ಉಡುಪಿ : ಉಚ್ಚಾಟನೆಗೊಂಡರೂ ಮಾಜಿ ಶಾಸಕ ರಘುಪತಿ ಭಟ್ಗೆ ಬಿಜೆಪಿ ಪಕ್ಷದ ಮೇಲಿನ ಪ್ರೀತಿ ಕಡಿಮೆಯಾಗಿಲ್ಲ. ವಿಧಾನ ಪರಿಷತ್ ಚುನಾವಣೆಯಲ್ಲಿ ಬಂಡಾಯ ಎದ್ದಿರುವ ಭಟ್ ಅವರನ್ನು ಇತ್ತೀಚೆಗಷ್ಟೆ ಬಿಜೆಪಿಯಿಂದ ಉಚ್ಚಾಟನೆ ಮಾಡಲಾಗಿತ್ತು. ಇದೀಗ ಕರಾವಳಿಯಲ್ಲಿ ಮತ್ತೊಮ್ಮೆ ಬಿಜೆಪಿ ಜಯಭೇರಿ ಬಾರಿಸುತ್ತಿದ್ದಂತೆ ಮಾಜಿ ಶಾಸಕ ಕೆ. ರಘುಪತಿ ಭಟ್ ಅವರು ಸಾಮಾಜಿಕ ಜಾಲತಾಣದ ಮೂಲಕ ಬಿಜೆಪಿ ವಿಜಯೀ ಅಭ್ಯರ್ಥಿಗಳಿಗೆ ಅಭಿನಂದನೆ ಸಲ್ಲಿಸುವ ಮೂಲಕ ಗಮನ ಸೆಳೆದಿದ್ದಾರೆ. ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಕೋಟ ಶ್ರೀನಿವಾಸ ಪೂಜಾರಿ, ದ.ಕ. ಕ್ಷೇತ್ರದ ಕ್ಯಾ. ಬ್ರಜೇಶ್ ಚೌಟ, ಶಿವಮೊಗ್ಗ ಕ್ಷೇತ್ರದ ಬಿ.ವೈ. ರಾಘವೇಂದ್ರ ಹಾಗೂ ಉತ್ತರ ಕನ್ನಡ ಕ್ಷೇತ್ರದ ವಿಶ್ವೇಶ್ವರ ಹೆಗಡೆ ಕಾಗೇರಿ, ಹಾವೇರಿ ಕ್ಷೇತ್ರದ ಬೊಮ್ಮಾಯಿ, ಬೆಳಗಾವಿ ಕ್ಷೇತ್ರದ ಜಗದೀಶ್ ಶೆಟ್ಟರ್ ಅವರಿಗೆ ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿರುವುದಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ. ಇದೇ ವೇಳೆ ರಘುಪತಿ ಭಟ್ ಅವರ ಪತ್ನಿ ಕೋಟ ಶ್ರೀನಿವಾಸ ಪೂಜಾರಿ ಅವರ ವಿಜಯದ ಬಳಿಕ ನಡೆದ ಸಂಭ್ರಮಾಚರಣೆಯಲ್ಲಿ ಮಹಿಳಾ ಕಾರ್ಯಕರ್ತೆಯರ ಜೊತೆ ಕಾಣಿಸಿಕೊಂಡು ಗಮನ ಸೆಳೆದಿದ್ದಾರೆ.
Election Victory
ಉಡುಪಿ : ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣಾ ಅಧಿಕಾರಿ ಹಾಗೂ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಕೆ ಅವರು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ ಚುನಾವಣೆಯಲ್ಲಿ ವಿಜೇತರಾದ ಬಿಜೆಪಿ ಪಕ್ಷದ ಅಭ್ಯರ್ಥಿ ಕೋಟ ಶ್ರೀನಿವಾಸ್ ಪೂಜಾರಿ ಅವರಿಗೆ ಪ್ರಮಾಣ ಪತ್ರ ನೀಡಿ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ, ಅಪರ ಜಿಲ್ಲಾಧಿಕಾರಿ ಮಮತಾದೇವಿ, ಸಹಾಯಕ ಚುನಾವಣಾ ಅಧಿಕಾರಿಗಳಾದ ರಶ್ಮಿ ಎಸ್. ಆರ್, ಜಯಮಾದು, ಶಿವಪ್ರಸಾದ್ ಗಾವಂಕರ್ ಕಾಂತರಾಜು, ದಲಿಜತ್ ಕುಮಾರ್, ಜಯಲಕ್ಷ್ಮಮ್ಮ ಹಾಗೂ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.
