೊಳಿಸಬೇಕು ಎಂದರು.

ಸಭೆಯಲ್ಲಿ ಎಎಸ್‌ಪಿ ಸಿದ್ದಲಿಂಗಪ್ಪ ಟಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಶ್ಯಾಮಲಾ ಸಿ.ಕೆ, ಪೌರಾಯುಕ್ತ ರಾಯಪ್ಪ, ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

You may also like

Leave a Comment

Maax-Media-Logo

Maax News covers major news and events of Udupi district. This channel provides detailed reports on the political, social, economic, and cultural life of Udupi district.

Maax News, equipped with the most sophisticated studio in Udupi, assures people comprehensive news coverage.

Copyrights © maaxmedia.in All Rights Reserved. Designed by Sabweb