ಉಡುಪಿ : ಕಳೆದು ಐದು ದಿನಗಳಿಂದ ಉಡುಪಿ ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ನೆರೆಯ ಭೀತಿ ಉಂಟಾಗಿದೆ. ಹವಾಮಾನ ಇಲಾಖೆ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಮುಂಜಾಗೃತ ಕ್ರಮವಾಗಿ ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ನಾಳೆ (ಜುಲೈ 20) ರಜೆ ಘೋಷಿಸಿ ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ಆದೇಶ ನೀಡಿದ್ದಾರೆ. ಉಳಿದಂತೆ ಎಲ್ಲಾ ಪದವಿ, ಸ್ನಾತಕೊತ್ತರ ಪದವಿ. ಡಿಪ್ಲೋಮ, ಇಂಜಿನಿಯರಿಂಗ್, ಐ.ಟಿ.ಐ ಗಳಿಗೆ ರಜೆ ಘೋಷಿಸಿರುವುದಿಲ್ಲ.
District Administration
“ಗುಲಾಬಿ ಹೂ” ಪ್ರತಿಭಟನೆ; “ದ್ವೇಷದ ಮಾರುಕಟ್ಟೆಯಲ್ಲಿ ಪ್ರೀತಿಯ ಅಂಗಡಿ ತೆರೆಯೋಣ”
ಕಾರ್ಕಳ : ಜಿಲ್ಲಾಡಳಿತದ ವತಿಯಿಂದ ನಡೆದ ಜನಸ್ಪಂದನ ಸಭೆಯಲ್ಲಿ ಪುರಸಭೆ ಸದಸ್ಯ ಶುಭದ ರಾವ್ ಅವರ ಜತೆ ಅನುಚಿತವಾಗಿ ವರ್ತಿಸಿ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ವತಿಯಿಂದ ಡಿವೈಎಸ್ಪಿ ಅರವಿಂದ ಕಲಗುಜ್ಜಿ ವಿರುದ್ಧ ವಿನೂತನ ಪ್ರತಿಭಟನೆ ನಡೆಯಿತು.
ಕಾಂಗ್ರೆಸ್ ಮುಖಂಡ ಉದಯ ಶೆಟ್ಟಿ ಮುನಿಯಾಲು ನೇತೃತ್ವದಲ್ಲಿ ಕಾಂಗ್ರೆಸ್ ಕಚೇರಿಯಿಂದ ಡಿವೈಎಸ್ಪಿ ಕಚೇರಿಯವರೆಗೆ ನಡಿಗೆಯ ಮೂಲಕ ಬಂದು ದ್ವೇಷದ ಮಾರುಕಟ್ಟೆಯಲ್ಲಿ ಪ್ರೀತಿಯ ಅಂಗಡಿ ತೆರೆಯೋಣ ಎನ್ನುವ ಬರಹದ ಮೂಲಕ ಡಿವೈಎಸ್ಪಿ ವಿರುದ್ಧ ವಿನೂತನ ಪ್ರತಿಭಟನೆ ನಡೆಸಿದರು.
ಬಳಿಕ ಡಿವೈಎಸ್ಪಿ ಅರವಿಂದ ಕಲಗುಜ್ಜಿ ಹಾಗೂ ಪೊಲೀಸ್ ಸಿಬ್ಬಂದಿಗಳಿಗೆ ಗುಲಾಬಿ ಹೂವು ನೀಡಿ ದ್ವೇಷ ಮರೆತು ಪರಸ್ಪರ ಹಸ್ತಲಾಘವ ನೀಡಿದರು. ರಾಷ್ಟ್ರೀಯ ಪಕ್ಷವೊಂದು ನಡೆಸಿದ ಈ ವಿಶಿಷ್ಟ ಪ್ರತಿಭಟನೆ ಕಾರ್ಕಳ ನಗರದ ಜನರ ಗಮನ ಸೆಳೆಯಿತು.
ಕ್ರೀಡಾ ತಾರೆ ಹೆಬ್ರಿ ಗ್ರಾಮ ಆಡಳಿತಾಧಿಕಾರಿ ನವೀನ್ ಕುಮಾರ್ ಅವರಿಗೆ ಜಿಲ್ಲಾಡಳಿತದಿಂದ ಸನ್ಮಾನ
ಹೆಬ್ರಿ : ಕ್ರೀಡಾ ತಾರೆಯಾಗಿರುವ ಹೆಬ್ರಿ ಗ್ರಾಮ ಆಡಳಿತಾಧಿಕಾರಿ ನವೀನ್ ಕುಮಾರ್ ಅವರನ್ನು ಉಡುಪಿ ಜಿಲ್ಲಾಡಳಿತದ ವತಿಯಿಂದ ಕಂದಾಯ ದಿನಾಚರಣೆಯಲ್ಲಿ ಸನ್ಮಾನಿಸಲಾಯಿತು.
