ಕುಂದಾಪುರ : ಬುಧವಾರ ತಡರಾತ್ರಿ ಅನಾರೋಗ್ಯದಿಂದ ನಿಧನರಾದ ಕುಂದಾಪುರ ಪೊಲೀಸ್ ವೃತ್ತ ನಿರೀಕ್ಷಕ ನಂಜಪ್ಪ ಎನ್ (59) ಅವರಿಗೆ ವೃತ್ತ ನಿರೀಕ್ಷಕರ ಕಚೇರಿಯಲ್ಲಿ ಅಂತಿಮ ಗೌರವ ಸಲ್ಲಿಸಲಾಯಿತು.
ಕುಂದಾಪುರ ಡಿವೈಎಸ್ಪಿ ಹೆಚ್. ಡಿ. ಕುಲಕರ್ಣಿ ನೇತೃತ್ವದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತಿಮ ನಮನ ಸಲ್ಲಿಸಲಾಯಿತು. ಪೊಲೀಸರು ಗಾಳಿಯಲ್ಲಿ ಮೂರು ಸುತ್ತಿನ ಗುಂಡು ಹಾರಿಸಿ ಗೌರವ ಸಲ್ಲಿಸಿದರು.

ಕುಂದಾಪುರ ಶಾಸಕ ಕಿರಣ್ ಕೊಡ್ಗಿ, ಮಾಜಿ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ, ಪುರಸಭಾಧ್ಯಕ್ಷ ಮೋಹನ್ ದಾಸ್ ಶೆಣೈ, ಕಾಂಗ್ರೆಸ್ ಮುಖಂಡ ದಿನೇಶ್ ಹೆಗ್ಡೆ ಮೊಳಹಳ್ಳಿ ಸಹಿತ ಗಣ್ಯರಿಂದ ಅಂತಿಮ ದರ್ಶನ ಪಡೆದರು. ಬಳಿಕ ಮೃತದೇಹವನ್ನು ಹುಟ್ಟೂರಿಗೆ ಕೊಂಡೊಯ್ಯಲಾಯಿತು.
ಅನಾರೋಗ್ಯದಿಂದ ಬಳಲುತ್ತಿದ್ದ ನಂಜಪ್ಪ ಅವರು ಎರಡು ದಿನಗಳ ಹಿಂದೆ ಉಡುಪಿಯ ಖಾಸಗೀ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಬುಧವಾರ ತಡರಾತ್ರಿ ನಿಧನರಾಗಿದ್ದರು.
ನಂಜಪ್ಪ ಮೂಲತಃ ಶಿವಮೊಗ್ಗ ಜಿಲ್ಲೆಯ ಭದ್ರಾವತಿಯವರು. ಶಿವಮೊಗ್ಗ, ದಾವಣಗೆರೆ, ಹಾವೇರಿ ಮೊದಲಾದೆಡೆ ಕರ್ತವ್ಯ ನಿರ್ವಹಿಸಿದ್ದು, ಬಳಿಕ ಪೊಲೀಸ್ ನಿರೀಕ್ಷಕರಾಗಿ ಆಗಿ ಬಡ್ತಿ ಹೊಂದಿ, ಕಡೂರು, ಭದ್ರಾವತಿ ಯಲ್ಲಿ ಹಾಗೂ ನಾಲ್ಕು ವರ್ಷಗಳ ಕಾಲ ಗಂಗೊಳ್ಳಿ ಕರಾವಳಿ ಕಾವಲು ಪಡೆಯಲ್ಲಿ ಕರ್ತವ್ಯ ನಿರ್ವಹಿಸಿದ್ದಾರೆ. ಕಳೆದ ವರ್ಷ ಆಗಸ್ಟ್ನಲ್ಲಿ ಕುಂದಾಪುರ ವೃತ್ತ ನಿರೀಕ್ಷಕರಾಗಿ ನಿಯುಕ್ತಿಗೊಂಡಿದ್ದರು.
 
			        


 
			         
                        
 
                        
