ಮಳೆ ವಿಪತ್ತು ನಿರ್ವಹಣೆ ಕುರಿತು ಇಲಾಖಾಧಿಕಾರಿಗಳ ಜೊತೆ ಶಾಸಕರ ಸಭೆ

ಕಾಪು : ಮಳೆ, ವಿಪತ್ತು ನಿರ್ವಹಣೆ ಕುರಿತು ಕಾಪು ವಿಧಾನಸಭಾ ವ್ಯಾಪ್ತಿಯ ಇಲಾಖಾಧಿಕಾರಿಗಳು ಹಾಗೂ ಗ್ರಾಮ ಪಂಚಾಯತ್ ಅಧ್ಯಕ್ಷರೊಂದಿಗೆ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ಕಾಪು ತಾಲೂಕು ಆಡಳಿತ ಸೌಧದಲ್ಲಿ ನಡೆಯಿತು.

ಸಭೆಯಲ್ಲಿ ಪ್ರಾಕೃತಿಕ ವಿಕೋಪದಿಂದ ಆಸ್ತಿಪಾಸ್ತಿ ಮನೆಗಳಿಗೆ ಹಾನಿಯುಂಟಾದ ಸಂದರ್ಭದಲ್ಲಿ ಕಂದಾಯ ಇಲಾಖೆ ಅಧಿಕಾರಿಗಳು ಹಾಗೂ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಸಮನ್ವಯತೆಯಿಂದ ಸ್ಥಳ ಪರಿಶೀಲನೆ ನಡೆಸಿ ಗರಿಷ್ಠ ಪರಿಹಾರ ನೀಡಬೇಕು. ರಸ್ತೆ ಬದಿಗಳಲ್ಲಿರುವ ವಿದ್ಯುತ್ ತಂತಿಗಳನ್ನು ಮತ್ತು ಅಪಾಯಕಾರಿ ಮರಗಳನ್ನು ತೆರವು ಗೊಳಿಸುವಂತೆ ಅರಣ್ಯ ಇಲಾಖೆ ಮತ್ತು ಮೆಸ್ಕಾಂ ಇಲಾಖಾಧಿಕಾರಿಗಳಿಗೆ ಸೂಚಿಸಲಾಯಿತು. ಮಳೆ ಕಡಿಮೆಯಾಗುತ್ತಿದ್ದಂತೆ ಲೋಕೋಪಯೋಗಿ ರಸ್ತೆ ಮತ್ತು ಜಿಲ್ಲಾ ಪಂಚಾಯತ್ ರಸ್ತೆಗಳನ್ನು ದುರಸ್ಥಿ ಕಾರ್ಯ ಕೈಗೊಳ್ಳುವಂತೆ ಇಲಾಖಾಧಿಕಾರಿಗಳಿಗೆ ತಿಳಿಸಲಾಯಿತು. ಜಲ್-ಜೀವನ್ ಮಿಷನ್ ಯೋಜನೆ ಅಡಿಯಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ವಿವಿಧ ಭಾಗಗಳಲ್ಲಿ ಕುಡಿಯುವ ನೀರಿನ ಪೈಪ್‌ಲೈನ್ ಕಾಮಗಾರಿ ನಡೆಯುತ್ತಿದ್ದು ಪೈಪ್‌ಲೈನ್ ಅಳವಡಿಸಲು ತೆಗೆದ ಹೊಂಡ ಗುಂಡಿಗಳನ್ನು ಸರಿಯಾಗಿ ಮಚ್ಚದ ಕಾರಣ ಸ್ಥಳೀಯರಿಂದ ದೂರುಗಳು ಬರುತ್ತಿದ್ದು ಗುಣಮಟ್ಟವನ್ನು ಕಾಯ್ದುಕೊಂಡು ಶೀಘ್ರದಲ್ಲಿ ಕಾಮಗಾರಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಯಿತು.