ಉಡುಪಿಯಲ್ಲಿ ನಡೆದ 2023-24ನೇ ಸಾಲಿನ ಜಿಲ್ಲಾ ಮಟ್ಟದ 2೦೦ ಮೀಟರ್ ಹರ್ಡಲ್ಸ್ನಲ್ಲಿ ಪ್ರಥಮ, 100 ಮೀಟರ್ ಹರ್ಡಲ್ಸ್ ಪ್ರಥಮ, ಹೈಜಂಪ್ನಲ್ಲಿ ದ್ವೀತಿಯ ಪ್ರಶಸ್ತಿ, ತುಮಕೂರಿನಲ್ಲಿ ನಡೆದ ರಾಜ್ಯ ಮಟ್ಟದ 11೦ ಮೀಟರ್ ಹರ್ಡಲ್ಸ್ನಲ್ಲಿ ಪ್ರಥಮ ಪ್ರಶಸ್ತಿ ಪಡೆದ ಚಂಡೀಗಢದಲ್ಲಿ ನಡೆದ ರಾಷ್ಟ್ರಮಟ್ಟದ 1೦೦ ಮೀಟರ್ ಹರ್ಡಲ್ಸ್ನಲ್ಲಿ 5 ಸ್ಥಾನ ಪಡೆದಿದ್ದಾರೆ.
ಗ್ರಾಮೀಣ ಪ್ರತಿಭೆಯಾಗಿರುವ ನವೀನ್ ಕುಮಾರ್ ಸೇವೆಯಲ್ಲಿ ಜನಮೆಚ್ಚುಗೆ ಪಡೆದು ನಿಷ್ಠಾವಂತ ಅಧಿಕಾರಿಯಾಗಿದ್ದಾರೆ. ಕಂದಾಯ ಇಲಾಖೆಯ ಜೊತೆಗೆ ನಾಡಿಗೆ ಕೀರ್ತಿ ತಂದಿದ್ದಾರೆ. ರಾಷ್ಟ್ರ ಮಟ್ಟದ ಸಿವಿಲ್ ಸರ್ವಿಸ್ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ನಲ್ಲಿ ವೈಯಕ್ತಿಕ ಸಾಧನೆ ಮಾಡಿದ್ದಾರೆ. ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಸತತ 4 ವರ್ಷಗಳಿಂದ ವೈಯಕ್ತಿಕ ಚಾಂಪಿಯನ್ ಶಿಪ್ ಸಾಧನೆ ಮಾಡುತ್ತಿದ್ದಾರೆ.
ಉಡುಪಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾ ಕುಮಾರಿ ಸನ್ಮಾನಿಸಿದರು. ಹೆಚ್ಚುವರಿ ಜಿಲ್ಲಾಧಿಕಾರಿ ಮಮತಾದೇವಿ ಜಿಎಸ್, ಕುಂದಾಪುರ ಸಹಾಯಕ ಕಮೀಷನರ್ ರಶ್ಮಿ, ಹೆಬ್ರಿ ತಹಶೀಲ್ಧಾರ್ ಪ್ರಸಾದ್ ಎಸ್ಎ ಸಹಿತ ಅಧಿಕಾರಿಗಳು ಉಪಸ್ಥಿತರಿದ್ದರು.
ಅತ್ತೂರು ಚರ್ಚಿನ ಅಕ್ರಮ ಸ್ವಾಗತ ಗೋಪುರ ತೆರವಿಗೆ ಆಗ್ರಹ; ಸೂಕ್ತ ಕ್ರಮಕೈಗೊಳ್ಳದಿದ್ದಲ್ಲಿ ಉಗ್ರ ಹೋರಾಟ : ಹಿಂದೂ ಹಿತರಕ್ಷಣಾ ವೇದಿಕೆ ಎಚ್ಚರಿಕೆ
ಕಾರ್ಕಳ : ಕಾರ್ಕಳ ತಾಲೂಕಿನ ಅತ್ತೂರು ಗ್ರಾಮದಲ್ಲಿರುವ ರಾಜ್ಯ ಹೆದ್ದಾರಿಗೆ ಅಡ್ಡಲಾಗಿ ಲೋಕೋಪಯೋಗಿ ಇಲಾಖೆಗೆ ಸೇರಿದ ಜಾಗದಲ್ಲಿ ಅತ್ತೂರು ಸಂತ ಲಾರೆನ್ಸರ ಚರ್ಚ್ ಮಂಡಳಿಯವರು ಅಕ್ರಮವಾಗಿ ಭಾರಿ ಗಾತ್ರದ ಸ್ವಾಗತ ಗೋಪುರವನ್ನು ಕಟ್ಟಿದ್ದು, ಇದು ಸರ್ವೋಚ್ಚ ನ್ಯಾಯಾಲಯದ ಆದೇಶದ ಸ್ಪಷ್ಟ ಉಲ್ಲಂಘನೆಯಾಗಿದ್ದು ಇದರಲ್ಲಿ ಸರಕಾರಿ ಇಂಜಿನಿಯರ್ಗಳು ಕೂಡ ಶಾಮೀಲಾಗಿದ್ದಾರೆ ಎಂದು ಹಿಂದೂ ಹಿತರಕ್ಷಣಾ ಸಮಿತಿ ಆರೋಪಿಸಿದೆ.
