ಉಡುಪಿ : ಹಿಂದೂ ಸಂಘಟನೆಗಳು ಇಂದು ಉಡುಪಿ ಎಸ್ಪಿ ವಿರುದ್ಧ ಬೀದಿಗಿಳಿದು ಪ್ರತಿಭಟನೆ ನಡೆಸಿದವು. ಪ್ರತಿಭಟನೆಯಲ್ಲಿ ಬಿಜೆಪಿಯ ಐವರು ಶಾಸಕರು ಭಾಗಿಯಾಗಿದ್ದು ವಿಶೇಷವಾಗಿತ್ತು.
ಪ್ರಾರಂಭದಲ್ಲಿ ಎಸ್ಪಿ ಕಚೇರಿಯೆದುರು ಪ್ರತಿಭಟನೆ ನಡೆಸಲು ಸಿದ್ಧತೆ ನಡೆದಿತ್ತು. ಈ ಹಿನ್ನೆಲೆಯಲ್ಲಿ ಎಸ್ಪಿ ಕಚೇರಿ ಮುಂಭಾಗದಲ್ಲಿ ಭಾರಿ ಭದ್ರತೆ ಮಾಡಲಾಯಿತು. ಹಿಂದೂ ಜಾಗರಣ ವೇದಿಕೆ ಈ ಪ್ರತಿಭಟನೆ ನೇತೃತ್ವ ವಹಿಸಿತ್ತು. ಕೊನೆ ಕ್ಷಣದಲ್ಲಿ ಎಸ್ಪಿ ಕಚೇರಿ ಬದಲು ದೂರದ ಬ್ರಹ್ಮಗಿರಿ ಸರ್ಕಲ್ನಲ್ಲಿ ಪ್ರತಿಭಟನೆ ನಡೆಯಿತು.
ಹಿಂದೂ ಕಾರ್ಯಕರ್ತರ ಮೇಲೆ ಪೊಲೀಸ್ ಇಲಾಖೆ ನಿರಂತರ ದಬ್ಬಾಳಿಕೆ ಖಂಡಿಸಿ ಈ ಪ್ರತಿಭಟನಾ ಸಭೆ ಆಯೋಜಿಸಲಾಗಿತ್ತು. ಉಡುಪಿ ಶಾಸಕ ಯಶ್ಪಾಲ್ ಸುವರ್ಣ, ಕಾರ್ಕಳ ಶಾಸಕ ಸುನಿಲ್ ಕುಮಾರ್, ಕುಂದಾಪುರ ಶಾಸಕ ಕಿರಣ್ ಕೊಡ್ಗಿ, ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ, ಕಾಪು ಶಾಸಕ ಸುರೇಶ್ ಶೆಟ್ಟಿ ಗುರ್ಮೆ.. ಹೀಗೆ ಐವರು ಶಾಸಕರು ಪ್ರತಿಭಟನೆಯಲ್ಲಿ ಭಾಗಿಯಾಗಿ ರಾಜ್ಯ ಸರ್ಕಾರದ ವಿರುದ್ಧ ಮತ್ತು ಅದರ ಕೈಗೊಂಬೆಯಂತೆ ವರ್ತಿಸುತ್ತಿರುವ ಪೊಲೀಸ್ ಇಲಾಖೆ ವಿರುದ್ಧ ಆಕ್ರೋಶ ಹೊರಹಾಕಿದರು.