ಉಡುಪಿ : ಬಕ್ರೀದ್ ಹಬ್ಬದ ಆಚರಣೆಯ ಸಂದರ್ಭದಲ್ಲಿ ಸರಕಾರದ ಮಾರ್ಗಸೂಚಿಗಳನ್ನು ಉಲ್ಲಂಘಿಸಿ ಅನಧಿಕೃತವಾಗಿ ಜಾನುವಾರುಗಳ ವಧೆ ಹಾಗೂ ಸಾಗಾಣಿಕೆ ಮಾಡುವುದು ಕಂಡುಬಂದಲ್ಲಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ| ಕೆ. ವಿದ್ಯಾಕುಮಾರಿ ಹೇಳಿದರು.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಬಕ್ರೀದ್ ಹಬ್ಬದ ಸಂದರ್ಭ ಅನಧಿಕೃತವಾಗಿ ಜಾನುವಾರುಗಳ ವಧೆ ಹಾಗೂ ಸಾಗಾಣಿಕೆಯನ್ನು ತಡೆಗಟ್ಟುವ ಕುರಿತು ಜಿಲ್ಲೆಯಲ್ಲಿ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜಿಲ್ಲೆಯಲ್ಲಿ ಅನಧಿಕೃತವಾಗಿ ಜಾನುವಾರುಗಳ ವಧೆ ಹಾಗೂ ಸಾಗಾಟ ಕಂಡುಬಂದಲ್ಲಿ ಹತ್ತಿರದ ಪೋಲೀಸ್ ಠಾಣೆಯ ಅಧಿಕಾರಿಗಳಿಗೆ ಮಾಹಿತಿ ನೀಡಬೇಕು. ಅಧಿಕೃತ ಜಾನುವಾರು ಸಾಗಾಣಿಕೆ ಮಾಡಬೇಕಾದ ಸಂದರ್ಭದಲ್ಲಿ ಪಶುಸಂಗೋಪನ ಇಲಾಖೆ ನಿಗದಿಪಡಿಸಿದ ನಮೂನೆಯಲ್ಲಿ ಅನುಮತಿ ಹಾಗೂ ಪೋಲಿಸ್ ಅನುಮತಿ ಪಡೆಯುವುದು ಕಡ್ಡಾಯವಾಗಿದೆ ಎಂದರು.
ಅನಧಿಕೃತ ಸಾಗಾಣಿಕೆಯಲ್ಲಿ ವಶಪಡಿಸಿಕೊಂಡ ಜಾನುವಾರುಗಳನ್ನು ಸಂರಕ್ಷಿಸಿ, ಹತ್ತಿರದ ಗೋಶಾಲೆಗೆ ಬಿಡಲು ಸಮೀಪದ ಗೋಶಾಲೆಗಳನ್ನು ಗುರುತಿಸುವಂತೆ ಹಾಗೂ ವಶಪಡಿಸಿಕೊಂಡ ಜಾನುವಾರುಗಳಿಗೆ ಅಗತ್ಯವಿರುವ ಚಿಕಿತ್ಸೆಯನ್ನು ನೀಡಲು ಪಶುವೈದ್ಯಾಧಿಕಾರಿಗಳು ಸನ್ನದ್ಧರಾಗಿರಬೇಕು. ಜಾನುವಾರುಗಳಿಗೆ ಅಗತ್ಯವಿರುವ ಮೇವು ಮತ್ತು ನೀರಿನ ವ್ಯವಸ್ಥೆ ಕಲ್ಪಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.