ಮಂಗಳೂರು ವಿವಿ ತುಳು ಎಂಎ ಅಧ್ಯಯನ ಪ್ರವೇಶ ಶುಲ್ಕ ಕಡಿತಕ್ಕೆ ಸಂಸದ ಬ್ರಿಜೇಶ್ ಚೌಟ ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ ಸುಧಾಕರ್‌ಗೆ ಪತ್ರ

ಮಂಗಳೂರು : ಮಂಗಳೂರು ವಿವಿಯ ತುಳು ಸ್ನಾತಕೋತ್ತರ ಪ್ರವೇಶ ಶುಲ್ಕವನ್ನು ಏಕಾಏಕಿ ಏರಿಕೆ ಮಾಡಿರುವುದನ್ನು ಸಂಸದ ಬ್ರಿಜೇಶ್ ಚೌಟ ತೀವ್ರವಾಗಿ ಖಂಡಿಸಿ, ಸರ್ಕಾರ ತಕ್ಷಣ ಶುಲ್ಕ ಕಡಿತಗೊಳಿಸುವುದಕ್ಕೆ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ. ಈ ಕುರಿತು ರಾಜ್ಯದ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್‌ ಅವರಿಗೆ ಪತ್ರ ಬರೆದಿದ್ದಾರೆ.

ಮಂಗಳೂರು ವಿವಿಯಲ್ಲಿ ತುಳು ಸ್ನಾತಕೋತ್ತರ ವಿಭಾಗದ 2024-25ನೇ ಸಾಲಿನ ಪ್ರವೇಶ ಶುಲ್ಕವನ್ನು 22,410ರೂ. ಏರಿಸುವ ಮೂಲಕ ತುಳು ಭಾಷೆ ಅಧ್ಯಯನ ಮಾಡಬಯಸುವವರಿಗೆ ಆರ್ಥಿಕ ಹೊರೆ ಹೊರಿಸಲಾಗಿದೆ. ಆರಂಭದಲ್ಲಿ ತುಳು ಎಂಎ ಕೋರ್ಸ್‌ಗೆ 15 ಸಾವಿರ ರೂ. ಪ್ರವೇಶ ಶುಲ್ಕವಿತ್ತು. ಇದೀಗ 3ವರ್ಷದ ಬಳಿಕ 22,410 ರೂ.ಗೆ ಶುಲ್ಕ ಏರಿಕೆ ಮಾಡಿರುವುದರಿಂದ ತುಳು ಎಂಎ ಅಧ್ಯಯನಕ್ಕೆ ವಿದ್ಯಾರ್ಥಿಗಳು ಹಿಂದೇಟು ಹಾಕುತ್ತಿದ್ದಾರೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

ತುಳು ಎಂಎ ವಿಭಾಗಕ್ಕೆ ಕನಿಷ್ಠ 15ವಿದ್ಯಾರ್ಥಿಗಳು ಪ್ರವೇಶ ಪಡೆದರೆ ಮಾತ್ರ ವಿವಿಯು ತುಳು ಸ್ನಾತಕೋತ್ತರ ವಿಭಾಗವನ್ನು ಮುಂದುವರಿಸುವುದಕ್ಕೆ ಸಾಧ್ಯ. ಇಂಥಹ ಪರಿಸ್ಥಿತಿಯಲ್ಲಿ ಶುಲ್ಕ ಏರಿಕೆ ಮಾಡಿದರೆ ತುಳು ಎಂಎ ಅಧ್ಯಯನಕ್ಕೆ ಪ್ರವೇಶ ಪಡೆಯುವ ವಿದ್ಯಾರ್ಥಿಗಳ ಸಂಖ್ಯೆಯೂ ಕುಸಿಯುವ ಆತಂಕವಿದೆ. ಆದ್ದರಿಂದ, ಮಂಗಳೂರು ವಿವಿಯಲ್ಲಿ ತುಳು ಸ್ನಾತಕೋತ್ತರ ಪದವಿ ತರಗತಿಗಳು ಯಶಸ್ವಿಯಾಗಿ ಮುಂದುವರಿಯಬೇಕಾದರೆ, ರಾಜ್ಯ ಸರ್ಕಾರ ಮಧ್ಯಪ್ರವೇಶ ಮಾಡಿ ತುಳು ಎಂಎ ಅಧ್ಯಯನ ಪ್ರವೇಶ ಶುಲ್ಕವನ್ನು ಈ ಮೊದಲಿನಂತೆ ಕಡಿತಗೊಳಿಸಿ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡುವಂತೆ ಸಚಿವ ಡಾ.ಎಂ.ಸಿ ಸುಧಾಕರ್‌ ಅವರಿಗೆ ಬರೆದಿರುವ ಪತ್ರದಲ್ಲಿ ಬ್ರಿಜೇಶ್ ಚೌಟ ಅವರು ಒತ್ತಾಯಿಸಿದ್ದಾರೆ.

ವಿವಿ ಕುಲಪತಿ ಪ್ರೊ. ಧರ್ಮ ಅವರಿಗೂ ಮನವಿ

ಮಂಗಳೂರು ವಿವಿ ಕುಲಪತಿ ಪ್ರೊ.ಪಿ.ಎಲ್.ಧರ್ಮ ಅವರೂ ತುಳು ಎಂಎ ಅಧ್ಯಯನ ಕೋರ್ಸ್‌ನ ಪ್ರವೇಶ ಶುಲ್ಕ ಕಡಿತಗೊಳಿಸುವುದಕ್ಕೆ ಸಂಬಂಧಪಟ್ಟ ಇಲಾಖೆ ಮೂಲಕ ಸರ್ಕಾರದ ಮಟ್ಟದಲ್ಲಿ ಪ್ರಯತ್ನಗಳನ್ನು ನಡೆಸಬೇಕು. ಈ ಮೂಲಕ, ತುಳು ಭಾಷೆ ಅಧ್ಯಯನಕ್ಕೆ ಆಸಕ್ತಿಯಿರುವ ವಿದ್ಯಾರ್ಥಿಗಳಿಗೆ ಹೆಚ್ಚಿನ ಅನುಕೂಲ ಕಲ್ಪಿಸುದರೊಂದಿಗೆ ತುಳುಭಾಷೆಯ ಪ್ರೋತ್ಸಾಹಕ್ಕೆ ಕೈಜೋಡಿಸಬೇಕೆಂದು ಸಂಸದ ಬ್ರಿಜೇಶ್ ಚೌಟ ಮನವಿ ಮಾಡಿದ್ದಾರೆ.

Related posts

ಯುವನಿಧಿಯ ಫಲಾನುಭವಿಗಳಿಗೆ ಕೌಶಲ್ಯ ತರಬೇತಿ ನೀಡಿ : ರಮೇಶ್ ಕಾಂಚನ್

ದೆಹಲಿಗೆ ಮಹಿಳಾ ಮುಖ್ಯಮಂತ್ರಿ : ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಸಂಭ್ರಮಾಚರಣೆ

ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಕಡ್ಡಾಯಗೊಳಿಸಿ – ಕರ್ನಾಟಕ ಯುವರಕ್ಷಣಾ ವೇದಿಕೆ