ಸರಕಾರಿ ಆಸ್ಪತ್ರೆ ಆವರಣದಲ್ಲಿ ಜನೌಷಧಿ ಕೇಂದ್ರ ತೆರವು ಆದೇಶ ಖಂಡನೀಯ : ಯಶ್‌ಪಾಲ್ ಸುವರ್ಣ ಆಕ್ರೋಶ

ಉಡುಪಿ : ಪ್ರಧಾನಮಂತ್ರಿ ಭಾರತೀಯ ಜನೌಷಧಿ ಕೇಂದ್ರಗಳನ್ನು ಸ್ಥಗಿತಗೊಳಿಸುವಂತೆ ರಾಜ್ಯ ಸರಕಾರ ಆದೇಶ ಹೊರಡಿಸುವ ಮೂಲಕ ರಾಜ್ಯದ ಜನತೆಯ ಆರೋಗ್ಯ ವ್ಯವಸ್ಥೆಯೊಂದಿಗೆ ಚೆಲ್ಲಾಟವಾಡಲು ಮುಂದಾಗಿದೆ ಎಂದು ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕರ್ನಾಟಕ ಸರಕಾರವು ರಾಜ್ಯದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿನ ವಿವಿಧ ಸರಕಾರಿ ಆಸ್ಪತ್ರೆಗಳಲ್ಲಿ ನೂತನ ಪ್ರಧಾನಮಂತ್ರಿ ಭಾರತೀಯ ಜನೌಷಧಿ ಕೇಂದ್ರಗಳನ್ನು ಪ್ರಾರಂಭಿಸಲು ಸಲ್ಲಿಸಿದ ಪ್ರಸ್ತಾವನೆಗಳನ್ನು ತಿರಸ್ಕರಿಸಲು ಹಾಗೂ ಸಮುದಾಯ ಆರೋಗ್ಯ ಕೇಂದ್ರ, ತಾಲೂಕು ಆಸ್ಪತ್ರೆ ಹಾಗೂ ಎಲ್ಲಾ ಜಿಲ್ಲಾಸ್ಪತ್ರೆಗಳ ಆವರಣದಲ್ಲಿ ಹಲವಾರು ವರ್ಷಗಳಿಂದ ಸೇವೆ ನೀಡುತ್ತಿರುವ ಪ್ರಧಾನಮಂತ್ರಿ ಭಾರತೀಯ ಜನೌಷಧಿ ಕೇಂದ್ರಗಳನ್ನು ಸ್ಥಗಿತಗೊಳಿಸುವಂತೆ ಆದೇಶ ನೀಡಿದೆ.

ಪ್ರಧಾನಮಂತ್ರಿ ಭಾರತೀಯ ಜನೌಷಧಿ ಕೇಂದ್ರಗಳು ರಾಜ್ಯದಲ್ಲಿ ಹಲವಾರು ವರ್ಷಗಳಿಂದ ಕಾರ್ಯಾಚರಿಸುತ್ತಿದ್ದು, ರಾಜ್ಯದ ಬಡ ಜನತೆಗೆ ಕಡಿಮೆ ದರದಲ್ಲಿ ಗುಣಮಟ್ಟದ ಔಷಧಿಗಳನ್ನು ದೊರಕಿಸಿ, ತೃಪ್ತಿಕರ ಸೇವೆಯನ್ನು ಸಲ್ಲಿಸಿಕೊಂಡು ಬರುತ್ತಿದೆ. ಈ ಜನೌಷಧಿ ಕೇಂದ್ರಗಳನ್ನು ಸ್ಥಗಿತಗೊಳಿಸುವುದರಿಂದ ಸಾಮಾನ್ಯ ಬಡ ಜನರಿಗೆ ಉತ್ತಮ ಗುಣಮಟ್ಟದ ಜನರಿಕ್ ಔಷಧಿಗಳನ್ನು ಕಡಿಮೆ ಹಾಗೂ ಕೈಗೆಟಕುವ ದರಗಳಲ್ಲಿ ದೊರಕಿಸುವ ಕೇಂದ್ರ ಸರಕಾರದ ಮಹತ್ವಾಕಾಂಕ್ಷಿ ಹಾಗೂ ಜನಪರ ಉದ್ದೇಶಕ್ಕೆ ಅಡ್ಡಿಪಡಿಸಿದಂತಾಗುತ್ತದೆ.

ಪ್ರಧಾನಮಂತ್ರಿ ಭಾರತೀಯ ಜನೌಷಧಿ ಕೇಂದ್ರಗಳನ್ನು ಸ್ಥಗಿತಗೊಳಿಸುವ ಆದೇಶವನ್ನು ರದ್ದು ಪಡಿಸಿ ಮತ್ತು ನೂತನ ಜನೌಷಧಿ ಕೇಂದ್ರಗಳನ್ನು ಪ್ರಾರಂಭಿಸಲು ಸಲ್ಲಿಸಿದ ಪ್ರಸ್ತಾವನೆಗಳಿಗೆ ಅನುಮತಿ ನೀಡಲು ತುರ್ತಾಗಿ ಅಗತ್ಯ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ಹಾಗೂ ಆರೋಗ್ಯ ಸಚಿವರಾದ ಶ್ರೀ ದಿನೇಶ್ ಗುಂಡೂರಾವ್‌ರವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.

Related posts

ರಂಗೋಲಿ ಕಲಾ ಸಾಧಕಿ, ಭಾರತಿ ಮರವಂತೆಗೆ ‘ಮಧುರಚೆನ್ನ ರಾಜ್ಯ ಪ್ರಶಸ್ತಿ’ ಪ್ರದಾನ

ಮೂಡಲಪಾಯ ಯಕ್ಷಗಾನದ ಅಭ್ಯುದಯವನ್ನು ಬೆಂಬಲಿಸಲು ಅಕಾಡೆಮಿ ಬದ್ಧವಾಗಿದೆ : ಡಾ. ತಲ್ಲೂರು

National Fame Award of India Books of Award – Sushanth Brahmavar