ಉಡುಪಿ : ಬೇಸಿಗೆ ಪ್ರಾರಂಭಗೊಂಡಿದೆ. ಜಿಲ್ಲೆಯಲ್ಲಿ ಜಾತ್ರೆ, ರಥೋತ್ಸವ, ಊರ ಹಬ್ಬ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯುತ್ತಿರುತ್ತವೆ. ಇಂತಹ ಸಂದರ್ಭದಲ್ಲಿ ಕಲುಷಿತ ನೀರು, ಕಲುಷಿತ ಆಹಾರ ಸೇವನೆಯಿಂದ ಕರುಳು ಬೇನೆ, ಕಾಲರಾ, ವಿಷಮಶೀತ ಜ್ವರ, ಕಾಮಾಲೆ ಸೇರಿದಂತೆ ವಿವಿಧ ಸಾಂಕ್ರಾಮಿಕ ರೋಗಗಳು ಸ್ಪೋಟಗೊಳ್ಳುವ ಅಥವಾ ಹರಡುವ ಸಾಧ್ಯತೆಗಳಿರುತ್ತವೆ. ಇವುಗಳ ಬಗ್ಗೆ ಮುಂಜಾಗ್ರತಾ ಕ್ರಮ ಕೈಗೊಳ್ಳುವ ಬಗ್ಗೆ ಜನರಿಗೆ ಮಾಹಿತಿ ನೀಡಬೇಕು ಹಾಗೂ ಸ್ವಚ್ಛತೆಗೆ ವಿಶೇಷ ಆದ್ಯತೆ ನೀಡಬೇಕು ಎಂದು ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ತಿಳಿಸಿದ್ದಾರೆ. ಆರೋಗ್ಯ ಇಲಾಖೆಯ ವಿವಿಧ ಸಮನ್ವಯ ಸಮಿತಿ ಸಭೆಯಲ್ಲಿ ಅವರು ಸೂಚನೆಗಳನ್ನು ನೀಡಿ ಅವರು ಮಾತನಾಡುತ್ತಿದ್ದರು.
ಜನಸಾಮಾನ್ಯರಿಗೆ ಉತ್ತಮ ಆರೋಗ್ಯ ಸೇವೆಗಳನ್ನು ಒದಗಿಸಲು ಸರಕಾರ ಜಾರಿಗೆ ತಂದಿರುವ ಅನೇಕ ಯೋಜನೆಗಳು ಹಾಗೂ ಕಾರ್ಯಕ್ರಮಗಳನ್ನು ಪ್ರತಿಶತ ನೂರರಷ್ಟು ಅನುಷ್ಠಾನಗೊಳಿಸಿ, ಜನರು ಆರೋಗ್ಯವಂತರಾಗಿರುವಂತೆ ನೋಡಿಕೊಳ್ಳಬೇಕು ಎಂದು ಅವರು ಅಧಿಕಾರಿಗಳಿಗೆ ತಿಳಿಸಿದರು.
ಜಿಲ್ಲೆಯಲ್ಲಿ ಕೆ.ಪಿ.ಎಂ.ಇ ಅಡಿ ಅನುಮತಿ ಪಡೆದ ಕ್ಲಿನಿಕ್ಗಳು ಹಾಗೂ ಆರೋಗ್ಯ ಸಂಸ್ಥೆಗಳು ವೈದ್ಯಕೀಯ ವೆಚ್ಚದ ದರಪಟ್ಟಿ ಪ್ರದರ್ಶನ ಮಾಡುವುದು ಕಡ್ಡಾಯವಾಗಿದ್ದು, ಒಂದು ವೇಳೆ ಪ್ರದರ್ಶನ ಮಾಡದಿದ್ದಲ್ಲಿ ಮೊದಲ ಬಾರಿ ನೋಟೀಸ್ ನೀಡಿ, ಮತ್ತೊಮ್ಮೆ ಪುನರಾವರ್ತಿಸಿದಲ್ಲಿ ಅಂತಹ ಆರೋಗ್ಯ ಸಂಸ್ಥೆ ಅಥವಾ ಕ್ಲಿನಿಕ್ಗಳ ಪರವಾನಿಗೆಯನ್ನು ರದ್ದುಪಡಿಸಬೇಕು. ಕ್ಲಿನಿಕ್ಗಳು ಹಾಗೂ ನರ್ಸಿಂಗ್ಹೋಂಗಳಲ್ಲಿ ನಿರ್ವಹಣೆ ಕೆ.ಪಿ.ಎಂ.ಇ ಕಾಯ್ದೆಯ ನಿಯಮಾನುಸಾರ ಆಗುತ್ತಿದೆಯೇ ಎಂಬ ಬಗ್ಗೆ ಆಗಾಗ ಭೇಟಿ ನೀಡಿ ಪರಿಶೀಲಿಸಬೇಕು ಎಂದರು.