ಉಡುಪಿ : ನಗರದ ನಿಟ್ಟೂರಿನಲ್ಲಿರುವ ನೊಂದ ಮಹಿಳೆಯರಿಗೆ ಒಂದೇ ಸೂರಿನಡಿ ವಿವಿಧ ಸೌಲಭ್ಯ ಕಲ್ಪಿಸುವ ‘ಸಖಿ ಒನ್ ಸ್ಟಾಪ್ ಸೆಂಟರ್ನಲ್ಲಿ ಈ ವರ್ಷದ ಎಪ್ರಿಲ್ನಿಂದ ಜೂನ್ವರೆಗೆ ಒಟ್ಟು 64 ಪ್ರಕರಣಗಳು ದಾಖಲಾಗಿದ್ದು, ಇವುಗಳಲ್ಲಿ 30 ಪ್ರಕರಣಗಳು ಇತ್ಯರ್ಥ ಪಡಿಸಲಾಗಿದೆ. ಬಾಕಿ ಉಳಿದಿರುವ 34 ಪ್ರಕರಣಗಳನ್ನು ಅತ್ಯಂತ ಶೀಘ್ರವಾಗಿ ಇತ್ಯರ್ಥಪಡಿಸಲು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ತಿಳಿಸಿದ್ದಾರೆ.

ಮಣಿಪಾಲದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ಮಟ್ಟದ ವಿವಿಧ ಸಮನ್ವಯ ಸಮಿತಿ ಸಭೆಗಳ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು. ನ್ಯಾಯಾಲಯದಲ್ಲಿರುವ ಪ್ರಕರಣಗಳನ್ನು ಕಾನೂನು ಸಲಹೆಗಾರರ ನೆರನೊಂದಿಗೆ ಬಗೆಹರಿಸಲು ಪ್ರಯತ್ನಿಸಬೇಕು ಎಂದವರು ಸೂಚನೆ ನೀಡಿದ್ದಾರೆ.
ಜಿಲ್ಲೆಯಲ್ಲಿ ಪ್ರಸವಪೂರ್ವ ಲಿಂಗ ಪತ್ತೆ ಹಾಗೂ ಭ್ರೂಣ ಹತ್ಯೆ ಪ್ರಕರಣಗಳು ನಡೆಯದಂತೆ ಅಗತ್ಯವಿರುವ ಎಲ್ಲಾ ರೀತಿಯ ಎಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳಬೇಕು. ಸಾರ್ವಜನಿಕರಿಂದ ಈ ಬಗ್ಗೆ ಸಣ್ಣ ಮಾಹಿತಿ ಬಂದರೂ ಅದರ ಬಗ್ಗೆ ನಿರ್ಲಕ್ಷ್ಯ ವಹಿಸದೇ ಸೂಕ್ಷ್ಮವಾಗಿ ತನಿಖೆ ಕೈಗೊಳ್ಳಬೇಕು. ಒಂದೊಮ್ಮೆ ಉಲ್ಲಂಘನೆ ಆಗಿರುವುದು ಖಚಿತವಾದಲ್ಲಿ ಕಾನೂನಿನ ಅಡಿಯಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಸ್ಪಷ್ಟ ನಿರ್ದೇಶನ ನೀಡಿದರು.