ಮಂಗಳೂರು : ಸಂಕಷ್ಟ ಪರಿಹಾರ ಹಾಗೂ ಇಷ್ಟಾರ್ಥ ಸಿದ್ಧಿಗಾಗಿ ಧಾರವಾಡ ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್ ಶಾಸಕ ಹಾಗೂ ಮಾಜಿ ಸಚಿವ ವಿನಯ್ ಕುಲಕರ್ಣಿ ಮಂಗಳೂರು ಹೊರವಲಯದ ತೊಕ್ಕೊಟ್ಟು ಜಂಕ್ಷನ್‌ನ ಕೊರಗಜ್ಜನ ಕಟ್ಟೆಯಲ್ಲಿ ಕೊರಗಜ್ಜ ದೈವಕ್ಕೆ ಹರಕೆ ಕೋಲ ಸೇವೆಯನ್ನು ಶನಿವಾರ ನೀಡಿದರು.
ಬಳಿಕ ಮಾಧ್ಯಮದ ಜತೆ ಮಾತನಾಡಿ, ಚುನಾವಣಾ ಪೂರ್ವದಲ್ಲಿಯೇ ಕಾಂಗ್ರೆಸ್ ನಾಯಕರು ಹಾಗೂ ಮಂಗಳೂರಿನ ಸ್ನೇಹಿತರು ಕೋಲ ಸೇವೆ ಕೊಡುವ ಬಗ್ಗೆ ಹೇಳಿದ್ದರು. ಈಗ ಕುಟುಂಬ ಸಮೇತರಾಗಿ ಬಂದು ಕೋಲ ಸೇವೆಯಲ್ಲಿ ಭಾಗಿಯಾಗಿದ್ದೇನೆ ಎಂದರು.
ರಾಜೀವ್ ಗಾಂಧಿ ರಾಜ್ಯ ಅಲೈಡ್ ಆ್ಯಂಡ್ ಹೆಲ್ತ್ ಕೇರ್ ಕೌನ್ಸಿಲ್ ಸದಸ್ಯ ಡಾ.ಇಫ್ತಿಕಾರ್ ಆಲಿ ಉಪಸ್ಥಿತರಿದ್ದರು.
ಬಿಜೆಪಿ ಜಿಪಂ ಸದಸ್ಯ ಯೋಗೇಶ ಗೌಡ ಹತ್ಯೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿ ಆರೋಪಿಯಾಗಿದ್ದು ಈ ಸಂಬಂಧ ಸಿಬಿಐ ನ್ಯಾಯಾಲಯ ವಿನಯ್ ಕುಲಕರ್ಣಿಗೆ ಸಹ ಧಾರವಾಡ ಕ್ಷೇತ್ರ ಪ್ರವೇಶಿಸದಂತೆ ನಿರ್ಬಂಧ ಹೇರಿತ್ತು. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ ಕ್ಷೇತ್ರಕ್ಕೆ ಭೇಟಿ ನೀಡದೆಯೇ ಬಿಜೆಪಿ ಅಭ್ಯರ್ಥಿ ವಿರುದ್ಧ ಗೆದ್ದಿದ್ದರು. ಪ್ರಕರಣ ನ್ಯಾಯಾಲಯದಲ್ಲಿ ವಿಚಾರಣೆ ಹಂತದಲ್ಲಿದ್ದು ಕ್ಷೇತ್ರ ಪ್ರವೇಶಕ್ಕೆ ನಿರ್ಬಂಧ ಮುಂದುವರಿದಿದೆ. ಮುಂದಿನ ತಿಂಗಳು ಇದೇ ವಿಚಾರದಲ್ಲಿ ಕೋರ್ಟ್ ವಿಚಾರಣೆಯಿದ್ದು ಈ ಎಲ್ಲ ಬೆಳವಣಿಗೆಗಳ ನಡುವೆ ಕೋಲ ಸೇವೆಯನ್ನು ವಿನಯ್ ಕುಲಕರ್ಣಿ ನೀಡಿರುವುದು ಕುತೂಹಲಕ್ಕೆ ಕಾರಣವಾಗಿದೆ.