ಬೆಳ್ತಂಗಡಿ : ಉಪ ರಾಷ್ಟ್ರಪತಿ ಜಗದೀಪ್ ಧನ್‌ಕರ್ ಅವರು ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಕ್ಯೂ ಕಾಂಪ್ಲೆಕ್ಸ್ ಅನ್ನು ಲೋಕಾರ್ಪಣೆಗೊಳಿಸಿದರು.
ಪತ್ನಿ ಡಾ. ಸುದೇಶ್ ಧನ್‌ಕರ್ ಅವರೊಂದಿಗೆ ಆಗಮಿಸಿದ ಉಪರಾಷ್ಟ್ರಪತಿಯವರು ಮೊದಲಿಗೆ ಕ್ಷೇತ್ರಕ್ಕೆ ತೆರಳಿ ಶ್ರೀಮಂಜುನಾಥ ಸ್ವಾಮಿಯ ದರ್ಶನ ಮಾಡಿದರು. ನಂತರ ಸಾನ್ನಿಧ್ಯ ಕ್ಯೂ ಕಾಂಪ್ಲೆಕ್ಸ್ ಅನ್ನು ಉದ್ಘಾಟಿಸಿದರು. ಬಳಿಕ ಕ್ಷೇತ್ರದ ಅಮೃತವರ್ಷಿಣಿ ಸಭಾಂಗಣದಲ್ಲಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿದರು.
ಬಳಿಕ ಮಾತನಾಡಿದ ಅವರು, ಮಂಜುನಾಥ ಸ್ವಾಮಿಯ ದರ್ಶನಕ್ಕೆ ಆಗಮಿಸುವ ಭಕ್ತರಿಗಾಗಿ ಕ್ಯೂ ಕಾಂಪ್ಲೆಕ್ಸ್ ಮಾಡಲಾಗಿದೆ. ಇದು ಕೇವಲ ಕಟ್ಟಡ ಮಾತ್ರವಲ್ಲ, ವೈದ್ಯಕೀಯ ಸೇರಿದಂತೆ ಎಲ್ಲ ಸೌಲಭ್ಯಗಳನ್ನು ಒಳಗೊಂಡ ಕೇಂದ್ರ. ಎಲ್ಲರಿಗೂ ಒಂದೇ ಕಡೆ ನಿಲ್ಲುವ ವ್ಯವಸ್ಥೆ ಮಾಡಿದ್ದು ಸಮಾನತೆಯನ್ನು ತೋರಿಸುತ್ತದೆ ಎಂದರು.
ನಮ್ಮ ನಾಗರಿಕ ಜೀವನ ಇನ್ನಷ್ಟು ಬೆಳಗಬೇಕು. ದೇಶದಲ್ಲಿ ಸೌಹಾರ್ದ ವಾತಾವರಣ ಬೆಳೆಸಬೇಕು. ರಾಜಕೀಯವಾಗಿ ನಾವು ಇನ್ನಷ್ಟು ಪ್ರಬಲರಾಗಬೇಕು, ದೇಶವನ್ನು ಮತ್ತಷ್ಟು ಎತ್ತರಕ್ಕೆ ಒಯ್ಯಲು ಒಗ್ಗೂಡಬೇಕಿದೆ. ಪ್ರಜಾಪ್ರಭುತ್ವ ನಮಗೆ ಎಲ್ಲ ಸ್ವಾತಂತ್ರ್ಯ ಕೊಟ್ಟಿದೆ. ಅಭಿಪ್ರಾಯ ಹೇಳಿಕೊಳ್ಳುವ ಸ್ವಾತಂತ್ರ್ಯವಿದೆ. ಸಶಕ್ತ ಪ್ರಜಾಪ್ರಭುತ್ವ ನಮ್ಮಲ್ಲಿದೆ, ಜನರ ಅಭಿಪ್ರಾಯಕ್ಕೆ ಬೆಲೆಯಿದೆ. ಜನಪ್ರತಿನಿಧಿಗಳು ಜನರ ಆದ್ಯತೆಗೆ ಬೆಲೆ ಕೊಡಬೇಕಿದೆ. ಜನರ ಮತಕ್ಕೆ ಬೆಲೆ ಇದ್ದರೆ ಮಾತ್ರ ಸಶಕ್ತ ಪ್ರಜಾಪ್ರಭುತ್ವ ಸಾಧ್ಯ ಎಂದರು.
ದೇಶ ಆಂತರಿಕವಾಗಿ ಸಶಕ್ತ ಆಗಬೇಕಿದೆ. ದೇಶದ ಸೇವೆಗಾಗಿ ಜನತೆ ಮುಂದೆ ಬರಬೇಕಿದೆ. ರಾಜಕಾರಣಿಗಳು ವಿಭಿನ್ನ ಸಿದ್ಧಾಂತ ಹೊಂದಿರಬಹುದು, ಆದರೆ ನಮ್ಮ ಸಂಸ್ಕೃತಿ, ಸಂಸ್ಕಾರವನ್ನು ಮರೆಯಬಾರದು. ದಿನದ 24 ಗಂಟೆಯೂ ರಾಜಕಾರಣವೇ ಮುಖ್ಯವಾಗಿರಬೇಕೇ? ದೇಶ ಸೇವೆಗೆ ಸಮಯ ವಿನಿಯೋಗ ಮಾಡುತ್ತಿದ್ದಾರೆಯೇ? ಎಂದು ಪ್ರಶ್ನಿಸಿದರು.
ನಮ್ಮ ಸಮಾಜ ಯಾಕೆ ಧ್ರುವೀಕರಣ ಆಗುತ್ತಿದೆ. ದೇಶದಲ್ಲಿ ಸಮಗ್ರತೆ, ವೈವಿಧ್ಯತೆ, ಸೌಹಾರ್ದವನ್ನು ಉಳಿಸಿಕೊಳ್ಳಬೇಕಾಗಿದೆ. ನಾವು ಸೌಹಾರ್ದದ ವಾತಾವರಣ ಉಳಿಸಿಕೊಳ್ಳುವುದು ಮುಖ್ಯ. ದೇಶದ ಜನರಲ್ಲಿ ಮೂಲಭೂತ ಕರ್ತವ್ಯದ ಬಗ್ಗೆ ಜಾಗೃತಿ ಹುಟ್ಟಬೇಕಾಗಿದೆ. ಸಾಮಾಜಿಕ ಸದ್ಭಾವ ಎಲ್ಲಿಂದ ಬರಬೇಕು, ಭಾರತ ಮಾತೆ ಒಂದೇ ಎಂದಾಗ ಈ ಭಾವನೆ ಬರುತ್ತದೆ. ನಾವು ದೇಶಕ್ಕಾಗಿ ಕೆಲಸ ಮಾಡಬೇಕಿದೆ, ದೇಶವೇ ಮೊದಲ ಆದ್ಯತೆ ಆಗಬೇಕಿದೆ ಎಂದು ಉಪರಾಷ್ಟ್ರಪತಿಯವರು ಹೇಳಿದರು.
ಈ ಸಂದರ್ಭ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ, ದ.ಕ.ಜಿಲ್ಲಾ ಸಂಸದ ಕ್ಯಾ.ಬ್ರಿಜೇಶ್ ಚೌಟ, ಹೇಮಾವತಿ ವಿ.ಹೆಗ್ಗಡೆ, ಹರ್ಷೇಂದ್ರ ಹೆಗ್ಗಡೆ, ಸುರೇಂದ್ರ ಹೆಗ್ಗಡೆ ಉಪಸ್ಥಿತರಿದ್ದರು.