ಉಡುಪಿ : ಕರಾವಳಿ ಬೈಪಾಸ್ನಿಂದ ಮಣಿಪಾಲ ಮೂಲಕ ಸಾಗುವ ರಾಷ್ಟ್ರೀಯ ಹೆದ್ದಾರಿ 169ಎ ಯ ಇಂದ್ರಾಳಿ ರೈಲ್ವೆ ಮೇಲ್ಸೇತುವೆ ಕಾಮಗಾರಿಯಲ್ಲಿ ತೀರಾ ನಿರ್ಲಕ್ಷ್ಯ ವಹಿಸಿದ್ದು, ಇದರಿಂದ ಸಂಭವಿಸಿದ ಅಪಘಾತಗಳಿಂದ ಅನೇಕ ಸಾವು-ನೋವುಗಳಿಗೆ ಕಾರಣರಾಗಿರುವ ಕಾಮಗಾರಿಯ ಗುತ್ತಿಗೆದಾರರು, ಅಧಿಕಾರಿಗಳ ವಿರುದ್ಧ ನಿರ್ಲಕ್ಷ್ಯ ಸೇರಿದಂತೆ ವಿವಿಧ ಪ್ರಕರಣಗಳನ್ನು ದಾಖಲಿಸುವಂತೆ ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಸಂಬಂಧಿತ ಅಧಿಕಾರಿಗಳಿಗೆ ಸೂಚನೆಗಳನ್ನು ನೀಡಿದ್ದಾರೆ.
ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ರಾಷ್ಟ್ರೀಯ ಹೆದ್ದಾರಿ 169ಎ ಯಲ್ಲಿ ಇಂದ್ರಾಳಿ ಮೇಲ್ಸೇತುವೆ ಕಾಮಗಾರಿಯ ಪ್ರಗತಿ ಕುರಿತು ಚರ್ಚಿಸಲು ಕರೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.
ಮಲ್ಪೆ-ತೀರ್ಥಹಳ್ಳಿ ನಡುವಿನ ರಾಷ್ಟ್ರೀಯ ಹೆದ್ದಾರಿ 169ಎ ಚತುಷ್ಪಥ ಕಾಮಗಾರಿ ಕಳೆದ ಕೆಲವು ವರ್ಷಗಳಿಂದ ನಿಧಾನ ಗತಿಯಲ್ಲಿ ನಡೆಯುತ್ತಿದೆ. ಇಂದ್ರಾಳಿಯಲ್ಲಿರುವ ರೈಲ್ವೆ ಮೇಲ್ಸೇತುವೆ ಕಾಮಗಾರಿ ವಿಳಂಬದಿಂದಾಗಿ ಮಣಿಪಾಲವನ್ನು ಸಂಪರ್ಕಿಸುವ ಇಕ್ಕಟ್ಟಾಗಿರುವ ರಸ್ತೆಯಲ್ಲಿ ಕಳೆದ ಎರಡು ವರ್ಷಗಳಿಂದ ಹಲವು ಮಾರಣಾಂತಿಕ ರಸ್ತೆ ಅಪಘಾತಗಳು ಸಂಭವಿಸಿದ್ದು, ಹಲವರು ಬಲಿಯಾಗಿದ್ದಾರೆ. ಇದಕ್ಕೆ ಅಧಿಕಾರಿಗಳು ಹಾಗೂ ಗುತ್ತಿಗೆದಾರರೇ ಕಾರಣವಾಗಿದ್ದು, ರಸ್ತೆ ಅಪಘಾತಕ್ಕೆ ಕಾರಣಕರ್ತರಾದ ರೈಲ್ವೆ ಅಧಿಕಾರಿಗಳು, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಭಿಯಂತರರು ಹಾಗೂ ಗುತ್ತಿಗೆದಾರರ ಮೇಲೆ ಕ್ರಿಮಿನಲ್ ಪ್ರಕರಣಗಳನ್ನು ದಾಖಲಿಸಬೇಕು ಎಂದು ಜಿಲ್ಲಾಧಿಕಾರಿ ಸೂಚನೆ ನೀಡಿದರು.