ಉಡುಪಿ : ಉಡುಪಿ ವಿಧಾನಸಭಾ ಕ್ಷೇತ್ರದಲ್ಲಿ ಇತ್ತೀಚೆಗೆ ಸುರಿದ ಭಾರೀ ಗಾಳಿ ಮಳೆಯಿಂದ ಹಲವಾರು ಪ್ರದೇಶಗಳು ಜಲಾವೃತಗೊಂಡು ಮನೆ, ಆಸ್ತಿ ಪಾಸ್ತಿ ನಷ್ಟವಾಗಿ ಸರಿ ಸುಮಾರು 50 ಕೋಟಿಯಷ್ಟು ನಷ್ಟ ಸಂಭವಿಸಿದ ಬಗ್ಗೆ ವರದಿಯಾಗಿರುವ ಹಿನ್ನಲೆಯಲ್ಲಿ ಉಡುಪಿ ವಿಧಾನಸಭಾ ಕ್ಷೇತ್ರಕ್ಕೆ ಪ್ರಕೃತಿ ವಿಕೋಪದಡಿ ವಿಶೇಷ ಅನುದಾನ ಮಂಜೂರು ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಗೆ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಪತ್ರ ಬರೆದು ಮನವಿ ಮಾಡಿದ್ದಾರೆ.

ಕ್ಷೇತ್ರದಾದ್ಯಂತ ನೂರಾರು ಮರಗಳು, ವಿದ್ಯುತ್ ಕಂಬಗಳು ಧರಾಶಾಹಿಯಾಗಿದ್ದು ಶಾಲಾ ಕಟ್ಟಡಗಳು, ಕಾಲು ಸಂಕ, ಸೇತುವೆಗಳು ಅಪಾಯದಲ್ಲಿದ್ದು, ಹಲವಾರು ಗ್ರಾಮೀಣ ರಸ್ತೆಗಳು ಸಂಪೂರ್ಣ ಹಾನಿಗೀಡಾಗಿದ್ದು, ಕಡಲ್ಕೊರೆತ ನಿಯಂತ್ರಣ ಸಹಿತ ಹಲವಾರು ಮೂಲ ಸೌಕರ್ಯಗಳ ಅಭಿವೃದ್ಧಿಗೆ ವಿಶೇಷ ವಿಶೇಷ ಅನುದಾನದ ಅಗತ್ಯವಿದೆ.
ಪರಿಸ್ಥಿತಿಯನ್ನು ಅವಲೋಕಿಸಲು ಜಿಲ್ಲೆಗೆ ಭೇಟಿ ನೀಡಿ ಜಿಲ್ಲಾ ಮಟ್ಟದಲ್ಲಿ ಸಭೆ ನಡೆಸಿ ಕ್ರಮಕೈಗೊಳ್ಳುವಂತೆ ಮುಖ್ಯಮಂತ್ರಿಗೆ ಮನವಿ ಮಾಡುವುದಾಗಿ ತಿಳಿಸಿದ್ದಾರೆ.
