ಉಡುಪಿ : ಕಳೆದ ಆರು ವರ್ಷಗಳಿಂದ ಉಡುಪಿ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸಿ ಇದೀಗ ಚಾಮರಾಜನಗಕ್ಕೆ ವರ್ಗಾವಣೆ ಗೊಂಡಿರುವ ಬಾಲಚಂದ್ರ ಎಚ್. ಅವರಿಗೆ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಬೀಳ್ಕೊಡುಗೆ ಸಮಾರಂಭವನ್ನು ಇಂದು ಉಡುಪಿ ಪತ್ರಿಕಾ ಭವನದಲ್ಲಿ ಹಮ್ಮಿಕೊಳ್ಳಲಾಗಿತ್ತು.
ಉಡುಪಿ ವಾರ್ತಾ ಇಲಾಖೆಯ ಸಹಾಯಕ ನಿರ್ದೇಶಕ ಮಂಜುನಾಥ್ ಬಾಲಚಂದ್ರ ಎಚ್. ಅವರನ್ನು ಸನ್ಮಾನಿಸಿದರು.
ಸನ್ಮಾನ ಸ್ವೀಕರಿಸಿ ಮಾತನಾಡಿದ ಬಾಲಚಂದ್ರ ಎಚ್. ನಮ್ಮ ಯಾವುದೇ ಸಿದ್ಧಾಂತಗಳಿದ್ದರೂ ಪೆನ್ ಹಿಡಿದು ಕೆಲಸ ಮಾಡುವಾಗ ಕೇವಲ ಪತ್ರಕರ್ತರಾಗಿ ಇರಬೇಕು. ಆಗ ಮಾತ್ರ ನಾವು ನಿಜವಾದ ಪತ್ರಕರ್ತರಾಗಲು ಸಾಧ್ಯ ಎಂದರು. ಕಳೆದ ಆರು ವರ್ಷಗಳ ಕಾಲ ಉಡುಪಿಯಲ್ಲಿ ಕರ್ತವ್ಯ ನಿರ್ವಹಿಸಿದ ಅನುಭವ, ಕರಾವಳಿ ಸಂಸ್ಕೃತಿ, ಆಚಾರ ವಿಚಾರಗಳ ಸವಿ ನೆನಪುಗಳನ್ನು ಹಂಚಿಕೊಂಡರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು ವಹಿಸಿದ್ದರು. ಸಂಘದ ರಾಜ್ಯ ಸಮಿತಿ ಸದಸ್ಯ ಕಿರಣ್ ಮಂಜನಬೈಲು ಉಪಸ್ಥಿತರಿದ್ದರು. ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ ಸ್ವಾಗತಿಸಿದರು. ಕಾರ್ಯದರ್ಶಿ ಪ್ರಮೋದ್ ಸುವರ್ಣ ವಂದಿಸಿದರು. ಪತ್ರಕರ್ತ ದೀಪಕ್ ಜೈನ್ ಕಾರ್ಯಕ್ರಮ ನಿರೂಪಿಸಿದರು.
