ಉಡುಪಿ : ಕರ್ನಾಟಕ ವಿಧಾನಪರಿಷತ್ ಉಪಚುನಾವಣೆ-2024ಕ್ಕೆ ಸಂಬಂಧಿಸಿದಂತೆ ಅ.21ರ ಸೋಮವಾರ ಮತದಾನ ನಡೆಯಲಿದ್ದು, ಈ ಸಂದರ್ಭದಲ್ಲಿ ಸಾರ್ವಜನಿಕ ಶಾಂತಿ ಸುವ್ಯವಸ್ಥೆಯನ್ನು ಕಾಪಾಡುವ ಮೂಲಕ ಮುಕ್ತ, ನ್ಯಾಯಯುತ ಹಾಗೂ ನಿಷ್ಪಕ್ಷಪಾತ ಚುನಾವಣೆಯನ್ನು ನಡೆಸುವ ನಿಟ್ಟಿನಲ್ಲಿ, ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 2023ರ ಕಲಂ 163 ಮತ್ತು ಕರ್ನಾಟಕ ಪೊಲೀಸ್ ಕಾಯ್ದೆ 1963ರ ಕಲಂ 35 ರಡಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಜಿಲ್ಲೆಯಲ್ಲಿ ನಿಗದಿಪಡಿಸಲಾದ ಒಟ್ಟು 158 ಮತದಾನ ಕೇಂದ್ರಗಳ ಸುತ್ತಮುತ್ತ 100ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ, ಜಿಲ್ಲಾ ದಂಡಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ.
ಈ ಸಂದರ್ಭದಲ್ಲಿ ಮತಗಟ್ಟೆ ವ್ಯಾಪ್ತಿಯಲ್ಲಿ ಐದಕ್ಕಿಂತ ಹೆಚ್ಚು ಜನರು ಗುಂಪು ಸೇರುವುದು, ಮೆರವಣಿಗೆ ಅಥವಾ ಸಭೆ ಸಮಾರಂಭ ಜರಗಿಸುವುದನ್ನು ಹಾಗೂ ಚುನಾವಣಾ ಅಭ್ಯರ್ಥಿ/ ಬೆಂಬಲಿಗರು ಸೇರಿ 05 ಜನರಿಗಿಂತ ಹೆಚ್ಚಿನ ಸಂಖ್ಯೆಯ ಜನರು ಸೇರುವುದನ್ನು ನಿಷೇಧಿಸಲಾಗಿದೆ.
ಯಾವುದೇ ಮಾರಕಾಸ್ತ್ರವನ್ನು ಹಿಡಿದು ತಿರುಗುವುದನ್ನು ಪ್ರತಿಬಂಧಿಸಲಾಗಿದೆ. ಹಾಗೂ ಮತಗಟ್ಟೆ ವ್ಯಾಪ್ತಿಯಲ್ಲಿ ಬರುವ ಝೆರಾಕ್ಸ್ ಅಂಗಡಿ, ಬುಕ್ಸ್ಟಾಲ್, ಸೈಬರ್ ಕೆಫೆಗಳನ್ನು ನಿರ್ಬಂಧಿಸಲಾಗಿದೆ.
ಮತದಾನ ದಿನ ಮತಗಟ್ಟೆಗಳ 200ಮೀ. ಒಳಗೆ ಚುನಾವಣಾ ಪ್ರಚಾರ ಮಾಡುವುದನ್ನು ನಿಷೇಧಿಸಲಾಗಿದೆ. ಶವ ಸಂಸ್ಕಾರ ಅಥವಾ ಮದುವೆ ಮತ್ತು ಧಾರ್ಮಿಕ ಮೆರವಣಿಗೆಗೆ ಈ ಆಜ್ಞೆ ಅನ್ವಯಿಸುವುದಿಲ್ಲ. ಆದರೆ ಇವುಗಳಿಂದ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ, ಕಾನೂನು- ಸುವ್ಯವಸ್ಥೆಗೆ ಧಕ್ಕೆಯಾಗದಂತೆ ನೋಡಿಕೊಳ್ಳಬೇಕು.