ಉಡುಪಿ : ಇಂದ್ರಾಳಿ ರೈಲ್ವೆ ನಿಲ್ದಾಣದಲ್ಲಿರುವ ಹಲವು ಮೂಲಭೂತ ಸಮಸ್ಯೆಗಳನ್ನು ಕೂಡಲೇ ಬಗೆಹರಿಸುವಂತೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ಘಟಕದ ವತಿಯಿಂದ ರೈಲ್ವೆ ಅಧಿಕಾರಿಗಳಿಗೆ ಹಾಗೂ ಉಡುಪಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಮನವಿ ಸಲ್ಲಿಸಲಾಯಿತು.
ರೈಲ್ವೆ ನಿಲ್ದಾಣದಲ್ಲಿ ಯಾವುದೇ ಕನ್ನಡ ನಾಮಫಲಗಳು ಇಲ್ಲ. ಇದರಿಂದ ಪ್ರಯಾಣಿಕರಿಗೆ ತುಂಬಾ ತೊಂದರೆಯಾಗುತ್ತಿದೆ. ಸಾರ್ವಜನಿಕರಿಗೆ ಸರಿಯಾದ ಮಾಹಿತಿ ಸಿಗುವುದಿಲ್ಲ ಹಾಗೂ ರೈಲ್ವೆ ನಿಲ್ದಾಣದಲ್ಲಿ ನಾಯಿಗಳ ಕಾಟ ಹಲವು ವರ್ಷಗಳಿಂದ ಇದ್ದು ನಾಯಿಗಳು ಮಕ್ಕಳಿಗೆ, ವಯೋವೃದ್ಧರಿಗೆ ಕಚ್ಚುವ ಸಂಭವವಿದೆ. ಪ್ರಯಾಣಿಕರು ರೈಲ್ವೆ ನಿಲ್ದಾಣದ ಒಳಗೆ ಪ್ರವೇಶ ಮಾಡಲು ಭಯಪಡುತ್ತಿದ್ದಾರೆ. ಪ್ರಯಾಣಿಕರಿಗೆ ಕೂರಲು ಆಸನದ ವ್ಯವಸ್ಥೆಗಳಿಲ್ಲ. ಇವನ್ನೆಲ್ಲ ಸರಿಪಡಿಸಬೇಕು ಎಂದು ಮನವಿಯಲ್ಲಿ ತಿಳಿಸಲಾಗಿದೆ.
ಕರವೇ ಜಿಲ್ಲಾಧ್ಯಕ್ಷ ಸುಜಯ್ ಪೂಜಾರಿ, ಗೌರಧ್ಯಕ್ಷ ಸುಂದರ ಎ.ಬಂಗೇರ, ಜಿಲ್ಲಾ ಕಾರ್ಯದರ್ಶಿ ಸಿದ್ದಣ್ಣ ಪೂಜಾರಿ, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಗೋಪಾಲ ದೊರೆ ಮತ್ತು ಅಲ್ಲೋನ್ಸ್, ಜಿಲ್ಲಾ ಮಹಿಳಾ ಉಪಾಧ್ಯಕ್ಷ ದೇವಕಿ ಬಾರಕೂರು, ಜಿಲ್ಲಾ ಮಹಿಳಾ ಪ್ರಧಾನ ಕಾರ್ಯದರ್ಶಿ ಜ್ಯೋತಿ, ಜಿಲ್ಲಾ ಮಹಿಳಾ ಕಾರ್ಯದರ್ಶಿ ಚಂದ್ರಕಲಾ, ಜಿಲ್ಲಾ ಸದಸ್ಯ ಅಶೋಕ್ ಮೊದಲಾದವರು ಉಪಸ್ಥಿತರಿದ್ದರು.