ಮಳೆ ಹಾನಿಯ ಕುರಿತು ಮುಖ್ಯಮಂತ್ರಿಗಳ ಜೊತೆ ಪ್ರತ್ಯೇಕ ಸಭೆ – ಜಿಲ್ಲಾಧಿಕಾರಿ

ಉಡುಪಿ : ಕರಾವಳಿಯಲ್ಲಿ ಈ ಬಾರಿಯ ಕಡಲ ಕೊರೆತ ಹಾಗೂ ಮಳೆ ಹಾನಿಯ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂದಿನ ಎರಡು-ಮೂರು ದಿನಗಳಲ್ಲಿ ಪ್ರತ್ಯೇಕ ಸಭೆಯನ್ನು ನಡೆಸಲಿದ್ದಾರೆ ಎಂದು ಉಡುಪಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ತಿಳಿಸಿದ್ದಾರೆ.

ಮಣಿಪಾಲದ ರಜತಾದ್ರಿಯಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಜಿಲ್ಲಾ ಮಟ್ಟದ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು. ಸಭೆಯಲ್ಲಿ ಸಮಗ್ರ ಮಾಹಿತಿ ನೀಡಲು ಹಾಗೂ ಅನುದಾನ ಪಡೆಯಲು ಅನುಕೂಲವಾಗುವಂತೆ ಜಿಲ್ಲೆಯಲ್ಲಿ ಈ ಬಾರಿ ಪ್ರಾಕೃತಿಕ ವಿಕೋಪದಿಂದ ಆಗಿರುವ ನಷ್ಟಗಳ ವಿವರವನ್ನು ಛಾಯಾಚಿತ್ರದೊಂದಿಗೆ ಇಲಾಖಾವಾರು ಅತೀ ಶೀಘ್ರದಲ್ಲಿ ನೀಡುವಂತೆ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲೆಯಲ್ಲಿ ಮುಂಬರುವ ದಿನಗಳಲ್ಲಿಯೂ ಸಹ ಹೆಚ್ಚಿನ ಮಳೆಯಾಗುವ ಸಾಧ್ಯತೆಗಳಿರುವುದರಿಂದ ಎಲ್ಲಾ ರೀತಿಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು. ಹೆಚ್ಚಿನ ಮಾನವ ಜೀವಹಾನಿ ಹಾಗೂ ಆಸ್ತಿ-ಪಾಸ್ತಿಗಳಿಗೆ ಹಾನಿ ಉಂಟಾಗದಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಮುಂಗಾರು ಮಳೆ ಆಗಸ್ಟ್ ತಿಂಗಳ ಕೊನೆಯವರೆಗೂ ಬರಲಿದೆ. ನೆರೆ-ಪ್ರವಾಹವು ಯಾವಾಗ ಬೇಕಾದರೂ ಉಂಟಾಗುವ ಸಾಧ್ಯತೆಗಳಿರುತ್ತವೆ. ಇವುಗಳ ನಿರ್ವಹಣೆಗೆ ಅಧಿಕಾರಿಗಳು ಸನ್ನದ್ಧರಾಗಿರಬೇಕು. ನಗರ ಹಾಗೂ ಗ್ರಾಮೀಣ ಭಾಗದ ತಗ್ಗುಪ್ರದೇಶಗಳಲ್ಲಿ ಮಳೆಯ ನೀರು ನುಗ್ಗಿ ನೆರೆ ಉಂಟಾಗುವ ಸಾಧ್ಯತೆಗಳಿರುವ ವ್ಯಾಪ್ತಿಯಲ್ಲಿ ಜನರು ಹಾಗೂ ಕುಟುಂಬಗಳನ್ನು ತಕ್ಷಣದಲ್ಲಿಯೇ ಬೇರೆಡೆಗೆ ವರ್ಗಾಯಿಸುವುದು ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಯೋಜನೆಗಳನ್ನು ರೂಪಿಸಿ, ಸಮಸ್ಯೆ ಕಂಡುಬಂದಲ್ಲಿ ತಕ್ಷಣವೇ ನೆರವಿಗೆ ಧಾವಿಸಬೇಕು ಎಂದರು.

Related posts

Worlds Fastest Bhagvad Gita Writer Completing 18 Chapters & 700 Verses in Just 5.30 Hours

ಮೀನುಗಾರರ ಪ್ರತಿಭಟನೆಯಲ್ಲಿ ಪ್ರಚೋದನಕಾರಿ ಭಾಷಣ-ಹಿಂದೂ ಯುವಸೇನೆ ಮುಖಂಡನ ವಿರುದ್ಧ ಸುಮೊಟೋ ಕೇಸ್

ಮಲ್ಪೆ ಮಹಿಳೆಯ ಬ್ಯಾಗ್‌ ಎಳೆದು ಪರಾರಿಯಾದ ಆರೋಪಿ ಪೊಲೀಸ್ ವಶಕ್ಕೆ