ಉಡುಪಿ : ಪ್ರಸಕ್ತ ಸಾಲಿನ ಜುಲೈ ತಿಂಗಳಲ್ಲಿ ವಾಡಿಕೆ ಮಳೆಗಿಂತ ಶೇ.41ರಷ್ಟು ಸುರಿದ ಅಧಿಕ ಮುಂಗಾರು ಮಳೆಯಿಂದಾಗಿ ಜಿಲ್ಲೆಯ ರಸ್ತೆ, ಮೇಲ್ಸೇತುವೆ, ವಿದ್ಯುತ್ ಕಂಬ, ಟ್ರಾನ್ಸ್ಫಾರ್ಮರ್ ಹಾಗೂ ಲೈನ್ಗಳು, ಶಾಲೆಗಳು, ಅಂಗನವಾಡಿ ಕಟ್ಟಡಗಳು ಸೇರಿದಂತೆ ಉಂಟಾಗಿರುವ ವಿವಿಧ ಹಾನಿಗಳಿಂದಾಗಿ ಜಿಲ್ಲೆಯಲ್ಲಿ ಇದುವರೆಗೆ ಸುಮಾರು 183 ಕೋಟಿ ರೂ. ಗಳಷ್ಟು ನಷ್ಟದ ಅಂದಾಜು ಮಾಡಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್. ತಿಳಿಸಿದ್ದಾರೆ.
ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಜಿಲ್ಲಾ ಮಟ್ಟದ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.
ಮಳೆಯಿಂದಾಗಿ ಈಗಾಗಲೇ ಹಾನಿಗೊಂಡಿರುವ ಮೂಲ ಸೌಕರ್ಯಗಳು, ವಿವಿಧ ಸೊತ್ತುಗಳ ಪುನರ್ ನಿರ್ಮಾಣ ಕಾಮಗಾರಿಗಳನ್ನು ಆದ್ಯತೆಯ ಮೇಲೆ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದ ಅವರು ಶೀಘ್ರದಲ್ಲೇ ಅವುಗಳನ್ನು ಸಾರ್ವಜನಿಕರ ಉಪಯೋಗಕ್ಕೆ ಬಿಟ್ಟುಕೊಡಬೇಕು ಎಂದರು.
ಮಳೆಗಾಲದಲ್ಲಿ ಸಂಭವಿಸುವ ಭೂಕುಸಿತಗಳಿಂದಾಗುವ ಅಪಾಯಗಳನ್ನು ತಪ್ಪಿಸಿ, ಜನ ಹಾಗೂ ಜಾನುವಾರುಗಳ ಜೀವಕ್ಕೆ ಅಪಾಯವಾಗದಂತೆ ಸಾಕಷ್ಟು ಮುಂಚಿತವಾಗಿಯೇ ಮುನ್ನಚ್ಚರಿಕೆ ವಹಿಸುವ ಉದ್ದೇಶದಿಂದ ಈಗಾಗಲೇ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಮೂಲಕ ಸಂಭಾವ್ಯ ಭೂಕುಸಿತ ಪ್ರದೇಶಗಳನ್ನು ನಿಖರವಾಗಿ ಗುರುತಿಸಲಾಗಿದೆ. ಮಳೆಗಾಲದ ಸಂದರ್ಭದಲ್ಲಿ ಪ್ರತಿನಿತ್ಯ ಅಂತಹ ಪ್ರದೇಶಗಳ ಸ್ಥಳಗಳನ್ನು ಪರಿಶೀಲಿಸಬೇಕು. ಭೂಕುಸಿತ ಉಂಟಾಗದಂತೆ ಅಗತ್ಯ ಮುನ್ನೆಚ್ಚರಿಕಾ ತಡೆಗೋಡೆ ಕಾಮಗಾರಿ ಕೈಗೊಳ್ಳಬೇಕು ಎಂದರು.
