ಉಡುಪಿ : ಜಿಲ್ಲೆಯಲ್ಲಿರುವ ಎಲ್ಲಾ ಕೈಗಾರಿಕಾ ಪ್ರದೇಶಗಳಲ್ಲಿ ಅಗತ್ಯವಿರುವ ಮೂಲಭೂತ ಸೌಕರ್ಯಗಳಾದ ರಸ್ತೆ, ಒಳಚರಂಡಿ ಸೇರಿದಂತೆ ನೀರಿನ ವ್ಯವಸ್ಥೆ ಕಲ್ಪಿಸಬೇಕು. ನಿರಂತರ ವಿದ್ಯುತ್ ಸಂಪರ್ಕ ಕಲ್ಪಿಸಲು ವಿದ್ಯುತ್ ಸಾಮರ್ಥ್ಯ ವನ್ನು ಹೆಚ್ಚಿಸಬೇಕು ಎಂದು ಸಂಬಂಧಿತ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಸೂಚನೆಗಳನ್ನು ನೀಡಿದ್ದಾರೆ.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಕೈಗಾರಿಕಾ ಸ್ಪಂದನ ಸಮಿತಿ ಸಭೆ, ಜಿಲ್ಲಾ ಮಟ್ಟದ ಏಕಗವಾಕ್ಷಿ ಸಮಿತಿ ಸಭೆ ಹಾಗೂ ಪ್ರಧಾನಮಂತ್ರಿಗಳ ಉದ್ಯೋಗ ಸೃಜನಾ ಯೋಜನೆಯ ಜಿಲ್ಲಾ ಮಟ್ಟದ ಅನುಷ್ಠಾನ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.
ಜಿಲ್ಲೆಯಲ್ಲಿ ಹೊಸ ಕೈಗಾರಿಕೆಗಳ ಸ್ಥಾಪನೆಗೆ ಅನುಕೂಲವಾಗುವಂತೆ ಅಗತ್ಯ ಮೂಲಭೂತ ಸೌಕರ್ಯಗಳಾದ ಭೂಮಿ, ವಿದ್ಯುಚ್ಛಕ್ತಿ ಸೌಕರ್ಯ, ರಸ್ತೆ ಸೇರಿದಂತೆ ಎಲ್ಲಾ ಸೌಲಭ್ಯಗಳನ್ನು ಕಲ್ಪಿಸಿ ಸಾರ್ವಜನಿಕರಿಗೆ ಉದ್ಯೋಗ ದೊರೆಯುವಂತೆ ಕಾರ್ಯಪ್ರವೃತ್ತರಾಗಬೇಕು ಎಂದು ಅವರು ತಿಳಿಸಿದರು.
ಜಿಲ್ಲೆಯಲ್ಲಿ ಈಗಾಗಲೇ ಹೊಸ ಕೈಗಾರಿಕಾ ಪ್ರದೇಶಗಳ ನಿರ್ಮಾಣಕ್ಕೆ ವಿವಿಧ ತಾಲೂಕುಗಳಲ್ಲಿ 155 ಎಕರೆಗೂ ಅಧಿಕ ಭೂಮಿಯನ್ನು ಗುರುತಿಸಲಾಗಿದೆ. ಈ ಭೂಮಿಗಳ ಭೂಸ್ವಾಧೀನ ಪ್ರಕ್ರಿಯೆಯನ್ನು ಒಂದು ತಿಂಗಳ ಒಳಗೆ ಪೂರ್ಣಗೊಳಿಸಿ ಭೂಮಿಯನ್ನು ಕೆಐಎಡಿಬಿಗೆ ಹಸ್ತಾಂತರಿಸಬೇಕು ಎಂದು ಅವರು ಸೂಚನೆ ನೀಡಿದರು