ಉಡುಪಿ : ಜಿಲ್ಲೆಯಲ್ಲಿ ಹೊಸ ವರ್ಷಾಚರಣೆ ಸಂದರ್ಭ ಅಹಿತಕರ ಘಟನೆ ತಡೆಯುವ ಉದ್ದೇಶದಿಂದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ. ಅವರು ಸಾರ್ವಜನಿಕರಿಗೆ ವಿಶೇಷ ಸೂಚನೆ ನೀಡಿದ್ದಾರೆ.
ಹೊಸ ವರ್ಷಾಚರಣೆಗೆ ಡಿ.31ರ ರಾತ್ರಿ 12.30ರ ವರೆಗೆ ಸಮಯ ನಿಗದಿ ಮಾಡಲಾಗಿದೆ. ಶಬ್ದ ಮಾಲಿನ್ಯವಾಗದಂತೆ ಧ್ವನಿವರ್ಧಕಗಳನ್ನು ರಾತ್ರಿ 10 ಗಂಟೆ ವರೆಗೆ ಮಾತ್ರ ಬಳಸಬಹುದು. ನೈತಿಕ ಪೊಲೀಸ್‌ಗಿರಿ, ಅನುಚಿತ ವರ್ತನೆ ನಡೆಸುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಜರಗಿಸಲಾಗುವುದು. ನೈತಿಕ ಪೊಲೀಸ್‌ಗಿರಿ ತಡೆಯಲು ಪೊಲೀಸರ ಪ್ರತ್ಯೇಕ ತಂಡ ರಚಿಸಲಾಗಿದೆ ಎಂದಿದ್ದಾರೆ.
ಹೊಸ ವರ್ಷಾಚರಣೆ ಸಂದರ್ಭ ಸಾರ್ವಜನಿಕರಿಗೆ ತೊಂದರೆ ಆಗದಂತೆ ವಾಹನ ಪಾರ್ಕಿಂಗ್ ವ್ಯವಸ್ಥೆಗಳನ್ನು ಮಾಡಿಕೊಳ್ಳಬೇಕಿದೆ. ಹೊಸ ವರ್ಷಾಚರಣೆ ಸಮಯ ಅಕ್ಕಪಕ್ಕದ ಜನರಿಗೆ ತೊಂದರೆಯಾಗಬಾರದು. ವಿಶೇಷವಾಗಿ ಆಸ್ಪತ್ರೆ, ಅಪಾರ್ಟ್‌ಮೆಂಟ್‌ಗಳಲ್ಲಿ ವಾಸವಾಗಿರುವ ಹಿರಿಯರಿಗೆ, ವಿದ್ಯಾರ್ಥಿಗಳಿಗೆ ತೊಂದರೆ ಆಗದಂತೆ ಸೂಕ್ತ ಎಚ್ಚರಿಕೆ ವಹಿಸಬೇಕು. ಅಹಿತಕರ ಘಟನೆಗಳು ನಡೆದರೆ ಸಾರ್ವಜನಿಕರು 112ಕ್ಕೆ ಕರೆ ಮಾಡಿ ಪೊಲೀಸರ ಗಮನಕ್ಕೆ ತರಬಹುದು. ಕಾನೂನು ಕೈಗೆತ್ತಿಕೊಳ್ಳದೆ ಪೊಲೀಸರಿಗೆ ಮಾಹಿತಿ ನೀಡಬೇಕು. ಡ್ರಗ್ಸ್, ರೇವ್‌ಪಾರ್ಟಿ, ಅಪಾರ್ಟ್‌ಮೆಂಟ್, ಹೋಂಸ್ಟೇಗಳಲ್ಲಿ ಅನೈತಿಕ ಚಟುವಟಿಕೆಗಳು ನಡೆಯದಂತೆ ವಿಶೇಷ ತಂಡ ಕಾರ್ಯನಿರ್ವಹಿಸಲಿದೆ ಎಂದು ಎಸ್‌ಪಿ ತಿಳಿಸಿದ್ದಾರೆ.