ಈ ಅಕ್ರಮ ದ್ವಾರವನ್ನು ತೆರವುಗೊಳಿಸಲು ಸಮಿತಿಯು ಜಿಲ್ಲಾಡಳಿತಕ್ಕೆ ಹತ್ತು ದಿನಗಳ ಗಡುವನ್ನು ನೀಡುತ್ತಿದೆ. ತಪ್ಪಿದ್ದಲ್ಲಿ ಜಿಲ್ಲೆಯಾದ್ಯಂತ ಹಿಂದೂ ಸಮಾಜವನ್ನು ಸಂಘಟಿಸಿ ಇದರ ವಿರುದ್ಧ ಹೋರಾಟ ಕೈಗೊತ್ತಿಕೊಳ್ಳಲಾಗುವುದು ಎಂದು ಕಾರ್ಕಳ ಹಿಂದೂ ಹಿತರಕ್ಷಣಾ ವೇದಿಕೆ ಎಚ್ಚರಿಸಿದೆ.
ಕಳೆದ ಒಂದು ವಾರದ ಹಿಂದೆ ರಾತ್ರೋರಾತ್ರಿ ಚರ್ಚ್ ಮಂಡಳಿ ಈ ಕಬ್ಬಿಣದ ದ್ವಾರವನ್ನು ರಸ್ತೆಗೆ ಅಡ್ಡಲಾಗಿ ಕಟ್ಟಿದ್ದು ಇದು ವಾಹನ ಸವಾರರ ಸುರಕ್ಷತೆಗೆ ಮುಂದೊoದು ದಿನ ಸವಾಲಾಗುವ ಸಾಧ್ಯತೆಯಿದೆ. ಸಾರ್ವಜನಿಕರಿಂದ ಎರಡು ಆಕ್ಷೇಪಣಾ ಅರ್ಜಿಗಳು ಸಲ್ಲಿಕೆಯಾದ ಬಳಿಕವೂ ಲೋಕೋಪಯೋಗಿ ಅಧಿಕಾರಿಗಳು ಈ ಅಕ್ರಮ ದ್ವಾರ ನಿರ್ಮಾಣಕ್ಕೆ ಗುಪ್ತ ಸಹಕಾರ ನೀಡಿರುವುದನ್ನು ಗಮನಿಸಿದಾಗ ಇದರಲ್ಲಿ ಭ್ರಷ್ಟಾಚಾರ ನಡೆದಿರುವ ಸಾಧ್ಯತೆ ಕಂಡು ಬರುತ್ತಿದೆ. ಸಾರ್ವಜನಿಕ ಸ್ಥಳಗಳಲ್ಲಿ ಇರುವ ಎಲ್ಲಾ ಧಾರ್ಮಿಕ ನಿರ್ಮಾಣಗಳನ್ನು ತೆರವುಗೊಳಿಸಬೇಕು ಎಂದು ಮಾನ್ಯ ಸರ್ವೋಚ್ಚ ನ್ಯಾಯಾಲಯದ ಆದೇಶ ಇದ್ದು, ಈ ಆದೇಶಕ್ಕೆ ಗೌರವ ನೀಡಿ ರಾಜ್ಯಾದ್ಯಂತ ಇರುವ ಹಿಂದೂ ಧಾರ್ಮಿಕ ಕೇಂದ್ರಗಳು ತಮ್ಮ ತಮ್ಮ ಸ್ವಾಗತ ಗೋಪುರ ದೈವದ ಗುಡಿ, ನಾಗನಕಟ್ಟೆಗಳನ್ನು ತೆರವು ಮಾಡಿವೆ.
