ಉಡುಪಿ : ಮಲ್ಪೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲ್ಪೆಯಲ್ಲಿ ಬಂಧಿತರನ್ನು ಬಿಡುಗಡೆ ಮಾಡಲು ಆಗ್ರಹಿಸಿ ನಡೆದ ಪ್ರತಿಭಟನೆಯಲ್ಲಿ ಪ್ರಚೋದನಕಾರಿಯಾಗಿ ಮಾತನಾಡಿದ ಆರೋಪದಡಿಯಲ್ಲಿ ಮಾಜಿ ಸಚಿವ ಪ್ರಮೋದ್ ಮಧ್ಚರಾಜ್ ವಿರುದ್ಧ ಪ್ರಕರಣ ದಾಖಲಾಗಿದೆ. ಇದೀಗ ಅವರನ್ನು ಕೂಡಲೇ ಬಂಧಿಸಬೇಕೆಂದು ಕರ್ನಾಟಕ ರಾಜ್ಯ ಬಂಜಾರ ಯುವಕರ ಮತ್ತು ವಿದ್ಯಾರ್ಥಿ ಸಂಘ ಆಗ್ರಹಿಸಿದೆ.

ಉಡುಪಿ ಪ್ರೆಸ್ ಕ್ಲಬ್ನಲ್ಲಿ ನಡೆದ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಕರ್ನಾಟಕ ರಾಜ್ಯ ಬಂಜಾರ ಯುವಕರ ಮತ್ತು ವಿದ್ಯಾರ್ಥಿ ಸಂಘದ ರಾಜ್ಯಾಧ್ಯಕ್ಷ ಗಿರೀಶ್ ಡಿ.ಆರ್, “ಕೃತ್ಯವನ್ನು ಸಮರ್ಥಿಸು ಮಹಿಳೆಯನ್ನು ನಿಂದಿಸುವ ಪ್ರಚೋದನಕಾರಿ ಹೇಳಿಕೆ ನೀಡಿರುವ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಅವರ ವಿರುದ್ಧ ಈಗಾಗಲೇ ಪ್ರಕರಣ ದಾಖಲಾಗಿದೆ, ಅವರನ್ನು ಕೂಡಲೇ ಸರಕಾರ ಬಂಧಿಸಬೇಕೆಂದು ಆಗ್ರಹಿಸಿದರು.
ಪ್ರಕರಣದ ಸತ್ಯಾಸತ್ಯತೆಯ ವಿಡಿಯೋ ರಾಜ್ಯದಲ್ಲೆಡೆ ಸದ್ದು ಮಾಡುತ್ತಿರುವ ಸಂದರ್ಭದಲ್ಲಿ ಉಡುಪಿಯ ಮಾಜಿ ಶಾಸಕರಾದ ರಘುಪತಿ ಭಟ್ ಅವರು ಕೃತ್ಯಕ್ಕೆ ಸಂಬಂಧಿಸಿದಂತೆ ಮಾತನಾಡಿ ‘ಈ ಪ್ರಕರಣದಲ್ಲಿ ಪರಿಶಿಷ್ಟ ಜಾತಿ ನಿಂದನೆ ಕೇಸ್ ಅನ್ವಯವಾಗುವುದಿಲ್ಲ ಎಂದು ಬೇಜವಾಬ್ದಾರಿತನದ ಹೇಳಿಕೆ ನೀಡಿದ್ದು, ಅವರ ಹೇಳಿಕೆ ಕಾನೂನು ವಿರೋಧಿಯಾಗಿದ್ದು, ಕೂಡಲೇ ಬೇಷರತ್ ಕ್ಷಮೆಯಾಚಿಸಬೇಕು ಎಂದು ಹೇಳಿದರು.
ಸಾರ್ವಜನಿಕವಾಗಿ ಥಳಿತ, ನಿಂದನೆ ಹಾಗು ಅಪಮಾನಕ್ಕೆ ಒಳಗಾದ ಸಂತ್ರಸ್ತ ಮಹಿಳೆಗೆ ‘ಪರಿಶಿಷ್ಟ ಜಾತಿ ಹಾಗೂ ಪಂಗಡ ದೌರ್ಜನ್ಯ ತಡೆ ಕಾಯ್ದೆ 1989′ ಅಡಿ ನೀಡಲಾಗುವ ಪರಿಹಾರವನ್ನು ಕೂಡಲೇ ಒದಗಿಸಬೇಕು. ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತ ಮಹಿಳೆಯ ವಿರುದ್ಧವಾಗಿ ರಾಜಕೀಯ ಪ್ರೇರಿತವಾಗಿ ಮನಸೋ ಇಚ್ಛೆ ಹೇಳಿಕೆ ನೀಡುವರ ವಿರುದ್ಧ ಪೋಲಿಸ್ ಇಲಾಖೆ ಸುಮೋಟೋ ಕೇಸ್ ದಾಖಲಿಸಬೇಕು.
ಪ್ರಕರಣದ ತೀವ್ರತೆಯನ್ನು ತಿಳಿಗೊಳಿಸುವ ನಿಟ್ಟಿನಲ್ಲಿ ಉಡುಪಿ ಜಿಲ್ಲಾಡಳಿತ ಕೃತ್ಯ ನಡೆದ ಸ್ಥಳದಲ್ಲಿ ಕೂಡಲೇ “ಶಾಂತಿ ಸಭೆ” ಆಯೋಜಿಸಿ ಎಲ್ಲರ ಮಧ್ಯೆ ಸೌಹಾರ್ದತೆಯನ್ನು ತರುವ ನಿಟ್ಟಿನಲ್ಲಿ ಕ್ರಮ ವಹಿಸಬೇಕು. ನಾಗರೀಕ ಸಮುದಾಯ ತಲೆತಗ್ಗಿಸುವನಂತಹ ಅಮಾನವೀಯ ಕೃತ್ಯಗಳು ಜರುಗದಂತೆ ಪೊಲೀಸ್ ಇಲಾಖೆ ಕ್ರಮ ವಹಿಸಬೇಕು ಹಾಗೂ ಮೀನುಗಾರಿಕಾ ವೃತ್ತಿಯಲ್ಲಿ ತೊಡಗಿರುವ ಹೊರ ಊರಿನ ಪರಿಶಿಷ್ಟರಿಗೆ ಸೂಕ್ತ ರಕ್ಷಣೆ ನೀಡಬೇಕೆಂದು ಆಗ್ರಹಿಸುತ್ತೇವೆ ಎಂದು ಹೇಳಿದರು.