ಡಾ| ಧನಂಜಯ ಸರ್ಜಿ ಮತ್ತು ಎಸ್. ಎಲ್. ಭೋಜೇಗೌಡ ಗೆಲುವು ಪ್ರಧಾನಿ ಮೋದಿಯವರಿಗೆ ಉಡುಗೊರೆಯಾಗಲಿ : ಯಶ್ಪಾಲ್ ಎ. ಸುವರ್ಣ

ಉಡುಪಿ : ಚುನಾವಣಾವಣೋತ್ತರ ಸಮೀಕ್ಷೆಗಳ ಫಲಿತಾಂಶದಂತೆ ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಎನ್.ಡಿ.ಎ ಸರಕಾರ ಸತತ 3ನೇ ಬಾರಿಗೆ ಅಧಿಕಾರಕ್ಕೆರಲಿದೆ. ಈ ಸಂಕ್ರಮಣ ಕಾಲಘಟ್ಟದಲ್ಲಿ ನೈರುತ್ಯ ಪದವೀಧರ ಕ್ಷೇತ್ರದ ಅಭ್ಯರ್ಥಿ ಡಾ| ಧನಂಜಯ ಸರ್ಜಿ ಮತ್ತು ನೈರುತ್ಯ ಶಿಕ್ಷಕರ ಕ್ಷೇತ್ರದ ಎನ್.ಡಿ.ಎ ಅಭ್ಯರ್ಥಿ ಎಸ್.ಎಲ್. ಭೋಜೇಗೌಡ ಅವರ ದೊಡ್ಡ ಅಂತರದ ಗೆಲುವನ್ನು ಪ್ರಧಾನಿ ನರೇಂದ್ರ ಮೋದಿಯವರಿಗೆ ಕೊಡುಗೆ ನೀಡೋಣ ಎಂದು ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕ ಯಶ್ಪಾಲ್ ಎ. ಸುವರ್ಣ ಹೇಳಿದರು.

ಅವರು ಬಿಜೆಪಿ ಉಡುಪಿ ನಗರ ಅಧ್ಯಕ್ಷ ದಿನೇಶ್ ಅಮೀನ್ ಅಧ್ಯಕ್ಷತೆಯಲ್ಲಿ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ನಡೆದ ಉಡುಪಿ ನಗರ ಮತ್ತು ಗ್ರಾಮಾಂತರ ಮಂಡಲದ ವಿಧಾನ ಪರಿಷತ್ ಚುನಾವಣಾ ಪ್ರಗತಿ ಪರಿಶೀಲನ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.

ಅಭಿವೃದ್ಧಿಯ ಹರಿಕಾರ, ನವ ಉಡುಪಿಯ ನಿರ್ಮಾತೃ ಕೀರ್ತಿಶೇಷ ಡಾ| ವಿ.ಎಸ್. ಆಚಾರ್ಯರವರ ಬಳಿಕ ವಿಧಾನ ಪರಿಷತ್ ಚುನಾವಣೆಯ ನೈರುತ್ಯ ಪದವೀಧರ ಕ್ಷೇತ್ರದಲ್ಲಿ ಸ್ಪರ್ಧಿಸಲು ಪಕ್ಷ ಮಗದೊಮ್ಮೆ ಓರ್ವ ಸುಸಂಸ್ಕೃತ ಮತ್ತು ಸಚ್ಚಾರಿತ್ರ್ಯವಂತ ವ್ಯಕ್ತಿತ್ವದ ಹೆಸರಾಂತ ವೈದ್ಯ ಹಾಗೂ ಸಮಾಜ ಸೇವಕ ಡಾ. ಧನಂಜಯ ಸರ್ಜಿ ಅವರಿಗೆ ಅವಕಾಶ ನೀಡಿದೆ. ಡಾ. ಸರ್ಜಿ ಅವರು ತನ್ನ ಎಮ್.ಡಿ. ಪದವಿಯನ್ನು ಮಣಿಪಾಲದ ಕೆಎಂಸಿಯಲ್ಲಿ ಪೂರೈಸಿದ್ದು ಕರಾವಳಿ ಭಾಗದ ಜನರ ನಾಡಿಮಿಡಿತವನ್ನು ಚೆನ್ನಾಗಿಯೇ ಅರಿತಿದ್ದಾರೆ. ಉಡುಪಿ ಸಹಿತ ಕರಾವಳಿಯ ಬಿಜೆಪಿ ಕಾರ್ಯಕರ್ತರು ಪಕ್ಷ ನಿಷ್ಠರಾಗಿದ್ದು ಪಕ್ಷದ ಬದ್ಧತೆಯ ವಿಚಾರದಲ್ಲಿ ಯಾವುದೇ ರಾಜಿ ಮಾಡಲಾರರು. ಪ್ರಜ್ಞಾವಂತ, ಪ್ರಬುದ್ಧ ಪದವೀಧರ ಮತ್ತು ಶಿಕ್ಷಕ ಮತದಾರರು ಡಾ. ಧನಂಜಯ ಸರ್ಜಿ ಅವರನ್ನು ದೊಡ್ಡ ಅಂತರದ ಮತಗಳಿಂದ ಗೆಲ್ಲಿಸುವ ಮೂಲಕ ಮಗದೊಮ್ಮೆ ಮೇಲ್ಮನೆಯಲ್ಲಿ ವೈದ್ಯರೊಬ್ಬರು ಕ್ಷೇತ್ರವನ್ನು ಪ್ರತಿನಿಧಿಸಿ ಡಾ.ವಿ.ಎಸ್. ಆಚಾರ್ಯರವರ ದಾಖಲೆಯ ಅಭಿವೃದ್ಧಿಯ ಶಕೆಯನ್ನು ಮುಂದುವರಿಸಲು ಸದವಕಾಶ ನೀಡಲಿದ್ದಾರೆ ಎಂದು ಅವರು ತಿಳಿಸಿದರು.