2009ರಲ್ಲಿ ಜಿಲ್ಲಾಧಿಕಾರಿಯವರ ನಿರ್ದೇಶನದ ಮೇರೆಗೆ ಕಾರ್ಕಳದಲ್ಲಿ ಸುಮಾರು 13 ಹಿಂದೂ ಧಾರ್ಮಿಕ ನಿರ್ಮಾಣಗಳನ್ನು ತೆರವುಗೊಳಿಸಲಾಗಿತ್ತು. ಬೈಲೂರು ಸಮೀಪ ಇದ್ದ ಒಂದು ದರ್ಗಾವನ್ನು ಕೂಡ ತೆರವು ಮಾಡಲಾಗಿತ್ತು. ಆ ಬಳಿಕ ಸರಕಾರಿ ಜಾಗದಲ್ಲಿ ದ್ವಾರ, ಸ್ವಾಗತ ಗೋಪುರ ಇನ್ನಿತರ ಧಾರ್ಮಿಕ ಕಟ್ಟೆಗಳನ್ನು ಕಟ್ಟಿಕೊಳ್ಳಲು ಅವಕಾಶ ನೀಡಲಾಗುತ್ತಿಲ್ಲ. ಆದರೆ ಈ ಚರ್ಚ್ ಆಡಳಿತ ಮಂಡಳಿಗೆ ಮಾತ್ರ ವಿಶೇಷವಾಗಿ ಅನುಮತಿ ದೊರೆತಿದೆ. ಇದರ ಹಿಂದೆ ಅಧಿಕಾರಿಗಳು ಭ್ರಷ್ಟಾಚಾರ ನಡೆಸಿರುವ ಬಗ್ಗೆ ಶಂಕೆ ಇದ್ದು ಈ ಬಗ್ಗೆ ಲೋಕಾಯುಕ್ತ ಇಲಾಖೆಗೆ ನಾವು ದೂರು ಸಲ್ಲಿಸಲಿದ್ದೇವೆ. ಲೋಕೋಪಯೋಗಿ ಇಲಾಖೆಗೆ ಸೇರಿದ ಸ್ಥಳದಲ್ಲಿ ಕಟ್ಟಲಾಗಿರುವ ಈ ದ್ವಾರವನ್ನು ತೆರವುಗೊಳಿಸುವ ಹೊಣೆಗಾರಿಕೆ ಜಿಲ್ಲಾಧಿಕಾರಿ ಅವರದ್ದಾಗಿದ್ದು ಅವರು ಕೂಡಲೇ ಕಾನೂನು ಕ್ರಮ ಕೈಗೊಳ್ಳಬೇಕು. ಮತ್ತು ಚರ್ಚ್ ಜೊತೆ ಈ ಅಕ್ರಮದಲ್ಲಿ ಭಾಗಿಯಾಗಿರುವ ಲೋಕೋಪಯೋಗಿ ಅಧಿಕಾರಿಗಳ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ. ತಪ್ಪಿದ್ದಲ್ಲಿ ಜಿಲ್ಲಾಧಿಕಾರಿ ಅವರ ವಿರುದ್ಧ ಬೃಹತ್ ಜನಾಂದೋಲನ ಮತ್ತು ಪ್ರತಿಭಟನಾ ಸಭೆಯನ್ನು ನಡೆಸಲಾಗುವುದು ಮತ್ತು ಸರ್ವೋಚ್ಚ ನ್ಯಾಯಾಲಯದ ಆದೇಶ ಉಲ್ಲಂಘನೆಯಾಗಿರುವ ಹಿನ್ನೆಲೆಯಲ್ಲಿ ನ್ಯಾಯಾಲಯದಲ್ಲಿಯೂ ಈ ಬಗ್ಗೆ ನಾವು ದಾವೆ ಹೂಡಲಿದ್ದೇವೆ ಎಂದು ಹೇಳಿದ್ದಾರೆ.
ಹಿಂದೂ ಹಿತರಕ್ಷಣಾ ವೇದಿಕೆಯು ಕಳೆದ ಹಲವು ವರ್ಷಗಳಿಂದ ಅತ್ತೂರು ಸಂತಲಾರೆನ್ಸ್ ಚರ್ಚ್ ನಡೆಸಿರುವ ಭೂ ಅತಿಕ್ರಮಣದ ಬಗ್ಗೆ ಹೋರಾಟ ನಡೆಸುತ್ತಿದೆ. ಚರ್ಚ್ ಸುಮಾರು 22 ಎಕರೆ ಸರಕಾರಿ ಕಂದಾಯ ಮತ್ತು ಅರಣ್ಯ ಜಮೀನನ್ನು ಒತ್ತುವರಿ ಮಾಡಿಕೊಂಡಿದ್ದು,ಇದರ ವಿರುದ್ಧ ಹೈಕೋರ್ಟ್ನಲ್ಲಿ ನಮ್ಮ ಕಾನೂನು ಹೋರಾಟ ನಡೆಯುತ್ತಿದೆ. ಕಾನೂನು ಉಲ್ಲಂಘಿಸಿ ಕಟ್ಟಡ ನಿರ್ಮಾಣ, ಸರಕಾರಿ ಭೂಮಿಯ ದುರುಪಯೋಗ, ಅರಣ್ಯ ನಾಶ, ಬೋಗಸ್ ದಾಖಲೆ ಸೃಷ್ಟಿಸಿ ಭೂಕಬಳಿಕೆ ಸೇರಿದಂತೆ ಹಲವಾರು ಕಾನೂನು ಬಾಹಿರ ಕೃತ್ಯಗಳನ್ನು ಈ ಚರ್ಚ್ ಆಡಳಿತ ಮಂಡಳಿ ಈಗಾಗಲೇ ನಡೆಸಿದೆ. ಹಿಂದೂ ಹಿತರಕ್ಷಣಾ ವೇದಿಕೆಯು ಈ ಅಕ್ರಮ ದ್ವಾರವನ್ನು ತೆರವುಗೊಳಿಸಲು