ವಿಧಾನಸಭೆಯಲ್ಲಿ ಕೆಟ್ಟ ಸಂಪ್ರದಾಯ ಹುಟ್ಟು ಹಾಕುವುದು ಇಷ್ಟವಿಲ್ಲ – ಸ್ಪೀಕರ್ ಖಾದರ್

ಮಂಗಳೂರು : ವಿಧಾನಸಭೆ ಕಾರ್ಯವಿಧಾನ ಹಾಗೂ ನಡವಳಿಕೆಯ ನಿಯಮಗಳ ಪ್ರಕಾರ ಕಾರ್ಯನಿರ್ವಹಿಸಬೇಕೇ ಹೊರತು, ವಿಮರ್ಶೆಗಳ ಮರ್ಜಿಗೆ ಅನುಗುಣವಾಗಿ ಅಲ್ಲ. ನಿಯಮ ಮೀರಿ ಕೆಟ್ಟ ಸಂಪ್ರದಾಯವನ್ನು ಹುಟ್ಟುಹಾಕಲು ನನಗೆ ಇಷ್ಟವಿಲ್ಲ ಎಂದು ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಹೇಳಿದರು.

ನಗರದಲ್ಲಿಂದು 16ನೇ ವಿಧಾನಸಭೆಯ 4ನೇ ಅಧಿವೇಶನದಲ್ಲಿ ಮುಡಾ ಹಗರಣದ ಬಗ್ಗೆ ಚರ್ಚಿಸಲು ಅವಕಾಶ ನೀಡಿಲ್ಲ ಎಂಬ ಆರೋಪದ ಬಗ್ಗೆ ಮಾತನಾಡಿದ ಅವರು, ಮುಡಾ ಹಗರಣದ ಸಂಬಂಧ ಶಾಸಕರು ಮಂಡಿಸಿರುವ ನಿಲುವಳಿ ಸೂಚನೆಗೆ, ನಿಯಮಗಳ ಪ್ರಕಾರ ಚರ್ಚೆಗೆ ಅವಕಾಶ ನೀಡಲು ಆಗುವುದಿಲ್ಲ. ಕರ್ನಾಟಕ ವಿಧಾನಸಭೆಯ ಕಾರ್ಯವಿಧಾನ ಮತ್ತು ನಡವಳಿಕೆ ನಿಯಮ 62(7) ಹಾಗೂ ಕರ್ನಾಟಕ ವಿಧಾನಸಭೆಯ ಕಾರ್ಯವಿಧಾನ ಮತ್ತು ನಡವಳಿಕೆಯ ನಿಯಮ 63ರ ಪ್ರಕಾರ ಅದರದ್ದೇ ಆದ ನಿಯಮಗಳಿವೆ. ಸರ್ಕಾರ ಚರ್ಚೆಗೆ ಸಿದ್ಧವಿದ್ದರೂ, ಸಿದ್ಧವಿಲ್ಲದಿದ್ದರೂ ನಿಯಮಾವಳಿಗಳನ್ನು ಮುರಿಯುವುದು ಎಷ್ಟು ಸರಿ ಎಂದು ಪ್ರಶ್ನಿಸಿದರು.

ಮುಡಾ ಹಗರಣದ ತನಿಖೆಗೆ ಈಗಾಗಲೇ ನಿವೃತ್ತ ನ್ಯಾಯಾಧೀಶರ ಆಯೋಗವನ್ನು ರಚನೆ ಮಾಡಲಾಗಿದೆ ಎಂಬ ಮಾಹಿತಿಯನ್ನು ಸರ್ಕಾರ ಸ್ಪೀಕರ್ ಪೀಠಕ್ಕೆ ನೀಡಿದೆ. ಸದನದಲ್ಲಿ ವಿಷಯ ಚರ್ಚೆಯಾದರೆ ನ್ಯಾಯಾಧಿಕರಣ, ಆಯೋಗದ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ.‌ ಸದನದ ಎಲ್ಲ ಸದಸ್ಯರಿಗೂ ಕಲಾಪದಲ್ಲಿ ಮಾತನಾಡುವ ಮುಕ್ತ ಅವಕಾಶ ಇದೆ. ಕಾನೂನು ರಚಿಸುವ ಹುದ್ದೆಯಲ್ಲಿರುವ ವಿಧಾನಸಭಾ ಸದಸ್ಯರು ನಿಯಮ ಮೀರಿ ಚರ್ಚಿಸುವ ಕೆಟ್ಟ ಪರಂಪರೆ ಹುಟ್ಟು ಹಾಕಬಾರದು. ಜನರು ಬಯಸುತ್ತಾರೆ, ಬಹುಮತ ಇದೆ ಎಂದು ನಿಯಮಾವಳಿ, ಕಾನೂನು ಮೀರಬಾರದು ಎಂಬ ಪ್ರಜ್ಞೆ ನಮಗಿರಬೇಕು. ಬಿಎಸಿ ಸಮಿತಿಯಲ್ಲಿ ಚರ್ಚಿಸಿ ನಿಯಮಾವಳಿಗಳಂತೆ ಬೇರೊಂದು ನಿಯಮ ಸಂಖ್ಯೆಯಡಿಯಲ್ಲಿ ಚರ್ಚಿಸುವ ಅವಕಾಶವನ್ನು ಸರ್ವಾನುಮತದ ನಿರ್ಧಾರಕ್ಕೆ ಬರುವ ‘ಮಾದರಿ’ ಅವಕಾಶ ಇದ್ದೇ ಇದೆ. ನಿಯಮ‌ ಮೀರುವುದು ಮುಂದಿನ ಪೀಳಿಗೆಗೆ ಕೆಟ್ಟ ಪರಂಪರೆ ಹಾಕಿಕೊಟ್ಟಂತಾಗುತ್ತದೆ ಎಂದು ಯು.ಟಿ.ಖಾದರ್ ಹೇಳಿದರು.

Related posts

ಕರ್ನಾಟಕ ಕ್ರೀಡಾಕೂಟದಲ್ಲಿ ಸಮರಾಗೆ ಚಿನ್ನದ ಪದಕ

ಯಕ್ಷಗಾನ ಪ್ರದರ್ಶನಕ್ಕೆ ಅಡ್ಡಿ – ಬ್ರಿಟಿಷ್ ಆಡಳಿತವನ್ನೂ ಮೀರಿಸಿದ ಸಿದ್ಧರಾಮಯ್ಯ ಸರ್ಕಾರ : ಯಶ್‌ಪಾಲ್ ಸುವರ್ಣ

ಮಾರಿದ ಹಳೆಯ ಬಸ್ಸನ್ನು ಕದ್ದು ತಂದ ಆರೋಪ – ತಂದೆ ಮಗನ ವಿರುದ್ಧ ದೂರು ದಾಖಲು !