ಕಾಪು ತಾಲೂಕು ಮಟ್ಟದ ತ್ರೈಮಾಸಿಕ ಕೆ.ಡಿ.ಪಿ ಸಭೆ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗಿ

ಕಾಪು : ತಾಲೂಕು ಮಟ್ಟದ ತ್ರೈಮಾಸಿಕ ಕೆ.ಡಿ.ಪಿ ಸಭೆ ಕಾಪು ಪುರಸಭೆಯ ಸಭಾಂಗಣದಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆಯಿತು.

ಈ ಬಾರಿ ಸುರಿದ ಮಳೆಯಿಂದ ಹಾನಿಗೀಡಾದ ಕೃಷಿ ಬೆಳೆಗಳಿಗೆ ಹೆಕ್ಟೇರ್‌‌ವಾರು ಪರಿಹಾರವನ್ನು ನೀಡಿದ ವರದಿಯನ್ನು ನೀಡುವಂತೆ ಮತ್ತು ರೈತರಿಗೆ ಕೃಷಿ ಇಲಾಖೆಯಿಂದ ಸಬ್ಸಿಡಿ ದರದಲ್ಲಿ ಪೂರೈಕೆಯಾಗುವಂತಹ ಸಲಕರಣೆಗಳ ಮಾಹಿತಿಯನ್ನು ಪಂಚಾಯತ್ ಮಟ್ಟದಲ್ಲಿ ವ್ಯಾಪಕ ಪ್ರಚಾರ ಕೈಗೊಂಡು ಅರ್ಹ ಫಲಾನುಭವಿಗಳಿಗೆ ಕೃಷಿ ಇಲಾಖೆಯ ಬೇಡಿಕೆ ಆಧಾರಿತ ಸಲಕರಣೆಗಳನ್ನು ಒದಗಿಸಲು ಕ್ರಮ ವಹಿಸಬೇಕು. ಎಪ್ರಿಲ್, ಮೇ ಹಾಗೂ ಜೂನ್ ಮಾಹೆಯಲ್ಲಿ ಜಲಾಯನ ಅಭಿವೃದ್ಧಿ ಕಾರ್ಯಕ್ರಮಗಳು ಗುರಿಗಳು ಶೂನ್ಯವಾಗಿದ್ದು, ನೀರು ಸಂಗ್ರಹಣ ಕಾರ್ಯಕ್ರಮಗಳಿಗೆ ಹೆಚ್ಚಿನ ಒತ್ತನ್ನು ನೀಡಲು ಕ್ರಮ ವಹಿಸಬೇಕು. ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿ ತೋಟಗಾರಿಕಾ ಇಲಾಖೆಯಲ್ಲಿ ಕೈಗೆತ್ತಿಕೊಳ್ಳಬಹುದಾದ ಕಾಮಗಾರಿಗಳನ್ನು ಗ್ರಾಮ ಪಂಚಾಯತ್ ಗಳ ಮಟ್ಟದಲ್ಲಿ ಬೇಡಿಕೆಗೆ ಅನುಗುಣವಾಗಿ ಕ್ರಿಯಾ ಯೋಜನೆಯನ್ನು ತಯಾರಿಸಿ ಅನುಷ್ಠಾನಗೊಳಿಸಲು ಕ್ರಮ ವಹಿಸಬೇಕು. ಮೀನುಗಾರ ಮಹಿಳೆಯರಿಗೆ ಶೂನ್ಯ ಬಡ್ಡಿದರದಲ್ಲಿ ಸಾಲ ಸೌಲಭ್ಯದ ಯೋಜನೆಯ ಬಗ್ಗೆ ವಿವರಣೆ ನೀಡಬೇಕು ಮತ್ತು ಸರಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಶಿಕ್ಷಕರ ಕೊರತೆಗಳು ಉಂಟಾದಲ್ಲಿ ಅತಿಥಿ ಶಿಕ್ಷಕರನ್ನು ನೇಮಕಾತಿಗೊಳಿಸುವ ಬಗ್ಗೆ ಅಗತ್ಯ ಕ್ರಮವಹಿಸಬೇಕು ಎಂದು ಶಾಸಕರು ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ಕಾಪು ತಾಲೂಕು ಪಂಚಾಯತ್ ಆಡಳಿತಾಧಿಕಾರಿಗಳಾದ ಪೂರ್ಣಿಮಾ, ಕಾಪು ತಹಶೀಲ್ದಾರರಾದ ಪ್ರತೀಭಾ ಆರ್, ಕಾಪು ತಾಲೂಕು ಕಾರ್ಯನಿರ್ವಹಣಾಧಿಕಾರಿಗಳಾದ ಜೇಮ್ಸ್ ಡಿಸಿಲ್ವ ಹಾಗೂ ಕಾಪು ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Related posts

Worlds Fastest Bhagvad Gita Writer Completing 18 Chapters & 700 Verses in Just 5.30 Hours

ಮೀನುಗಾರರ ಪ್ರತಿಭಟನೆಯಲ್ಲಿ ಪ್ರಚೋದನಕಾರಿ ಭಾಷಣ-ಹಿಂದೂ ಯುವಸೇನೆ ಮುಖಂಡನ ವಿರುದ್ಧ ಸುಮೊಟೋ ಕೇಸ್

ಮಲ್ಪೆ ಮಹಿಳೆಯ ಬ್ಯಾಗ್‌ ಎಳೆದು ಪರಾರಿಯಾದ ಆರೋಪಿ ಪೊಲೀಸ್ ವಶಕ್ಕೆ