ಉಡುಪಿ : ಮ್ಯಾನ್ಯುಯಲ್ ಸ್ಕ್ಯಾವೆಂಜರ್ಸ್ ಪದ್ಧತಿಯನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದ್ದು, ಇದರ ಉಲ್ಲಂಘನೆ ಪ್ರಕರಣಗಳು ಕಂಡುಬಂದಲ್ಲಿ ಸ್ಥಳೀಯ ಸಂಸ್ಥೆಯ ಪರಿಶೀಲನಾ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ, ದೂರು ದಾಖಲಿಸಬೇಕೆಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಸಫಾಯಿ ಕರ್ಮಚಾರಿಗಳ ಜಿಲ್ಲಾ ಜಾಗೃತ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.
ಮ್ಯಾನ್ಯುಯಲ್ ಸ್ಕಾವೆಂಜರ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರು ಬಂದ ತಕ್ಷಣವೇ ನಗರ ಸ್ಥಳೀಯ ಸಂಸ್ಥೆ ಹಾಗೂ ಗ್ರಾಮ ಪಂಚಾಯತ್ ವ್ಯಾಪ್ತಿಯ ಪರಿಶೀಲನಾ ಅಧಿಕಾರಿಗಳು ತುರ್ತಾಗಿ ಸ್ಥಳ ಪರಿಶೀಲನೆ ನಡೆಸಿ, ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ, ಆಯೋಗಕ್ಕೆ ವರದಿ ಸಲ್ಲಿಸಬೇಕು ಎಂದು ಅವರು ತಿಳಿಸಿದರು.
ಮನೆ, ಕಂಪೆನಿಗಳು, ಆಸ್ಪತ್ರೆ, ಅಪಾರ್ಟ್‌ಮೆಂಟ್ ಸೇರಿದಂತೆ ಇತರೆ ಯಾವುದೇ ಕಟ್ಟಡಗಳಲ್ಲಿ ಮ್ಯಾನ್‌ಹೋಲ್, ಸೆಪ್ಟಿಕ್ ಟ್ಯಾಂಕ್, ತೆರೆದ ಚರಂಡಿ, ಪಿಟ್‌ಗುಂಡಿಗಳು ಕಟ್ಟಿಕೊಂಡಲ್ಲಿ ಸ್ವಚ್ಛಗೊಳಿಸಲು ಅನುಕೂಲ ವಾಗುವಂತೆ ನಗರ ಪ್ರದೇಶ ವ್ಯಾಪ್ತಿಯಲ್ಲಿ ಸಹಾಯವಾಣಿ ಸಂಖ್ಯೆ 14420 ಹಾಗೂ ಗ್ರಾಮೀಣ ಪ್ರದೇಶದಲ್ಲಿ 9480985555ಗೆ ಸಂಪರ್ಕಿಸುವಂತೆ ಸಾರ್ವಜನಿಕರಲ್ಲಿ ಹೆಚ್ಚಿನ ಅರಿವು ಮೂಡಿಸಬೇಕು ಹಾಗೂ ಎಲ್ಲಾ ಸ್ಥಳೀಯ ಸಂಸ್ಥೆಗಳಲ್ಲಿ ಸಹಾಯವಾಣಿ ಸಂಖ್ಯೆ ಪ್ರದರ್ಶಿಸಬೇಕು ಎಂದು ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.