ಉಡುಪಿ : ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮಾರ್ಚ್ 2 ಭಾನುವಾರ 4ಗಂಟೆಗೆ ಕಾರ್ಕಳ ಗಾಂಧಿ ಮೈದಾನದಲ್ಲಿ ನಡೆಯುವ ಕಾಂಗ್ರೆಸ್ ಕುಟುಂಬೋತ್ಸವದಲ್ಲಿ ಭಾಗವಹಿಸಲಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ಮುನಿಯಾಲು ಉದಯಕುಮಾರ್ ಶೆಟ್ಟಿ ಹೇಳಿದರು.
ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಕಾಪು ಮಾರಿಕಾಂಬೆಯ ಪ್ರತಿಷ್ಠಾಪನೆಯಲ್ಲಿ ಭಾಗವಹಿಸಿದ ಬಳಿಕ ಉಪಮುಖ್ಯಮಂತ್ರಿ ಕಾರ್ಕಳದಲ್ಲಿ ನಡೆಯುವ ಸಂಭ್ರಮದಲ್ಲಿ ಜೊತೆಯಾಗಲಿದ್ದಾರೆ. ಈ ಬಾರಿಯ ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯತ್ ಚುನಾವಣೆಗೆ ಕಾರ್ಯಕರ್ತರನ್ನು ಹುರಿದುಂಬಿಸಲಿದ್ದಾರೆ. ಕಾರ್ಕಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ 209 ಬೂತ್ಗಳ, 34 ಗ್ರಾಮೀಣ ಕಾಂಗ್ರೆಸ್ ಗಳ ಹಾಗೂ 2 ಬ್ಲಾಕ್ ಕಾಂಗ್ರೆಸ್ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಇದೇ ವೇದಿಕೆಯಲ್ಲಿ ನಡೆಯಲಿದ್ದು ಕಾಂಗ್ರೆಸ್ ಕುಟುಂಬ ಒಂದಾಗಿ ಸಂಭ್ರಮಿಸಲಿದೆ.
ಮಾಜಿ ಮುಖ್ಯಮಂತ್ರಿ ಡಾ. ವೀರಪ್ಪ ಮೊಯ್ಲಿ ಅವರು ಶಾಸಕತ್ವ ಪಡೆದು 50 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಅವರಿಗೆ ಕಾಂಗ್ರೆಸ್ ಕುಟುಂಬೋತ್ಸವದಲ್ಲಿ ಅಭಿನಂದನಾ ಸಮಾರಂಭ ಹಮ್ಮಿಕೊಳ್ಳಲಾಗಿದೆ. ಜೊತೆಗೆ ವಿವಿಧ ಕ್ಷೇತ್ರದ ಸಾಧಕರಿಗೆ ಸನ್ಮಾನ, ಪದಾಧಿಕಾರಿಗಳ ಪದಗ್ರಹಣ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ಅದ್ಧೂರಿಯಾಗಿ ನಡೆಯಲಿವೆ ಎಂದವರು ತಿಳಿಸಿದರು.