ಹಾಲಿ ವಿಧಾನ ಪರಿಷತ್ ಸದಸ್ಯರು, ಶಿಕ್ಷಕರ ಸಮಸ್ಯೆಗಳಿಗೆ ಸ್ಪಂದಿಸುತ್ತಾ ಅತ್ಯಮೂಲ್ಯ ಸೇವೆ ಸಲ್ಲಿಸುತ್ತಿರುವ ಸಜ್ಜನ ಹಾಗೂ ಕ್ರಿಯಾಶೀಲ ವ್ಯಕ್ತಿತ್ವದ ನೈರುತ್ಯ ಶಿಕ್ಷಕರ ಕ್ಷೇತ್ರದ ಎನ್.ಡಿ.ಎ ಅಭ್ಯರ್ಥಿ ಎಸ್.ಎಲ್. ಭೋಜೇಗೌಡ ಅವರನ್ನು ಪ್ರಜ್ಞಾವಂತ ಶಿಕ್ಷಕ ಮತದಾರರು ಪ್ರಚಂಡ ಬಹುಮತದಿಂದ ಗೆಲ್ಲಿಸಿ ಮಗದೊಮ್ಮೆ ಮೇಲ್ಮನೆಯಲ್ಲಿ ಶಿಕ್ಷಕರ ಧ್ವನಿಯಾಗಿ ಕ್ಷೇತ್ರವನ್ನು ಪ್ರತಿನಿಧಿಸಲು ಅವಕಾಶವನ್ನು ನೀಡಲಿದ್ದಾರೆ ಎಂದು ಅವರು ತಿಳಿಸಿದರು.

ಬಿಜೆಪಿ ಕಾರ್ಯಕರ್ತ ಆಧಾರಿತ ವಿಶ್ವದ ಅತಿ ದೊಡ್ಡ ರಾಜಕೀಯ ಪಕ್ಷ. ಕಾರ್ಯಕರ್ತರೇ ಪಕ್ಷದ ಜೀವಾಳ. ಪಕ್ಷದ ತತ್ವ ಸಿದ್ಧಾಂತಗಳಿಗೆ ಬದ್ಧರಾಗಿರುವ ಸಾಮಾನ್ಯ ಕಾರ್ಯಕರ್ತರನ್ನು ಗುರುತಿಸಿ ಅವಕಾಶ ನೀಡಿ ಬೆಳೆಸುವ ಪಕ್ಷ ಬಿಜೆಪಿ. ಈ ನಿಟ್ಟಿನಲ್ಲಿ
ಕರ್ನಾಟಕ ವಿಧಾನ ಸಭೆಯಿಂದ ವಿಧಾನ ಪರಿಷತ್‌ಗೆ ನಡೆಯುವ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳಾಗಿ ಆಯ್ಕೆಯಾಗಿರುವ ಸಿ.ಟಿ. ರವಿ, ಎನ್. ರವಿ ಕುಮಾರ್ ಹಾಗೂ ಎಂ.ಜಿ. ಮುಳೆ ಅವರನ್ನು ಅಭಿನಂದಿಸುವುದಾಗಿ ಯಶ್ಪಾಲ್ ಸುವರ್ಣ ತಿಳಿಸಿದರು.

Related posts

ಕರ್ನಾಟಕ ಕ್ರೀಡಾಕೂಟದಲ್ಲಿ ಸಮರಾಗೆ ಚಿನ್ನದ ಪದಕ

ಯಕ್ಷಗಾನ ಪ್ರದರ್ಶನಕ್ಕೆ ಅಡ್ಡಿ – ಬ್ರಿಟಿಷ್ ಆಡಳಿತವನ್ನೂ ಮೀರಿಸಿದ ಸಿದ್ಧರಾಮಯ್ಯ ಸರ್ಕಾರ : ಯಶ್‌ಪಾಲ್ ಸುವರ್ಣ

ಮಾರಿದ ಹಳೆಯ ಬಸ್ಸನ್ನು ಕದ್ದು ತಂದ ಆರೋಪ – ತಂದೆ ಮಗನ ವಿರುದ್ಧ ದೂರು ದಾಖಲು !