ವಿದ್ಯಾರ್ಥಿ ನಿಲಯಗಳಲ್ಲಿ ಪ್ರವೇಶಾತಿ ಒದಗಿಸದೇ ಬಡ ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಚೆಲ್ಲಾಟವಾಡುತ್ತಿರುವ ರಾಜ್ಯ ಸರಕಾರ : ಯಶ್‌ಪಾಲ್ ಸುವರ್ಣ ಆಕ್ರೋಶ

ಉಡುಪಿ : ನೂತನ ಶೈಕ್ಷಣಿಕ ವರ್ಷದ ಶಾಲಾ ಕಾಲೇಜುಗಳು ಆರಂಭಗೊಂಡು 15 ದಿನಗಳು ಕಳೆದರೂ ವಿದ್ಯಾರ್ಥಿ ನಿಲಯಗಳ ಪ್ರವೇಶಾತಿಗೆ ವಿದ್ಯಾರ್ಥಿಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ನೀಡದೇ ಅತಂತ್ರ ಸ್ಥಿತಿ ನಿರ್ಮಾಣವಾಗಿದ್ದು ರಾಜ್ಯ ಸರ್ಕಾರ ಬಡ ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಚೆಲ್ಲಾಟವಾಡುತ್ತಿದೆ ಎಂದು ರಾಜ್ಯ ಸರಕಾರದ ವಿರುದ್ಧ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಮುಖ್ಯಮಂತ್ರಿಗಳಿಗೆ ಪತ್ರ ಬರೆದ ಯಶ್‌ಪಾಲ್ ಸುವರ್ಣ ತಕ್ಷಣ ರಾಜ್ಯದಾದ್ಯಂತ ಪರಿಶಿಷ್ಟ ಜಾತಿ, ಪಂಗಡ, ಹಿಂದುಳಿದ ವರ್ಗ, ಅಲ್ಪಸಂಖ್ಯಾತ ಸಹಿತ ಎಲ್ಲಾ ವಿದ್ಯಾರ್ಥಿನಿಲಯಗಳ ಪ್ರವೇಶಾತಿಗೆ ಅರ್ಜಿ ಸ್ವೀಕರಿಸಿ ಅರ್ಹ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಸೌಲಭ್ಯ ಒದಗಿಸುವಂತೆ ಆಗ್ರಹಿಸಿದ್ದಾರೆ.

ಸರ್ಕಾರಿ ಶಾಲಾ ಕಾಲೇಜುಗಳಲ್ಲಿ ಪ್ರವೇಶ ಪಡೆದಿರುವ ವಿದ್ಯಾರ್ಥಿಗಳು ಸೂಕ್ತ ವಸತಿ ನಿಲಯದ ವ್ಯವಸ್ಥೆಯಿಲ್ಲದೆ ತರಗತಿಗೆ ಹಾಜರಾಗದೇ ಶಿಕ್ಷಣದಿಂದ ವಂಚಿತರಾಗುವ ಸನ್ನಿವೇಶ ನಿರ್ಮಾಣವಾಗಿದೆ. ಶಿಕ್ಷಣಕ್ಕೆ ಪೂರಕವಾಗಿರುವ ಹಾಸ್ಟೆಲ್ ವ್ಯವಸ್ಥೆಯನ್ನು ಸರ್ಕಾರ ತಕ್ಷಣ ಪ್ರವೇಶಾತಿ ನೀಡಲು ಕ್ರಮ ವಹಿಸದಿದ್ದಲ್ಲಿ ಬಡ ವಿದ್ಯಾರ್ಥಿಗಳು ಗಂಭೀರ ಸಮಸ್ಯೆ ಎದುರಿಸಲಿದ್ದಾರೆ. ಉಡುಪಿ ಜಿಲ್ಲೆಯ ವಿವಿಧ ಶಾಲಾ ಕಾಲೇಜುಗಳಲ್ಲಿ ರಾಜ್ಯದ ವಿವಿಧ ಜಿಲ್ಲೆಗಳ ವಿದ್ಯಾರ್ಥಿಗಳು ಪ್ರವೇಶಾತಿ ಪಡೆದಿದ್ದು, ಹಾಸ್ಟೆಲ್ ವ್ಯವಸ್ಥೆಯಿಲ್ಲದೆ ತೊಂದರೆ ಅನುಭವಿಸುತ್ತಿದ್ದಾರೆ ಹಾಗೂ ದುಬಾರಿ ದರದ ಪಿ. ಜಿ. ಮುಂತಾದ ಖಾಸಗಿ ವ್ಯವಸ್ಥೆ‌ಗಳನ್ನು ಅವಲಂಬಿತರಾಗಿ ಆರ್ಥಿಕವಾಗಿ ಸಂಕಷ್ಟಕ್ಕೀಡಾಗಿದ್ದಾರೆ.

ರಾಜ್ಯ ಸರ್ಕಾರ ಸಮಸ್ಯೆಯ ಗಂಭೀರತೆ ಅರಿತು, ಬಡ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ತಕ್ಷಣ ವಿದ್ಯಾರ್ಥಿನಿಲಯದ ಪ್ರವೇಶಾತಿ ನೀಡಲು ಕ್ರಮ ವಹಿಸುವಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಸಮಾಜ ಕಲ್ಯಾಣ ಸಚಿವರಾದ ಎಚ್ ಸಿ. ಮಹದೇವಪ್ಪ ಹಾಗೂ ಹಿಂದುಳಿದ ವರ್ಗಗಳ ಸಚಿವರಾದ ಶಿವರಾಜ್ ತಂಗಡಗಿಯವರಿಗೆ ಯಶ್‌ಪಾಲ್ ಸುವರ್ಣ ಮನವಿ ಮಾಡಿದ್ದಾರೆ.

Related posts

ಉಡುಪಿ ಜಿಲ್ಲೆಯಲ್ಲಿ ಉಪವಾಸ, ಧ್ಯಾನದೊಂದಿಗೆ ಗುಡ್ ಫ್ರೈಡೆ ಆಚರಣೆ

ಬಿಎಸ್‌ಎನ್‌ಎಲ್ ಸಂಪರ್ಕದ ಕುಂದು ಕೊರತೆ, ಗುಣಮಟ್ಟ ಉತ್ತಮಗೊಳಿಸುವಿಕೆ ಸಭೆಯಲ್ಲಿ ಸಂಸದ ಕೋಟ ಭಾಗಿ

ನೇತ್ರಾವತಿ ಹೋರಾಟಕ್ಕೆ ಸಜ್ಜು – ತೋನ್ಸೆ ಜಯಕೃಷ್ಣ ಶೆಟ್ಟಿ