ದ.ಕ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಜಯಭೇರಿ; ನಿರ್ಗಮಿತ ಸಂಸದ ನಳಿನ್ ಕುಮಾರ್ ಕಟೀಲ್ ಸಂತಸ
ಮಂಗಳೂರು : ದ.ಕ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಜಯಭೇರಿ ಹಿನ್ನಲೆಯಲ್ಲಿ ಮಂಗಳೂರಿನಲ್ಲಿ ನಿರ್ಗಮಿತ ಸಂಸದ ನಳಿನ್ ಕುಮಾರ್ ಕಟೀಲ್ ಸಂತಸ ವ್ಯಕ್ತಪಡಿಸಿದ್ದಾರೆ.
ಮಂಗಳೂರಿನಲ್ಲಿ ಮಾತನಾಡಿದ ಅವರು ಜಿಲ್ಲೆಯ ಜನ ಬಿಜೆಪಿಯ ಕೈ ಹಿಡಿದಿದ್ದಾರೆ. ಕ್ಯಾ.ಬ್ರಿಜೇಶ್ ಚೌಟ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಮುಂದಿನ ವರ್ಷಗಳಲ್ಲಿ ಅವರಿಗೆ ಅಭಿವೃದ್ಧಿ ಮಾಡುವ ಅವಕಾಶ ಇದೆ. ಸಂಪೂರ್ಣವಾಗಿ ಅಭಿವೃದ್ಧಿ ಮಾಡುವ ವಿಶ್ವಾಸ ಇದೆ. ಕೋಟಾ ಅವರಿಗೂ ಅಭಿನಂದನೆ ಸಲ್ಲಿಸುತ್ತೇನೆ. ರಾಜ್ಯದಲ್ಲಿ ಹದಿನೇಳು ಕ್ಷೇತ್ರದಲ್ಲಿ ಬಿಜೆಪಿ ಮುನ್ನಡೆಯಲ್ಲಿದೆ. ರಾಜ್ಯದಲ್ಲಿ ಬಿಜೆಪಿ ಮುನ್ನಡೆಯ ಹಾದಿಯಲ್ಲಿದೆ ಎಂದರು.
ಕಳೆದ ಬಾರಿಗಿಂತ ಕಡಿಮೆ ಅಂತರದ ಗೆಲುವು ಹಿನ್ನಲೆಯ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು ಸಹಜವಾಗಿ ಚುನಾವಣೆಯಲ್ಲಿ ವ್ಯತ್ಯಾಸಗಳಾಗುತ್ತದೆ. ಈ ಬಾರಿ ಕಾಂಗ್ರೆಸ್ ಗ್ಯಾರಂಟಿ, ಆಶ್ವಾಸನೆಗಳನ್ನು ನೀಡಿದೆ. ಆದರೂ ಬಿಜೆಪಿ ಒಂದೂವರೆ ಲಕ್ಷ ಮತಗಳ ಅಂತರದ ಜಯ ಪಡೆದಿದೆ ಎಂದರು.
ನಾನು ಕೇರಳದ ಸಹ ಪ್ರಭಾರಿಯಾಗಿ ಕೆಲಸ ಮಾಡಿದ್ದೆ. ಬಿಜೆಪಿ ಕೇರಳದಲ್ಲಿ ತನ್ನ ಅಕೌಂಟ್ ತೆರೆದಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.
ನವಯುಗ ನವಪಥದ ಆಧಾರದಲ್ಲಿ ದ.ಕ. ಜಿಲ್ಲೆಯನ್ನು ಅಭಿವೃದ್ಧಿಯತ್ತ ಕೊಂಡೊಯ್ಯುವೆ – ಬ್ರಿಜೇಶ್ ಚೌಟ
ಮಂಗಳೂರು : ನವಯುಗ ನವಪಥದ ಆಧಾರದಲ್ಲಿ ಹಿಂದುತ್ವಕ್ಕೆ ಬದ್ಧತೆಯಿರಿಸಿ, ಅಭಿವೃದ್ಧಿಯನ್ನು ಆದ್ಯತೆಯಾಗಿರಿಸಿ ದ.ಕ.
ಜಿಲ್ಲೆಯಲ್ಲಿ ಹೊಸಪರ್ವ, ಹೊಸಕನಸು, ಹೊಸ ಆಶೋತ್ತರಗಳನ್ನು ಜನರ ಮಧ್ಯೆ ಹುಟ್ಟಿಸುತ್ತೇನೆ. ಎಲ್ಲರ ಸಹಕಾರದೊಂದಿಗೆ ಜಿಲ್ಲೆಯನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯುತ್ತೇನೆ ಎಂದು ದ.ಕ.ಜಿಲ್ಲೆಯಲ್ಲಿ ಗೆಲುವು ಸಾಧಿಸಿದ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಹೇಳಿದರು.
