ಮಂಗಳೂರು : ಮಂಗಳೂರು ವಿಧಾನಸಭಾ ಕ್ಷೇತ್ರದ ಬೋಳಿಯಾರ್ ಗ್ರಾಮ ಸೌಹಾರ್ದಕ್ಕೆ ಮಾದರಿಯಾಗಿದ್ದು, ಅಲ್ಲಿ ಇತ್ತೀಚೆಗೆ ನಡೆದ ಘಟನೆಗೆ ಸಂಬಂಧಿಸಿ ಅಲ್ಲಿನ ಸ್ಥಳೀಯರು ಹಾಗೂ ಪೊಲೀಸರು ಪ್ರಕರಣವನ್ನು ಬಗೆಹರಿಸಲಿದ್ದಾರೆ. ಹೊರಗಿನವರು ಬಾಯಿ ಮುಚ್ಚಿ ಕೂರುವುದೇ ದೇಶ ಪ್ರೇಮ ಎಂದು ವಿಧಾನಸಭಾ ಸ್ಪೀಕರ್ ಯು.ಟಿ.ಖಾದರ್ ಹೇಳಿದ್ದಾರೆ.
ನಗರದ ಸರ್ಕ್ಯೂಟ್ ಹೌಸ್‌ನಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಲ್ಲಿ ಕೆಲವೇ ಕೆಲವು ಯುವಕರಿಂದ ಕೆಟ್ಟ ಹೆಸರು ಬಂದಿದೆ. ಅದಕ್ಕಾಗಿ ಹೊರಗಿನವರು ಅಲ್ಲಿ ರಾಜಕೀಯ ಮಾಡಿ ಅಲ್ಲಿನ ವಾತಾವರಣವನ್ನು ಮತ್ತಷ್ಟು ಕೆಡಿಸುವ ಪ್ರಯತ್ನ ಬೇಡ ಎಂಬುದು ನನ್ನ ಮನವಿ ಎಂದರು.
ಬೋಳಿಯಾರು ವಿಚಾರದಲ್ಲಿ ರಾಜಕೀಯ ಮಾಡಿದರೆ ಯಾರಿಗೂ ಒಂದು ಮತವೂ ಹೆಚ್ಚಾಗದು. ವಿಧಾನಸಭಾ ಚುನಾವಣೆಯಲ್ಲಿ ಎರಡು ಪಕ್ಷದವರು ಸೇರಿ ನನ್ನನ್ನು ಸೋಲಿಸಲು ಪ್ರಯತ್ನಿಸಿದರೂ ಆಗಿಲ್ಲ. ಇಂತಹ ವಿಚಾರಗಳಲ್ಲಿ ರಾಜಕೀಯ ಮಾಡಿ ಸಮಸ್ಯೆ ಸೃಷ್ಟಿಸುವವರು ನಿಜವಾದ ದೇಶದ್ರೋಹಿಗಳು ಎಂದು ಖಾದರ್ ಹೇಳಿದರು.
ಭಾರತ್ ಮಾತಾಕಿ ಜೈ ಎಂದು ಯಾರೂ ಹೇಳಬಹುದು. ಅದಕ್ಕೆ ಯಾರೂ ಆಕ್ಷೇಪ ಮಾಡುವುದಿಲ್ಲ. ಆದರೆ ಅಲ್ಲಿ ಏನೋ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿರುವ ಬಗ್ಗೆ ಯಾರಿಗೂ ಗೊತ್ತಿಲ್ಲ. ಇದನ್ನು ಪೊಲೀಸರು ಸಿಸಿಟಿವಿ ಕ್ಯಾಮರಾದ ಮೂಲಕ ತನಿಖೆ ನಡೆಸುತ್ತಿದ್ದಾರೆ. ಮೆರವಣಿಗೆ ಮುಗಿದ ಬಳಿಕ ಮೂವರು ಬೈಕಿನಲ್ಲಿ ಬಂದು ಪ್ರಚೋದನಕಾರಿ ಘೋಷಣೆ ಕೂಗುವ ಉದ್ದೇಶವೇನು, ಇದು ತಪ್ಪು ಎಂದು ಹೇಳಿದ ಯು.ಟಿ.ಖಾದರ್, ಅದಕ್ಕೆ ಪ್ರತಿಯಾಗಿ ಅವರನ್ನು ಹಿಂಬಾಲಿಸಿಕೊಂಡು ಹಲ್ಲೆ ಮಾಡಿರುವ ಕೃತ್ಯವೂ ತಪ್ಪೇ. ಈ ಎರಡೂ ಘಟನೆಗಳ ಬಗ್ಗೆ ಪೊಲೀಸರು ಕಾನೂನು ಪ್ರಕಾರ ಕ್ರಮ ವಹಿಸಲಿದ್ದಾರೆ ಎಂದು ಅವರು ತಿಳಿಸಿದರು.