ಜಿಲ್ಲಾಡಳಿತಕ್ಕೆ ಹತ್ತು ದಿನಗಳ ಗಡುವನ್ನು ನೀಡುತ್ತಿದೆ. ತಪ್ಪಿದ್ದಲ್ಲಿ ಜಿಲ್ಲೆಯಾದ್ಯಂತ ಹಿಂದೂ ಸಮಾಜವನ್ನು ಸಂಘಟಿಸಿ ಇದರ ವಿರುದ್ಧ ಹೋರಾಟ ಕೈಗೊತ್ತಿಕೊಳ್ಳಲಾಗುವುದು ಎಂದು ಕಾರ್ಕಳ ಹಿಂದೂ ಹಿತರಕ್ಷಣಾ ವೇದಿಕೆಯ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಎಚ್ಚರಿಸಿದ್ದಾರೆ.
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು, (12ನೇ ತರಗತಿವರೆಗೆ) ಜುಲೈ 9 ರಂದು ರಜೆಯನ್ನು ಘೋಷಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶಿಸಿದ್ದಾರೆ.

ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿದ್ದು, ಜು 9ರಂದು ರೆಡ್ ಅಲರ್ಟ್ ಘೋಷಣೆಯಾಗಿರುವ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಈ ತುರ್ತು ಕ್ರಮಗಳನ್ನು ಕೈಗೊಂಡಿರುತ್ತದೆ.
ವಿದ್ಯಾರ್ಥಿಗಳ ಹಾಜರಾತಿಯನ್ನು ಕಡ್ಡಾಯ ಮಾಡುವಂತಿಲ್ಲ, ದುರ್ಬಲ / ಶಿಥಿಲ ಕಟ್ಟಡಗಳು ಇದ್ದಲ್ಲಿ ಅಂತಹ ಕಟ್ಟಡಗಳನ್ನು ಪಾಠ ಪ್ರವಚನಗಳಿಗೆ ಬಳಸುವಂತಿಲ್ಲ. ಈ ನಿಟ್ಟಿನಲ್ಲಿ ಶಾಲಾ ಕಾಲೇಜುಗಳ ಮುಖ್ಯಸ್ಥರು ಕಟ್ಟಡಗಳ ಸುಸ್ಥಿತಿಯ ಬಗ್ಗೆ ಗಮನಹರಿಸುವುದು. ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿ ತೀರ ಸಮುದ್ರ ತೀರಕ್ಕೆ ಸಾರ್ವಜನಿಕರು/ಪ್ರವಾಸಿಗರು ತೆರಳದಂತೆ ಜಾಗ್ರತೆ ವಹಿಸುವುದು. ಮೀನುಗಾರರು ಸಮುದ್ರಕ್ಕೆ ಮೀನುಗಾರಿಕೆಗೆ ತೆರಳದಂತೆ ಸೂಚನೆ ನೀಡಲಾಗಿದೆ.
ಜಿಲ್ಲೆಯಲ್ಲಿ ವಿಪರೀತ ಮಳೆ ಸುರಿಯುತ್ತಿರುವುದರಿಂದ ಸಾರ್ವಜನಿಕರು ನದಿಗಳ/ತೋಡುಗಳ ಮತ್ತು ವಿದ್ಯುತ್ ಕಂಬ/ತಂತಿ ಸಮೀಪ ಹೋಗದಂತೆ ಎಚ್ಚರಿಕೆ ವಹಿಸುವುದು. ಸಂಭಾವ್ಯ ಹಾನಿಯನ್ನು ತಡೆಗಟ್ಟುವ ಹಿನ್ನಲೆಯಲ್ಲಿ ಸಾರ್ವಜನಿಕರು ಅಪಾಯಕಾರಿ ಸನ್ನಿವೇಶಗಳಿಂದ ದೂರವಿದ್ದು, ಜಿಲ್ಲಾಡಳಿತದ ಸಲಹೆ/ಸೂಚನೆಗಳನ್ನು ಪಾಲಿಸುವುದು. ಪ್ರಾಕೃತಿಕ ವಿಕೋಪದಿಂದ ಯಾವುದೇ ರೀತಿಯ ಘಟನೆಗಳು ಸಂಭವಿಸಿದಲ್ಲಿ ಅಥವಾ ಸಂಭವಿಸಬಹುದಾದ ಸೂಚನೆ ಇದ್ದಲ್ಲಿ ಸಾರ್ವಜನಿಕರು ಕೂಡಲೇ ಸಂಬಂಧಪಟ್ಟ ಪಂಚಾಯತ್/ನಗರ ಸ್ಥಳೀಯ ಸಂಸ್ಥೆಗಳಿಗೆ ಮಾಹಿತಿಯನ್ನು ನೀಡುವಂತೆ ಸೂಚಿಸಲಾಗಿದೆ.
