ಮಣಿಪಾಲ : ಕುಂದಾಪುರ ತಾಲೂಕಿನ ಪ್ರವಾಸಿ ತಾಣಗಳಲ್ಲಿ ಒಂದಾದ ಕೋಡಿ ಕಡಲ ತೀರದ ಸರ್ವೇ ನಂಬರ್ 310ರಲ್ಲಿ 26.50 ಎಕರೆ ಜಾಗವನ್ನು ಪ್ರವಾಸೋದ್ಯಮ ಇಲಾಖೆಗೆ ಹಸ್ತಾಂತರಿಸುವಂತೆ ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಲೋಕಸಭಾ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.
ಕೋಡಿ ಕಡಲ ಕಿನಾರೆ ಪ್ರದೇಶವು ಪ್ರವಾಸೋದ್ಯಮಕ್ಕೆ ಪೂರಕವಾಗಿದ್ದು, ಡಾಲ್ಪಿನ್ಗಳು ಕಂಡುಬರುವ ಉಡುಪಿ ಜಿಲ್ಲೆಯ ಏಕೈಕ ಪ್ರವಾಸಿ ತಾಣವಾಗಿದೆ. ಇಲ್ಲಿ ಪ್ರವಾಸಿ ಚಟುವಟಿಕೆಗಳನ್ನು ಆಧುನಿಕ ಶೈಲಿಯಲ್ಲಿ ಅಭಿವೃದ್ಧಿ ಪಡಿಸಬೇಕು ಎಂದವರು ತಿಳಿಸಿದರು.
ಜಿಲ್ಲೆಗೆ ಆಗಮಿಸುವ ಪ್ರವಾಸಿಗರ ಸುರಕ್ಷತೆ ಹಾಗೂ ಅನುಕೂಲತೆಗಳನ್ನು ಹೆಚ್ಚಿಸುವ ಮೂಲಕ ಸ್ವಾಗತಾರ್ಹ ವಾತಾವರಣ ವನ್ನು ಕಲ್ಪಿಸಬೇಕು. ಈ ಮೂಲಕ ಪ್ರವಾಸೋದ್ಯಮ ಚಟುವಟಿಕೆಗಳನ್ನು ಜಿಲ್ಲೆಯಲ್ಲಿ ಮತ್ತಷ್ಟು ಹೆಚ್ಚಿಸಬೇಕು ಎಂದವರು ಸಲಹೆ ನೀಡಿದರು.
ಜಿಲ್ಲೆಗೆ ಕಳೆದ ಸಾಲಿನಲ್ಲಿ 4 ಕೋಟಿಗೂ ಹೆಚ್ಚು ಪ್ರವಾಸಿಗರು ಬಂದು ಹೋಗಿದ್ದಾರೆ. ಈ ಸಂಖ್ಯೆ ದಿನೇದಿನೇ ಹೆಚ್ಚುತ್ತಿದೆ. ಹೊರಗಿನಿಂದ ಬರುವ ಪ್ರವಾಸಿಗರಿಗೆ ಅನುಕೂಲವಾಗುವ ಎಲ್ಲಾ ರೀತಿಯ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವುದರ ಜೊತೆಗೆ ಪ್ರವಾಸಿ ತಾಣಗಳ ಸ್ವಚ್ಛತೆಗೆ ಆದ್ಯತೆ ನೀಡಬೇಕು ಎಂದು ಅವರು ಸೂಚಿಸಿದರು.