ಉಡುಪಿ : ಉಡುಪಿಯಲ್ಲಿ ಇವತ್ತು ಉಡುಪಿ ಜಿಲ್ಲೆಯ ಐವರು ಬಿಜೆಪಿ ಶಾಸಕರು ಸುದ್ದಿಗೋಷ್ಟಿ ನಡೆಸಿ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಈ ಸರಕಾರ ಕರಾವಳಿಯನ್ನು ನಿರ್ಲಕ್ಷ್ಯ ಮಾಡಿದೆ. ಇದೇ ಪ್ರವೃತ್ತಿ ಮುಂದುವರೆಸಿದರೆ ಮುಖ್ಯಮಂತ್ರಿಗಳ ಮನೆ ಮುಂದೆ ಧರಣಿ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
ಹೊಟೇಲ್ ಕಿದಿಯೂರು ಸಭಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾರ್ಕಳ ಶಾಸಕ ಸುನಿಲ್ ಕುಮಾರ್, ಕಳೆದ ಜುಲೈನಿಂದ ಈತನಕ ಉಡುಪಿ ಜಿಲ್ಲೆಗೆ ಸಂಬಂಧಿಸಿದಂತೆ ಯಾವುದೇ ಅನುದಾನಗಳು ಬಂದಿಲ್ಲ. ಜಿಲ್ಲೆಯಲ್ಲಿ ವ್ಯಾಪಕ ಮಳೆಹಾನಿ ಸಂಭವಿಸಿದೆ. ಈ ವರ್ಷದ ಮಳೆಗಾಲದಲ್ಲಿ ಕಡಲ ಕೊರೆತ ಸಮಸ್ಯೆ ಉಂಟಾಗಿದೆ. ಕೆಡಿಪಿ ಸಭೆಯಲ್ಲಿ ಈ ಬಗ್ಗೆ ಚರ್ಚೆ ಮಾಡಿ ಸಂಬಂಧಪಟ್ಟ ಮಂತ್ರಿಗಳನ್ನು ಭೇಟಿಯಾಗಿದ್ದೇವೆ. ಆದರೆ ಹಣ ಬಿಡುಗಡೆಯಾಗಿಲ್ಲ ಎಂದು ಆರೋಪ ಮಾಡಿದರು. ರಾಜ್ಯ ಸರ್ಕಾರ ಇದೇ ಪ್ರವೃತ್ತಿ ಮುಂದುವರಿಸಿದರೆ ಕರಾವಳಿ ಜಿಲ್ಲೆಗಳ ಶಾಸಕರು ಮುಖ್ಯಮಂತ್ರಿ ಮನೆ ಎದುರು ಧರಣಿ ನಡೆಸುತ್ತೇವೆ ಎಂದು ಸುನಿಲ್ ಕುಮಾರ್ ಎಚ್ಚರಿಕೆ ನೀಡಿದರು.
ಸುದ್ದಿಗೋಷ್ಠಿಯಲ್ಲಿ ಕಾಪು ಶಾಸಕ ಸುರೇಶ್ ಶೆಟ್ಟಿ ಗರ್ಮೆ, ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ, ಸಂಸದ ಕೋಟ ಶ್ರೀನಿವಾಸ್ ಪೂಜಾರಿ, ಕುಂದಾಪುರ ಶಾಸಕ ಕಿರಣ್ ಕೊಡ್ಗಿ ಉಪಸ್ಥಿತರಿದ್ದರು.