ಉಡುಪಿ : ಉಡುಪಿ ಜಿಲ್ಲೆಯಲ್ಲಿ ವ್ಯಾಪಕ ಮಳೆ ಮುಂದುವರಿದಿದ್ದು ರೆಡ್ ಅಲರ್ಟ್ ಘೋಷಿಸಲಾಗಿದೆ. ಅದರಂತೆ ಉಡುಪಿ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ಮಂಗಳವಾರ(ಜು.09) ಜಿಲ್ಲಾಡಳಿತ ರಜೆ ಘೋಷಿಸಿ ಆದೇಶ ಹೊರಡಿಸಿದೆ.
ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಮಳೆಯ ತೀವ್ರತೆ ಹೆಚ್ಚಾಗುವುದರಿಂದ ಮುಂಜಾಗೃತ ಕ್ರಮವಾಗಿ ಜುಲೈ 9ರಂದು ಉಡುಪಿ ಜಿಲ್ಲೆಯ ಎಲ್ಲ ಅಂಗನವಾಡಿ, ಪ್ರಾಥಮಿಕ ಶಾಲೆ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಜಿಲ್ಲಾಧಿಕಾರಿ ಕೆ.ವಿದ್ಯಾ ಕುಮಾರಿ ಅವರು ರಜೆ ಘೋಷಿಸಿ ಆದೇಶಿಸಿದ್ದಾರೆ. ಉಳಿದಂತೆ ಎಲ್ಲಾ ಪದವಿ, ಸ್ನಾತಕೊತ್ತರ ಪದವಿ. ಡಿಪ್ಲೋಮ, ಇಂಜಿನಿಯರಿಂಗ್, ಐ.ಟಿ.ಐ ಗಳಿಗೆ ರಜೆ ಘೋಷಿಸಿರುವುದಿಲ್ಲ.
ರೆಡ್ ಅಲರ್ಟ್ ಹಿನ್ನೆಲೆ : ದ.ಕ.ಜಿಲ್ಲೆಯ ಶಾಲೆ – ಪಿಯು ಕಾಲೇಜುಗಳಿಗೆ ಇಂದು (ಜು.6) ರಜೆ
ಮಂಗಳೂರು : ಭಾರೀ ಮಳೆಯಾಗುವ ಸಾಧ್ಯತೆಯಿರುವ ಹಿನ್ನೆಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಈ ಕಾರಣದಿಂದ ದ.ಕ.ಜಿಲ್ಲೆಯ ಶಾಲಾ – ಕಾಲೇಜುಗಳಿಗೆ ದ.ಕ.ಜಿಲ್ಲಾಧಿಕಾರಿ ಶನಿವಾರ ರಜೆ ಘೋಷಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಫ್ರೌಢಶಾಲೆ, ಪದವಿ ಪೂರ್ವ ಕಾಲೇಜು, (12ನೇ ತರಗತಿವರೆಗೆ) ಇಂದು (ಜು.6ರಂದು) ರಜೆಯನ್ನು ಘೋಷಿಸಲಾಗಿದೆ.
ಹವಾಮಾನ ಇಲಾಖೆ ಜೂ.6ರಂದು ರೆಡ್ ಅಲರ್ಟ್ ಘೋಷಣೆ ಮಾಡಿದೆ. ಈ ಹಿನ್ನೆಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ. ಈಗಾಗಲೇ ಪಶ್ಚಿಮ ಘಟ್ಟಗಳ ವ್ಯಾಪ್ತಿಯಲ್ಲಿ ಭಾರೀ ಮಳೆ ಆಗುತ್ತಿರುವ ಕಾರಣ ನದಿಗಳಲ್ಲಿ ನೀರಿನ ಮಟ್ಟ ಏರಿಕೆಯಾಗಿದೆ.
ಉಡುಪಿ : ಉಡುಪಿ ಜಿಲ್ಲೆಯಾದ್ಯಂತ ಧಾರಾಕಾರ ಮಳೆ ಸುರಿಯುತ್ತಿದ್ದು, ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ.
ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಮಳೆಯ ತೀವ್ರತೆ ಹೆಚ್ಚಾಗುವುದರಿಂದ ಮುಂಜಾಗೃತಾ ಕ್ರಮವಾಗಿ ಇಂದು (ಜುಲೈ 6ರಂದು) ಉಡುಪಿ ಜಿಲ್ಲೆಯಾದ್ಯಂತ ಅಂಗನವಾಡಿ, ಪ್ರಾಥಮಿಕ ಶಾಲೆ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಜಿಲ್ಲಾಧಿಕಾರಿ ಕೆ. ವಿದ್ಯಾ ಕುಮಾರಿಯವರು ರಜೆ ಘೋಷಿಸಿ ಆದೇಶಿಸಿದ್ದಾರೆ.
ಉಳಿದಂತೆ ಎಲ್ಲಾ ಪದವಿ, ಸ್ನಾತಕೊತ್ತರ ಪದವಿ, ಡಿಪ್ಲೋಮ, ಇಂಜಿನಿಯರಿಂಗ್, ಐ.ಟಿ.ಐ ಗಳಿಗೆ ರಜೆ ಘೋಷಿಸಿರುವುದಿಲ್ಲ.
ಸಾರ್ವಜನಿಕ ದೂರಿಗೆ ಸ್ಪಂದಿಸದ ಪೆರ್ಡೂರು ಗ್ರಾಪಂ ಪಿಡಿಓ : ತೀವ್ರ ತರಾಟೆಗೆ ತೆಗೆದುಕೊಂಡ ಶಾಸಕ ಗುರ್ಮೆ ಸುರೇಶ್ ಶೆಟ್ಟಿ
ಉಡುಪಿ : ಉಡುಪಿ ಜನಸ್ಪಂದನಾ ಸಭೆಯು ಉಡುಪಿ ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ಅವರ ಅಧ್ಯಕ್ಷತೆಯಲ್ಲಿ ಬನ್ನಂಜೆಯಲ್ಲಿ ನಡೆಯಿತು. ಈ ಸಭೆಯಲ್ಲಿ ಪೆರ್ಡೂರು ಗ್ರಾಪಂ ಪಿಡಿಓ ಸುಮನ ಅವರನ್ನು ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು ತರಾಟೆಗೆ ತೆಗೆದುಕೊಂಡಿದ್ದಾರೆ.
ಪೆರ್ಡೂರಿನಲ್ಲಿ ಸಾರ್ವಜನಿಕ ರಸ್ತೆಗೆ ಖಾಸಗಿ ವ್ಯಕ್ತಿ ಬೇಲಿ ಹಾಕಿರುವ ವಿಚಾರಕ್ಕೆ ಸಂಬಂಧಿಸಿ ಸ್ಥಳೀಯ ವ್ಯಕ್ತಿ ನೀಡಿದ ದೂರಿಗೆ ಪಿಡಿಓ ಸುಮನ ಅವರು ಸರಿಯಾಗಿ ಸ್ಪಂದಿಸಿರಲಿಲ್ಲ. ಈ ಕಾರಣಕ್ಕಾಗಿ ಪಿಡಿಓ ಅವರನ್ನು ಶಾಸಕರು ತರಾಟೆಗೆ ತೆಗೆದುಕೊಂಡಿದ್ದಾರೆ.
ಸಾರ್ವಜನಿಕರ ದೂರಿಗೆ ಸರಿಯಾಗಿ ಸ್ಪಂದಿಸದಿರುವುದಕ್ಕೆ ಹಾಗೂ ಹಲವು ಬಾರಿ ಈ ರೀತಿ ನಿರ್ಲಕ್ಷ್ಯ ವಹಿಸಿರುವುದಕ್ಕಾಗಿ ಜಿಲ್ಲಾಧಿಕಾರಿಗಳ ಎದುರಲ್ಲೇ ಪಿಡಿಓ ಅವರನ್ನು ತೀವ್ರ ತರಾಟೆಗೆ ತೆಗೆದುಕೊಂಡರು.
