ಖಾಸಗಿ ಕಾಲೇಜಿನಲ್ಲಿ ರಾಜಕೀಯ ಭಾಷಣ – ಸಂಸದ ಕೋಟ ವಿಚಾರಣಾ ಪ್ರಕ್ರಿಯೆಗೆ ಹೈಕೋರ್ಟ್‌ ತಡೆಯಾಜ್ಞೆ

ಉಡುಪಿ : ಕಳೆದ ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಉಡುಪಿ ಜಿಲ್ಲೆಯ ಕಟಪಾಡಿಯಲ್ಲಿನ ಖಾಸಗಿ ಕಾಲೇಜೊಂದರ ಆವರಣದಲ್ಲಿ ಕಾರ್ಯಕ್ರಮ ನಡೆಸಿ “ಚುನಾವಣೆಯಲ್ಲಿ ಗೆಲುವು ಸಾಧಿಸಿದರೆ ಮಕ್ಕಳಿಗೆ ಹಲವು ಉಚಿತ ಯೋಜನೆ ಜಾರಿಗೊಳಿಸುವುದಾಗಿ ಹೇಳಿದ್ದರು ಎಂಬ ಆರೋಪದ ಮೇಲೆ ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ್‌ ಪೂಜಾರಿ ಮತ್ತು ಇತರ ಆರೋಪಿಗಳ ವಿರುದ್ಧ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ವಿಚಾರಣಾ ಪ್ರಕ್ರಿಯೆಗೆ ಹೈಕೋರ್ಟ್‌ ತಡೆಯಾಜ್ಞೆ ನೀಡಿದೆ.

ಪ್ರಕರಣ ಸಂಬಂಧ ತಮ್ಮ ವಿರುದ್ಧದ ಖಾಸಗಿ ದೂರು ಮತ್ತು ಆ ಕುರಿತ ಬೆಂಗಳೂರಿನ 42ನೇ ಎಸಿಎಂಎಂ (ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ) ವಿಚಾರಣ ಪ್ರಕ್ರಿಯೆ ರದ್ದುಪಡಿಸುವಂತೆ ಕೋರಿ ಸಂಸದ ಕೋಟ ಶ್ರೀನಿವಾಸ್‌ ಪೂಜಾರಿ, ಕಾಪು ವಿಧಾನಸಭಾ ಕ್ಷೇತ್ರದ ಶಾಸಕ ಗುರ್ಮೆ ಸುರೇಶ್‌ ಶೆಟ್ಟಿ, ಮಾಜಿ ಶಾಸಕ ಲಾಲಾಜಿ ಆರ್‌. ಮೆಂಡನ್‌ ಹಾಗೂ ಖಾಸಗಿ ಕಾಲೇಜು ಆಡಳಿತ ಮಂಡಳಿ ಅಧ್ಯಕ್ಷ ಎಸ್‌. ಗೋಪಾಲಕೃಷ್ಣ ಸಲ್ಲಿಸಿದ ಅರ್ಜಿಯು ನ್ಯಾಯಮೂರ್ತಿ ಕೃಷ್ಣ ಎಸ್‌. ದೀಕ್ಷಿತ್‌ ಅವರ ನ್ಯಾಯಪೀಠದ ಮುಂದೆ ಶುಕ್ರವಾರ ವಿಚಾರಣೆಗೆ ಬಂದಿತ್ತು.

ಕೆಲ ಕಾಲ ಅರ್ಜಿದಾರ ಪರ ವಕೀಲರ ವಾದ ಆಲಿಸಿದ ನ್ಯಾಯಪೀಠ, ಅರ್ಜಿದಾರರ ವಿರುದ್ಧದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ವಿಚಾರಣೆಗೆ ತಡೆಯಾಜ್ಞೆ ನೀಡಿತು. ಅಲ್ಲದೆ, ಪ್ರಕರಣದಲ್ಲಿ ದೂರುದಾರರಾಗಿರುವ ಕಾಪು ವಿಧಾನಸಭಾ ಕ್ಷೇತ್ರದ ಚುನಾವಣ ಸಂಚಾರ ವಿಚಕ್ಷಣ ಅಧಿಕಾರಿಯಾಗಿದ್ದ ವಿಶ್ವನಾಥ್‌ ಶೆಟ್ಟಿ ಅವರಿಗೆ ನೋಟಿಸ್‌ ಜಾರಿಗೊಳಿಸಿ ವಿಚಾರಣೆ ಮುಂದೂಡಿತು.

Related posts

ಕರ್ನಾಟಕ ಕ್ರೀಡಾಕೂಟದಲ್ಲಿ ಸಮರಾಗೆ ಚಿನ್ನದ ಪದಕ

ಯಕ್ಷಗಾನ ಪ್ರದರ್ಶನಕ್ಕೆ ಅಡ್ಡಿ – ಬ್ರಿಟಿಷ್ ಆಡಳಿತವನ್ನೂ ಮೀರಿಸಿದ ಸಿದ್ಧರಾಮಯ್ಯ ಸರ್ಕಾರ : ಯಶ್‌ಪಾಲ್ ಸುವರ್ಣ

ಮಾರಿದ ಹಳೆಯ ಬಸ್ಸನ್ನು ಕದ್ದು ತಂದ ಆರೋಪ – ತಂದೆ ಮಗನ ವಿರುದ್ಧ ದೂರು ದಾಖಲು !