ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ಭಾರತೀಯ ಜನಸಂಘದ ಸಂಸ್ಥಾಪಕ ಡಾ| ಶ್ಯಾಮ ಪ್ರಸಾದ್ ಮುಖರ್ಜಿ ಯಶೋಗಾಥೆ ಉಪನ್ಯಾಸ

ಉಡುಪಿ : ಭಾರತೀಯ ಜನಸಂಘದ ಸಂಸ್ಥಾಪಕ ಡಾ| ಶ್ಯಾಮ ಪ್ರಸಾದ್ ಮುಖರ್ಜಿ ಅವರ ಪುಣ್ಯ ಸಂಸ್ಮರಣೆಯ ಪ್ರಯುಕ್ತ ಅವರ ಜೀವನಾದರ್ಶಗಳ ಯಶೋಗಾಥೆ ಕುರಿತು ಉಪನ್ಯಾಸ ಕಾರ್ಯಕ್ರಮವು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಅವರ ಅಧ್ಯಕ್ಷತೆಯಲ್ಲಿ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆಯಿತು.

ಉಡುಪಿ ನಗರಸಭೆಯ ಮಾಜಿ ಅಧ್ಯಕ್ಷ ಹಾಗೂ ಹಿರಿಯ ಲೆಕ್ಕ ಪರಿಶೋಧಕ ಗುಜ್ಜಾಡಿ ಪ್ರಭಾಕರ ನಾಯಕ್ ಉಪನ್ಯಾಸವನ್ನು ನಡೆಸಿಕೊಟ್ಟರು.

ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಅವರು ಡಾ| ಶ್ಯಾಮ ಪ್ರಸಾದ್ ಮುಖರ್ಜಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು ನಮನ ಸಲ್ಲಿಸಿದರು. ಬಳಿಕ ಗುಜ್ಜಾಡಿ ಪ್ರಭಾಕರ್ ನಾಯಕ್‌ರವರರಿಗೆ ಹೂಗುಚ್ಚ ಮತ್ತು ಪುಸ್ತಕವನ್ನು ನೀಡಿ ಸ್ವಾಗತಿಸಿದ ಅವರು ಪ್ರಸ್ತಾವಿಕವಾಗಿ ಮಾತನಾಡಿ, ಡಾ| ಶ್ಯಾಮ ಪ್ರಸಾದ್ ಮುಖರ್ಜಿ ಅವರ ದೇಶ ಪ್ರೇಮ, ತ್ಯಾಗ, ಬಲಿದಾನ ಹಾಗೂ ಆದರ್ಶಗಳು ಪಕ್ಷದ ಕಾರ್ಯಕರ್ತರಿಗೆ ಪ್ರೇರಣಾದಾಯಕ. ಡಾ| ಮುಖರ್ಜಿ ಅವರ ನಿಸ್ವಾರ್ಥ ಸೇವಾ ಮನೋಭಾವ, ದೂರದರ್ಶಿತ್ವದ ಚಿಂತನೆಗಳು, ಹೋರಾಟಗಳು ಸದಾ ಅನುಕರಣೀಯ. ಮೌಲ್ಯಯುತ ತತ್ವಾದರ್ಶಗಳನ್ನು ನಾಡಿಗೆ ನೀಡಿದ ಡಾ| ಶ್ಯಾಮ ಪ್ರಸಾದ್ ಮುಖರ್ಜಿ ಪ್ರಾತ: ಸ್ಮರಣೀಯರು ಎಂದರು.

ಗುಜ್ಜಾಡಿ ಪ್ರಭಾಕರ ನಾಯಕ್ ಅವರು ಉಪನ್ಯಾಸವನ್ನು ನಡೆಸಿ, ‘ಒಂದು ದೇಶದಲ್ಲಿ ಎರಡು ಧ್ವಜ, ಎರಡು ಪ್ರಧಾನಿ, ಎರಡು ಸಂವಿಧಾನ ಇರಲು ಸಾಧ್ಯವಿಲ್ಲ’ ಎಂಬ ತತ್ವವನ್ನು ಪ್ರತಿಪಾದಿಸಿ ಕಾಶ್ಮೀರದ ವಿಮೋಚನೆಗಾಗಿ ಹೋರಾಡಿ ಹುತಾತ್ಮರಾದ ಡಾ| ಶ್ಯಾಮ ಪ್ರಸಾದ್ ಮುಖರ್ಜಿ ಅವರ ದೇಶಭಕ್ತಿ, ಸಾಧನೆ, ಹೋರಾಟಗಳು ಮತ್ತು ದೇಶಕ್ಕಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟ ಪರಿ, ತ್ಯಾಗ, ಬಲಿದಾನದ ಯಶೋಗಾಥೆಯನ್ನು ಎಳೆ ಎಳೆಯಾಗಿ ಬಿಡಿಸಿ ಅವರ ಜೀವನಾದರ್ಶಗಳ ಚಿತ್ರಣವನ್ನು ಸಭೆಯ ಮಂದಿಟ್ಟರು.

ಈ ಸಂದರ್ಭದಲ್ಲಿ ಮಾಜಿ ಶಾಸಕ ಲಾಲಾಜಿ ಆರ್. ಮೆಂಡನ್, ಬಿಜೆಪಿ ಎಸ್.ಸಿ. ಮೋರ್ಚಾ ರಾಜ್ಯ ಉಪಾಧ್ಯಕ್ಷ ದಿನಕರ ಬಾಬು, ಜಿಲ್ಲಾ ಉಪಾಧ್ಯಕ್ಷರಾದ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಜಯರಾಮ್ ಸಾಲ್ಯಾನ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ದಿನಕರ ಶೆಟ್ಟಿ ಹೆರ್ಗ, ರೇಷ್ಮಾ ಉದಯ ಶೆಟ್ಟಿ, ಜಿಲ್ಲಾ ಕಾರ್ಯದರ್ಶಿಗಳಾದ ಅನಿತಾ ಶ್ರೀಧರ್, ಶ್ರೀಕಾಂತ್ ನಾಯಕ್, ರಾಘವೇಂದ್ರ ಕುಂದರ್ ಉಪಸ್ಥಿತರಿದ್ದರು.

Related posts

ಕರ್ನಾಟಕ ಕ್ರೀಡಾಕೂಟದಲ್ಲಿ ಸಮರಾಗೆ ಚಿನ್ನದ ಪದಕ

ಯಕ್ಷಗಾನ ಪ್ರದರ್ಶನಕ್ಕೆ ಅಡ್ಡಿ – ಬ್ರಿಟಿಷ್ ಆಡಳಿತವನ್ನೂ ಮೀರಿಸಿದ ಸಿದ್ಧರಾಮಯ್ಯ ಸರ್ಕಾರ : ಯಶ್‌ಪಾಲ್ ಸುವರ್ಣ

ಮಾರಿದ ಹಳೆಯ ಬಸ್ಸನ್ನು ಕದ್ದು ತಂದ ಆರೋಪ – ತಂದೆ ಮಗನ ವಿರುದ್ಧ ದೂರು ದಾಖಲು !