ಅಲ್ಲಿ ಪ್ರಚೋದನಕಾರಿ ಮಾತುಗಳ ಬಗ್ಗೆ ಸ್ಥಳೀಯರು ದೂರು ನೀಡಿದ್ದಾರೆ. ಈ ಬಗ್ಗೆ ಹೊರಗಿನವರು ಬಂದು ಮಾತನಾಡುವ ಅಗತ್ಯ ಇಲ್ಲ. ಪೊಲೀಸ್ ಇಲಾಖೆಯಿಂದ ನ್ಯಾಯ ದೊರಕಿಲ್ಲ ಎಂದು ನನ್ನ ಬಳಿ ಬಂದರೆ ಈ ಬಗ್ಗೆ ಖಂಡಿತಾ ನಾನು ಪರಿಶೀಲಿಸುತ್ತೇನೆ. ನನಗೆ ಅಂತಹ ಯಾವುದೇ ದೂರು ಬಂದಿಲ್ಲ. ವಾಟ್ಸ್ ಆ್ಯಪ್ ವಾಯ್ಸ್ ಮೆಸೇಜ್ ಮೂಲಕ ಯಾರೋ ಹೇಳಿಕೊಂಡು ತಿರುಗಾಡುತ್ತಿದ್ದರೆ ಅದಕ್ಕೆ ನಾನು ಪ್ರತಿಕ್ರಿಯಿಸಲಾರೆ. ನಿರಪರಾಧಿಗಳಿಗೆ ಪೊಲೀಸರು ತೊಂದರೆ ನೀಡಬಾರದು. ಆದರೆ ಪ್ರಕರಣದಲ್ಲಿ ಭಾಗಿಯಾಗಿದ್ದವರು ತಲೆಮರೆಸಿಕೊಂಡಾಗ ವಿಚಾರಣೆಗಾಗಿ ಪೊಲೀಸರು ಕರೆದರೆ ಅದನ್ನು ದೊಡ್ಡ ವಿಚಾರ ಮಾಡಬೇಕಾಗಿಲ್ಲ ಎಂದು ಖಾದರ್ ಹೇಳಿದರು.
ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಧ್ವನಿ ಸಂದೇಶ ಹಾಕಿ ಜನರನ್ನು ದಾರಿತಪ್ಪಿಸುವವರ ಮೇಲೂ ಪೊಲೀಸರು ಕ್ರಮ ವಹಿಸಬೇಕು. ಇಂತಹ ಘಟನೆಗಳ ಸಂದರ್ಭ ರಾಜಕಾರಣಿಗಳು ಅಲ್ಲಿ ಭೇಟಿ ನೀಡಿದಾಗ ಮತ್ತಷ್ಟು ಗೊಂದಲಕ್ಕೆ ಕಾರಣವಾಗುತ್ತದೆ. ಅದಕ್ಕಾಗಿ ಭೇಟಿ ನೀಡಿಲ್ಲ. ಸಮಸ್ಯೆ ಸೃಷ್ಟಿಸಿ ಗಲಾಟೆ ಮಾಡಿಸಿದವರನ್ನು ನಾವು ನೋಡಬೇಕೇ ಎಂದು ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಸ್ಪೀಕರ್ ಖಾದರ್ ಪ್ರಶ್ನಿಸಿದರು.
ಅಲ್ಲಿನ ಜನರನ್ನು ಅವರಷ್ಟಕ್ಕೆ ಬಿಡಿ. ಪೊಲೀಸರು ಹಾಗೂ ಜನರು ಸಮಸ್ಯೆಯನ್ನು ಬಗೆಹರಿಸಿಕೊಳ್ಳುತ್ತಾರೆ. ರಾಜಕಾರಣಿಗಳು ಇಂತಹ ವಿಚಾರಗಳಿಗೆ ತಲೆಹಾಕಬಾರದು. ನನಗೆ ನನ್ನ ಕ್ಷೇತ್ರದ ಎಲ್ಲರೂ ಆತ್ಮೀಯರೇ, ಆದರೆ ತಪ್ಪು ಮಾಡಿದವರಿಗೆ ಬೆಂಬಲ ನೀಡುವುದಿಲ್ಲ. ಈ ವಿಷಯದಲ್ಲಿ ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದಾರೆ. ನಾನು ಆಸ್ಪತ್ರೆಗೆ ಭೇಟಿ ನೀಡುವುದು ಎಲ್ಲಾ ಮಾಡಿದರೆ, ಮತ್ತೆ ಗೊಂದಲ ಆಗುತ್ತದೆ. ನಾನೂ ಸೇರಿ ರಾಜಕೀಯದವರು ಅಲ್ಲಿಗೆ ಹೋಗಲೇಬಾರದು ಎಂದು ಯು.ಟಿ.ಖಾದರ್ ತಾಕೀತು ಮಾಡಿದರು.
ಒಳ್ಳೆಯವರಿಗೆ, ಅಗತ್ಯವುಳ್ಳವರಿಗೆ ಖಾದರ್ ಯಾವತ್ತೂ ಸಿಗುತ್ತಾರೆ
ನನ್ನನ್ನು ಕ್ಷೇತ್ರದಲ್ಲಿ ಸೋಲಿಸಲು ಪ್ರಯತ್ನಿಸಿದವರು ಬೋಳಿಯಾರ್ ಘಟನೆಗೆ ಸಂಬಂಧಿಸಿ ‘ಶಾಸಕರು ಕಾಣೆಯಾಗಿದ್ದಾರೆ’ ಎಂಬ ಸಂದೇಶ ಹರಿಬಿಟ್ಟು ಸಂತೋಷ ಪಡುತ್ತಿದ್ದಾರೆ. ನಾನು ಅವರಿಗೆ ಶುಭಾಶಯ ಹೇಳುತ್ತೇನೆ. ಅವರು ನನ್ನ ಬಳಿ ಬಂದು ನಾನೇ ಆ ಸಂದೇಶ ಹಾಕಿರುವುದಾಗಿ ಹೇಳಿದರೆ ಅವರಿಗೆ ನಗದು ಬಹುಮಾನವನ್ನೂ ನೀಡಲಿದ್ದೇನೆ. ಒಳ್ಳೆಯವರಿಗೆ, ಅಗತ್ಯವುಳ್ಳವರಿಗೆ ಖಾದರ್ ಯಾವತ್ತೂ ಸಿಗುತ್ತಾರೆ ಎಂದು ಖಾದರ್ ಹೇಳಿದರು.