ಈಗಾಗಲೇ ಶಾಲಾ ಕಾಲೇಜುಗಳು ಆರಂಭವಾಗಿದ್ದು ವಿದ್ಯಾರ್ಥಿಗಳಿಗೆ ಜಾತಿ ಆದಾಯ ಪ್ರಮಾಣ ಪತ್ರ ಅಗತ್ಯವಾಗಿದ್ದು, ಜಾತಿ ಆದಾಯ ಪ್ರಮಾಣ ಪತ್ರ ನೀಡಲು ವಿಳಂಬ ಮಾಡದಂತೆ ಕಂದಾಯ ಇಲಾಖಾಧಿಕಾರಿಗಳಿಗೆ ಹಾಗೂ 9/11 ಅರ್ಜಿದಾರರಿಗೆ 9/11 ಗೆ ಬೇಕಾಗುವ ದಾಖಲೆಗಳ ಬಗ್ಗೆ ಮಾಹಿತಿ ನೀಡಿ ಶೀಘ್ರದಲ್ಲಿ ಕಡತ ವಿಲೇವಾರಿ ಮಾಡುಂತೆ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚಿಸಲಾಯಿತು. ಮಳೆಗಾಲದಲ್ಲಿ ಮಲೇರಿಯಾ, ಡೆಂಗ್ಯೂ, ಅತಿಸಾರ ಮುಂತಾದ ಸಾಂಕ್ರಾಮಿಕ ರೋಗಗಳ ಹರಡುವಿಕೆ ಉಲ್ಬಣವಾಗಲಿದ್ದು ಇದರ ತಡೆಗೆ ಮುಂಜಾಗ್ರತ ಕ್ರಮ ಹಾಗೂ ಸಾರ್ವಜನಿಕರಿಗೆ ಜಾಗೃತಿ ಉಂಟುಮಾಡುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವಂತೆ ಆರೋಗ್ಯ ಇಲಾಖೆಯವರಿಗೆ ಸೂಚಿಸಲಾಯಿತು.

ಕಾಪು ಪುರಸಭಾ ವ್ಯಾಪ್ತಿಯಲ್ಲಿ ಸ್ವಚ್ಛ ಪರಿಸರ ಹಿತದೃಷ್ಟಿಯಿಂದ ಮಲೀನ ನೀರು ಮತ್ತು ಮಲೀನ ತ್ಯಾಜ್ಯಗಳ ವಿಲೇವಾರಿಗೆ ಕ್ರಮ ಕೈಗೊಳ್ಳುವಂತೆ ಮತ್ತು ಮಳೆಗಾಲದ ಸಂದರ್ಭದಲ್ಲಿ ಪುರಸಭೆಯಲ್ಲಿ ತುರ್ತು ಸೇವಾ ಕೇಂದ್ರ ತೆರೆದು ಜವಾಬ್ದಾರಿಯುತ ಸಿಬ್ಬಂದಿಗಳನ್ನು ನೇಮಕ ಮಾಡಿ ಅರ್ಜಿಗಳನ್ನು ಸ್ವೀಕರಿಸಿ ತುರ್ತು ಪರಿಹಾರೋಪಾಯ ಕೈಗೊಳ್ಳವಂತೆ ಪುರಸಭಾ ಮುಖ್ಯಾಧಿಕಾರಿಗಳಿಗೆ ಸೂಚಿಸಲಾಯಿತು. ರಸ್ತೆಗಳಲ್ಲಿ ದಿನೇ ದಿನೇ ಅಪಘಾತ ಹೆಚ್ಚುತ್ತಿದ್ದು ಸೂಚನಾ ಫಲಕ, ಸ್ಪೀಡ್ ಬ್ರೇಕರ್, ಬ್ಯಾರಿಕೇಡ್‌ಗಳನ್ನು ಅಳವಡಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು. ಕಡಲ್ಕೊರೆತ ಬಾದಿತ ಪ್ರದೇಶಗಳ ಕಡಲ್ಕೊರೆತ ತಡೆಗೆ ಯೋಜನೆ ಸಿದ್ಧಪಡಿಸುವಂತೆ ಬಂದರು ಮತ್ತು ಮೀನುಗಾರಿಕಾ ಇಲಾಖಾಧಿಕಾರಿಗಳಿಗೆ ಸೂಚಿಸಲಾಯಿತು.

Related posts

ಯುವನಿಧಿಯ ಫಲಾನುಭವಿಗಳಿಗೆ ಕೌಶಲ್ಯ ತರಬೇತಿ ನೀಡಿ : ರಮೇಶ್ ಕಾಂಚನ್

ದೆಹಲಿಗೆ ಮಹಿಳಾ ಮುಖ್ಯಮಂತ್ರಿ : ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಸಂಭ್ರಮಾಚರಣೆ

ನಿಲ್ಲಿಸಿದ್ದ ಮೀನುಗಾರಿಕಾ ಬೋಟ್‌ನಲ್ಲಿ ಅಗ್ನಿ ಅವಘಡ – 15 ಲಕ್ಷ ರೂ.ನಷ್ಟ