ಗೆಲುವಿನತ್ತ ದಾಪುಗಾಲು ಹಾಕುತ್ತಿದ್ದಂತೆ ಸುರತ್ಕಲ್ನ ಮತ ಎಣಿಕಾ ಕೇಂದ್ರದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ದ.ಕ. ಜಿಲ್ಲೆಯ ಬಿಜೆಪಿಯ ಗೆಲುವು, ಮೋದಿಯವರ, ಹಿಂದುತ್ವದ, ಸಂಘಟನೆಯ ಕಾರ್ಯಕರ್ತರ, ಜಿಲ್ಲಾಧ್ಯಕ್ಷರ ಗೆಲುವು. ಸತ್ಯ, ಧರ್ಮ, ನ್ಯಾಯ, ಹಿಂದುತ್ವದ ಆಧಾರದಲ್ಲಿ ನಾವು ಜಿಲ್ಲೆಯಲ್ಲಿ ಸ್ಪರ್ಧೆ ಮಾಡಿದ್ದೆವು. ತುಳುನಾಡಿನ ದೈವ ದೇವರ ಆಶೀರ್ವಾದದ ಬಲದಿಂದ, ಕಾರ್ಯಕರ್ತರ ಪರಿಶ್ರಮ, ಸಂಘಟನೆಯ ಹಿರಿಯರ ಮಾರ್ಗದರ್ಶನದಿಂದ, ರಾಜ್ಯ ಹಾಗೂ ಕೇಂದ್ರದ ನಾಯಕರ ಬೆಂಬಲದೊಂದಿಗೆ ಈ ಚುನಾವಣೆಯನ್ನು ಯಶಸ್ವಿಯಾಗಿ ಎದುರಿಸಿದ್ದೇವೆ ಎಂದರು.
ಈ ಚುನಾವಣೆಯನ್ನು ಕಾಂಗ್ರೆಸ್ ಎಸ್ಡಿಪಿಐ ಒಟ್ಟಾಗಿ ಎದುರಿಸಿದೆ. ಆದರೆ ಚುನಾವಣಾ ಅಂತರದ ಬಗ್ಗೆ ಬಳಿಕ ಮಾಹಿತಿ ನೀಡುತ್ತೇನೆ ಎಂದು ಬ್ರಿಜೇಶ್ ಚೌಟ ಹೇಳಿದರು.
ಕರಾವಳಿ ಹಿಂದುತ್ವದ ಭದ್ರಕೋಟೆ ಎಂಬುದನ್ನು ಸಾಬೀತುಪಡಿಸಿದ ಕೋಟ ಗೆಲುವು : ಯಶ್ಪಾಲ್ ಸುವರ್ಣ
ಉಡುಪಿ : ಕರ್ನಾಟಕ ಕರಾವಳಿಯ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಪ್ರಚಂಡ ಬಹುಮತದಿಂದ ಗೆಲ್ಲಿಸುವ ಮೂಲಕ ಕರಾವಳಿ ಜಿಲ್ಲೆ ಹಿಂದುತ್ವದ ಭದ್ರಕೋಟೆ ಎಂಬುದನ್ನು ಜನತೆ ಸಾಬೀತು ಮಾಡಿದ್ದಾರೆ ಎಂದು ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಸಂತೋಷ ವ್ಯಕ್ತಪಡಿಸಿದ್ದಾರೆ.
ಕೋಟ ಶ್ರೀನಿವಾಸ ಪೂಜಾರಿಯವರನ್ನು 2,58,903 ಮತಗಳ ಅಂತರದಿಂದ ಗೆಲ್ಲಿಸುವ ಮೂಲಕ ಕ್ಷೇತ್ರದ ಜನತೆ ಕಾಂಗ್ರೆಸ್ ಸರಕಾರದ ಅವೈಜ್ಞಾನಿಕ ಗ್ಯಾರಂಟಿ ಭಾಗ್ಯಗಳನ್ನು ವಿರೋಧಿಸಿ, ಹಿಂದೂ ವಿರೋಧಿ ನೀತಿಗೆ ದಿಟ್ಟ ಉತ್ತರ ನೀಡಿ ಸಿದ್ಧರಾಮಯ್ಯ ಸರಕಾರಕ್ಕೆ ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ.