ಜಿಲ್ಲೆಯಲ್ಲಿ ಮೂರು ಹೊಸ ಕೈಗಾರಿಕಾ ಪ್ರದೇಶಗಳ ನಿರ್ಮಾಣ : ಜಿಲ್ಲಾಧಿಕಾರಿ ವಿದ್ಯಾಕುಮಾರಿ
ಉಡುಪಿ : ಜಿಲ್ಲೆಯಲ್ಲಿ ಹೊಸ ಕೈಗಾರಿಕಾ ಪ್ರದೇಶಗಳ ನಿರ್ಮಾಣಕ್ಕೆ ಗುರುತಿಸಿರುವ ಶಿವಪುರದ ಕೆರೆಬೆಟ್ಟು, ಕಾರ್ಕಳದ ನಿಟ್ಟೆ ಹಾಗೂ ಬ್ರಹ್ಮಾವರದ ಉಳ್ಳೂರು ಪ್ರದೇಶ ವ್ಯಾಪ್ತಿಯಲ್ಲಿ ಭೂಸ್ವಾಧೀನ ಪ್ರಕ್ರಿಯೆಯನ್ನು ತ್ವರಿತವಾಗಿ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಅವರು ಭೂಸ್ವಾಧೀನ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಕೈಗಾರಿಕಾ ಸ್ಪಂದನ ಸಮಿತಿ ಸಭೆ, ಕ್ಲಸ್ಟರ್ ಸಮಿತಿ ಸಭೆ, ಜಿಲ್ಲಾ ಮಟ್ಟದ ಏಕಗವಾಕ್ಷಿ ಸಮಿತಿ ಸಭೆ, ಜಿಲ್ಲಾ ಮಟ್ಟದ ರಫ್ತು ಉತ್ತೇಜನಾ ಸಮಿತಿ ಸಭೆ ಹಾಗೂ ಪ್ರಧಾನಮಂತ್ರಿಗಳ ಉದ್ಯೋಗ ಸೃಜನಾ ಯೋಜನೆಯ ಜಿಲ್ಲಾ ಮಟ್ಟದ ಅನುಷ್ಠಾನ ಸಮಿತಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.
ಜಿಲ್ಲೆಯಲ್ಲಿ ಹೊಸ ಕೈಗಾರಿಕಾ ಪ್ರದೇಶಗಳನ್ನು ನಿರ್ಮಿಸಿ, ಉದ್ಯೋಗಗಳನ್ನು ಸೃಷ್ಟಿಸುವ ಮೂಲಕ ಸ್ಥಳೀಯ ಜನರಿಗೆ ಉದ್ಯೋಗ ಲಭಿಸಬೇಕೆಂಬ ಆಶಯದೊಂದಿಗೆ ಹೆಬ್ರಿ ತಾಲೂಕಿನ ಶಿವಪುರ ಹಾಗೂ ಕೆರೆಬೆಟ್ಟು ಗ್ರಾಮಗಳಲ್ಲಿ 113.59 ಎಕ್ರೆ, ಕಾರ್ಕಳ ತಾಲೂಕಿನ ನಿಟ್ಟೆಯಲ್ಲಿ 50.42 ಎಕ್ರೆ ಹಾಗೂ ಬ್ರಹ್ಮಾವರ ತಾಲೂಕಿನ ಉಳ್ಳೂರಿನಲ್ಲಿ 101.19 ಎಕರೆ ಜಮೀನಿನ ಭೂ ಸ್ವಾಧೀನ ಪ್ರಕ್ರಿಯೆಯನ್ನು ಶೀಘ್ರದಲ್ಲಿಯೇ ಪೂರ್ಣಗೊಳಿಸಿ ಕೆಐಎಡಿಬಿಗೆ ಹಸ್ತಾಂತರಿಸಬೇಕು ಎಂದು ಅವರು ನಿರ್ದೇಶನ ನೀಡಿದರು.
ಜಿಲ್ಲೆಯಲ್ಲಿ ಸಣ್ಣ ಕೈಗಾರಿಕೆ ಹಾಗೂ ಮದ್ಯಮ ಕೈಗಾರಿಕೆಗಳಲ್ಲಿ ಡಾ. ಸರೋಜಿನಿ ಮಹಿಷಿ ವರದಿಯಂತೆ ಸ್ಥಳೀಯರಿಗೆ ಉದ್ಯೋಗಾವಕಾಶ ಕಲ್ಪಿಸಬೇಕು. ಕಳೆದ ಮಾರ್ಚ್ ವೇಳೆಗೆ ಜಿಲ್ಲೆಯ 21ಕ್ಕೂ ಹೆಚ್ಚು ಕೈಗಾರಿಕೆಗಳಲ್ಲಿ ಪ್ರಗತಿ ಕಂಡು ಬಂದಿಲ್ಲ. ಕೇವಲ ಡಿ ಗ್ರೂಪ್ ಹುದ್ದೆಗೆ ಮಾತ್ರ ಅವಕಾಶ ಕಲ್ಪಿಸಲಾಗುತ್ತಿದೆ. ಎಲ್ಲಾ ಹುದ್ದೆಗಳಲ್ಲಿಯೂ ಸ್ಥಳೀಯರ ನೇಮಕಾತಿಗೆ ಅವಕಾಶ ಮಾಡಿಕೊಡಬೇಕು. ನೇಮಕಾತಿಗೆ ಸಂಬಂಧಪಟ್ಟ ಸೂಕ್ತ ದಾಖಲೆಗಳನ್ನು ನಿರ್ವಹಣೆ ಮಾಡಬೇಕು ಎಂದವರು ಸೂಚನೆ ನೀಡಿದರು.