ಮಂಗಳೂರು : ನಿಷೇದಿತ ಮಾದಕ ವಸ್ತುವಾದ ಎಂಡಿಎಂಎ ಅನ್ನು ಸಾಗಾಟ, ಮಾರಾಟ ಮಾಡುತ್ತಿದ್ದ ಇಬ್ಬರನ್ನು ಬಂಧಿಸಿ, ಆರೋಪಿಗಳಿಂದ 15 ಗ್ರಾಂ ಎಂಡಿಎಂಎ ಅನ್ನು ಮಂಗಳೂರು ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಕೇರಳದ ಕಾಸರಗೋಡು ಜಿಲ್ಲೆಯ ಅಬ್ದುಲ್ ಸಲಾಂ ಯಾನೆ ಸಲಾಂ(30), ಸೂರಜ್ ರೈ ಯಾನೆ ಅಂಕಿ(26) ಬಂಧಿತರು.
ನಿಷೇದಿತ ಮಾದಕ ವಸ್ತುವಾದ ಎಂಡಿಎಂಎಯನ್ನು ದ್ವಿಚಕ್ರ ವಾಹನದಲ್ಲಿಟ್ಟುಕೊಂಡು ಮಂಗಳೂರು ನಗರಕ್ಕೆ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡಲು ಬರುತ್ತಿದ್ದಾರೆಂಬ ಬಗ್ಗೆ ಖಚಿತ ಮಾಹಿತಿಯನ್ನು ಪಡೆದ ಮಂಗಳೂರು ಸಿಸಿಬಿ ಪೊಲೀಸರು ಮಂಗಳೂರು ನಗರದ ತಲಪಾಡಿ ಕೆ ಸಿ ರೋಡ್ ಬಳಿ ದ್ವಿಚಕ್ರ ವಾಹನವನ್ನು ಪತ್ತೆ ಹಚ್ಚಿ ಆರೋಪಿಗಳನ್ನು ಬಂಧಿಸಿದ್ದಾರೆ.
ಆರೋಪಿಗಳ ವಶದಿಂದ ರೂ. 75,000/- ಮೌಲ್ಯದ 15 ಗ್ರಾಂ ನಿಷೇಧಿತ ಮಾದಕ ವಸ್ತು ಎಂಡಿಎಂಎ, 2 ಮೊಬೈಲ್ ಫೋನ್ ಗಳು, ಡಿಜಿಟಲ್ ತೂಕಮಾಪಕ ಹಾಗೂ ಡಿಯೋ ದ್ವಿಚಕ್ರ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತಿನ ಒಟ್ಟು ಮೌಲ್ಯ ರೂ. 1,65,000/- ಆಗಬಹುದು ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆರೋಪಿಗಳ ಪೈಕಿ ಅಬ್ದುಲ್ ಸಲಾಂ ಎಂಬಾತನ ವಿರುದ್ಧ ಮಂಜೇಶ್ವರ ಪೊಲೀಸ್ ಠಾಣೆಯಲ್ಲಿ ಮಾದಕ ವಸ್ತು ಸೇವನೆಗೆ ಸಂಬಂಧಪಟ್ಟಂತೆ ಪ್ರಕರಣ ದಾಖಲಾಗಿದೆ. ಇನ್ನೋರ್ವ ಆರೋಪಿ ಸೂರಜ್ ರೈ ಎಂಬಾತನ ವಿರುದ್ಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಮಾದಕ ವಸ್ತು ಸೇವನೆಗೆ ಸಂಬಂಧಪಟ್ಟಂತೆ ಪ್ರಕರಣ ದಾಖಲಾಗಿರುತ್ತದೆ.
ಆರೋಪಿಗಳು ಅಕ್ರಮ ಲಾಭಗಳಿಸುವ ಉದ್ದೇಶದಿಂದ ಕೇರಳದಿಂದ ಎಂಡಿಎಂಎಯನ್ನು ಖರೀದಿಸಿಕೊಂಡು ನಗರ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದರು. ಈ ಮಾದಕ ವಸ್ತು ಮಾರಾಟ ಸಾಗಾಟ ಜಾಲದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ಆರೋಪಿಗಳ ಪತ್ತೆ ಕಾರ್ಯ ಮುಂದುವರಿದಿದೆ.
ಈ ಮಾದಕ ವಸ್ತು ಎಂಡಿಎಂಎ ಮಾರಾಟ, ಸಾಗಾಟದ ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಎಸಿಪಿ ಮನೋಜ್ ಕುಮಾರ್ ನಾಯ್ಕ್ ನೇತೃತ್ವದಲ್ಲಿ ಪೊಲೀಸ್ ನಿರೀಕ್ಷಕರಾದ ಶ್ಯಾಮ್ ಸುಂದರ್ ಹೆಚ್ ಎಂ, ಪಿಎಸ್ಐಯವರಾದ ನರೇಂದ್ರ ಮತ್ತು ಸಿಸಿಬಿ ಸಿಬ್ಬಂದಿಯವರು ಪಾಲ್ಗೊಂಡಿದ್ದರು.