ಮೈಕ್ರೋ-ಫೈನಾನ್ಸ್, ಲೇವಾದೇವಿ ಸಂಸ್ಥೆಗಳ ನೋಂದಣಿ ಕಡ್ಡಾಯ – ಜಿಲ್ಲಾಧಿಕಾರಿ ಡಾ.ಕೆ ವಿದ್ಯಾಕುಮಾರಿ

ಉಡುಪಿ : ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮೈಕ್ರೋ ಫೈನಾನ್ಸ್, ಸಾಲ ನೀಡಿಕೆ ಏಜನ್ಸಿ ಹಾಗೂ ಲೇವದೇವಿದಾರರು ಕರ್ನಾಟಕ ಕಿರು ಸಾಲ ಮತ್ತು ಸಣ್ಣ ಸಾಲ (ಬಲವಂತ ಕ್ರಮಗಳ ಪ್ರತಿ ಬಂಧಕ) ಆದೇಶ 2025 ನಿಯಮದನ್ವಯ ಜಿಲ್ಲಾ ನೋಂದಣಿ ಪ್ರಾಧಿಕಾರದಲ್ಲಿ ಕಡ್ಡಾಯವಾಗಿ ನೋಂದಣಿ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾ ಕುಮಾರಿ ತಿಳಿಸಿದರು.

ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್ ಡಾ. ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ನಡೆದ ಕರ್ನಾಟಕ ರಾಜ್ಯ ಮೈಕ್ರೋ ಫೈನಾನ್ಸ್ ಸಂಸ್ಥೆಗಳ ನಿಯಂತ್ರಣದ ಕುರಿತು ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.

ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್‌ಗಳು, ಸಾಲ ನೀಡಿಕೆ ಏಜೆನ್ಸಿ ಹಾಗೂ ಲೇವಾ ದೇವಿದಾರರು ನೀಡುವ ದುಬಾರಿ ಬಡ್ಡಿಗಳಿಂದ ಜನರು ತೊಂದರೆಗೊಳಗಾಗುವುದರ ಜೊತೆಗೆ ಕೆಲವು ಸಂಸ್ಥೆಗಳು ಬಲವಂತವಾಗಿ ವಸೂಲಾತಿ ಮಾಡುತ್ತಿವೆ. ಅದರಲ್ಲೂ ವಿಶೇಷವಾಗಿ ರೈತರು, ಮಹಿಳೆಯರು ಆರ್ಥಿಕ ದುರ್ಬಲರ ಮೇಲೆ ದೌರ್ಜನ್ಯ ಹಾಗೂ ದಬ್ಬಾಳಿಕೆ ನಡೆಸುವ ಪ್ರಕರಣಗಳು ಆಗುತ್ತಿರುವ ಹಿನ್ನೆಲೆಯಲ್ಲಿ ಇವುಗಳ ನಿಯಂತ್ರಣಕ್ಕೆ ಕರ್ನಾಟಕ ಕಿರು ಸಾಲ ಮತ್ತು ಸಣ್ಣ ಸಾಲ (ಬಲವಂತದ ಕ್ರಮಗಳ ಪ್ರತಿ ಬಂಧಕ) ಆದ್ಯಾದೇಶ 2025 ಜಾರಿಗೆ ತಂದಿದ್ದು, ಇದರ ಅನ್ವಯ ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುತ್ತಿತ್ತುವ ಸಂಸ್ಥೆಗಳು ಕಡ್ಡಾಯವಾಗಿ ಮೂವತ್ತು ದಿನಗಳ ಒಳಗಾಗಿ ಸೂಕ್ತ ಪ್ರಾಧಿಕಾರದ ಮುಂದೆ ನೋಂದಣಿ ಕಡ್ಡಾಯವಾಗಿ ಮಾಡಿಕೊಳ್ಳಬೇಕು ಎಂದರು.

ಮಾತ್ರವಲ್ಲ, ಭಾರತೀಯ ರಿಸರ್ವ್ ಬ್ಯಾಂಕ್‌ಗಳು ನೀಡುವ ಮಾರ್ಗದರ್ಶನಗಳು ಹಾಗೂ ನಿಯಮಗಳನ್ನು ತಪ್ಪದೆ ಪಾಲಿಸಬೇಕು ಎಂದ ಅವರು, ಮೈಕ್ರೋ ಫೈನಾನ್ಸ್‌ಗಳಲ್ಲಿ ಸಾಲ ಪಡೆದ ಗ್ರಾಹಕರಿಗೆ ತೊಂದರೆ ನೀಡುವಂತಹ ಪ್ರಕರಣಗಳು ಕೇಳಿ ಬರುತ್ತಿವೆ. ಮಾರ್ಗಸೂಚಿಗಳು ಹಾಗೂ ನಿಯಮಗಳನ್ನು ಪಾಲಿಸದೇ ಇರುವುದೇ ಇದಕ್ಕೆ ಕಾರಣವಾಗಿದೆ ಎಂದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಜಿಲ್ಲಾ ಪೋಲೀಸ್ ಅಧೀಕ್ಷಕ ಡಾ. ಅರುಣ್ ಕೆ, ಸಹಕಾರ ಸಂಘಗಳ ಉಪನಿಬಂಧಕಿ ಲಾವಣ್ಯ, ಮೈಕ್ರೋ ಫೈನಾನ್ಸ್‌ಗಳ ಮುಖ್ಯಸ್ಥರು, ಲೇವಾದೇವಿಗಾರರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Related posts

ಅಲೈನ್ಸ್ ಕ್ಲಬ್ ಉಡುಪಿಯಿಂದ ವೈದ್ಯರ ದಿನಾಚರಣೆ : ಪ್ರಸಿದ್ಧ ವೈದ್ಯ ಡಾ.ಆರ್.ಎನ್.ಭಟ್ ಅವರಿಗೆ ಸನ್ಮಾನ

ಶತಾವಧಾನಿ ಡಾ. ಆರ್. ಗಣೇಶ್ ಅವರಿಗೆ ತಲ್ಲೂರು ಕನಕ ಅಣ್ಣಯ್ಯ ಶೆಟ್ಟಿ ಪ್ರಶಸ್ತಿ ಪ್ರದಾನ

ರಂಗೋಲಿ ಕಲಾ ಸಾಧಕಿ, ಭಾರತಿ ಮರವಂತೆಗೆ ‘ಮಧುರಚೆನ್ನ ರಾಜ್ಯ ಪ್ರಶಸ್ತಿ’ ಪ್ರದಾನ