ಉಡುಪಿ ವಿಧಾನಸಭಾ ಕ್ಷೇತ್ರದಲ್ಲಿ ಸುಮಾರು 45,000 ಅಂತರದ ಮುನ್ನಡೆ ನೀಡಿದ್ದು, ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಹತ್ತು ವರ್ಷಗಳ ಸಾಧನೆಗೆ ಜನ ಮನ್ನಣೆ ನೀಡಿದ್ದಾರೆ . ಮುಂದಿನ ದಿನಗಳಲ್ಲಿ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಕೋಟ ಶ್ರೀನಿವಾಸ ಪೂಜಾರಿಯವರು ಸಮರ್ಥ ಸಂಸದರಾಗಿ ಕಾರ್ಯನಿರ್ವಹಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೋಟ ಶ್ರೀನಿವಾಸ ಪೂಜಾರಿ ಭರ್ಜರಿ ಗೆಲುವು : ಉಡುಪಿ ಜಿಲ್ಲಾ ಬಿಜೆಪಿ ಸಂಭ್ರಮಾಚಾರಣೆ
ಉಡುಪಿ : ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಪ್ರಚಂಡ ಗೆಲುವು ಸಾಧಿಸಿದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿಯವರನ್ನು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಇವರ ಅಧ್ಯಕ್ಷತೆಯಲ್ಲಿ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಸಂಭ್ರಮಾಚರಣೆಯಲ್ಲಿ ಶಾಲು ಹೊದೆಸಿ ಸನ್ಮಾನಿಸಲಾಯಿತು.
ಬಳಿಕ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ಪಟಾಕಿ ಸಿಡಿಸಿ ಸಂಭ್ರಮಿಸಲಾಯಿತು.
ಈ ಸಂದರ್ಭದಲ್ಲಿ ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ, ಉಡುಪಿ ಶಾಸಕ ಯಶ್ಪಾಲ್ ಎ. ಸುವರ್ಣ, ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣಾ ಸಂಚಾಲಕ ಕುತ್ಯಾರು ನವೀನ್ ಶೆಟ್ಟಿ, ನಿಕಟಪೂರ್ವ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಮಾಜಿ ಜಿಲ್ಲಾಧ್ಯಕ್ಷರಾದ ಮಟ್ಟಾರ್ ರತ್ನಾಕರ ಹೆಗ್ಡೆ, ತಿಂಗಳೆ ವಿಕ್ರಮಾರ್ಜುನ ಹೆಗ್ಡೆ, ಮಹಿಳಾ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಿನಕರ ಶೆಟ್ಟಿ ಹೆರ್ಗ, ರೇಷ್ಮಾ ಉದಯ ಶೆಟ್ಟಿ, ನಿಕಟಪೂರ್ವ ರಾಜ್ಯ ಉಪಾಧ್ಯಕ್ಷೆ ನಯನಾ ಗಣೇಶ್, ಪ್ರಮುಖರಾದ ಬೈಕಾಡಿ ಸುಪ್ರಸಾದ್ ಶೆಟ್ಟಿ, ಹರಿಮಕ್ಕಿ ರತ್ನಾಕರ್ ಶೆಟ್ಟಿ, ಗೀತಾಂಜಲಿ ಎಮ್. ಸುವರ್ಣ, ಶ್ರೀಕಾಂತ್ ನಾಯಕ್, ರಾಘವೇಂದ್ರ ಕುಂದರ್, ಶಿವಕುಮಾರ್ ಅಂಬಲಪಾಡಿ, ವಿಜಯ ಕುಮಾರ್ ಉದ್ಯಾವರ, ಪ್ರಥ್ವಿರಾಜ್ ಶೆಟ್ಟಿ, ಸಶಾಂಕ್ ಶಿವತ್ತಾಯ, ರಾಘವೇಂದ್ರ ಉಪ್ಪೂರು, ದಿಲೇಶ್ ಶೆಟ್ಟಿ, ನಳಿನಿ ಪ್ರದೀಪ್ ರಾವ್, ರಶ್ಮಿತಾ ಬಿ. ಶೆಟ್ಟಿ, ಪವಿತ್ರಾ ಶೆಟ್ಟಿ, ಭಾರತೀ ಚಂದ್ರಶೇಖರ್, ವೀಣಾ ಎಸ್. ಶೆಟ್ಟಿ, ಸಚಿನ್ ಪಿತ್ರೋಡಿ, ಸತೀಶ್ ಪೂಜಾರಿ, ದಾವೂದ್ ಅಬೂಬಕರ್, ಲಕ್ಷ್ಮೀಶ ಬಂಗೇರ, ರಘುನಾಥ್, ಸುಭಾಷಿತ್, ವಿಜಯಲಕ್ಷ್ಮಿ, ಮಂಜುಳಾ ಪ್ರಸಾದ್, ಪ್ರೀತಿ ಹಾಗೂ ಪಕ್ಷದ ಪ್ರಮುಖರು, ವಿವಿಧ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.