ದಕ್ಷಿಣ ಕನ್ನಡ : ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಬುಧವಾರ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಅವರು ಅಧಿಕಾರಿಗಳೊಂದಿಗೆ ಜಿಲ್ಲೆಯ ವಿವಿಧ ನೆರೆ ಪೀಡಿತ ಹಾಗೂ ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.
ಜಿಲ್ಲಾಧಿಕಾರಿಗಳು ಪರಿಸ್ಥಿತಿಯನ್ನು ಖುದ್ದು ಪರಿಶೀಲಿಸಿದರು. ಸ್ಥಳೀಯ ಸಾರ್ವಜನಿಕರೊಂದಿಗೆ ಅಹವಾಲು ಆಲಿಸಿದ ಅವರು, ನೆರೆ ಪೀಡಿತ ಪ್ರದೇಶಗಳಲ್ಲಿ ಹಾಗೂ ಸಂಭಾವ್ಯ ನೆರೆ ಪ್ರದೇಶಗಳಲ್ಲಿ ನಿರಂತರ ನಿಗಾ ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ನೆರೆ ಪ್ರದೇಶಗಳ ನಿವಾಸಿಗಳ ಸ್ಥಳಾಂತರ ಮತ್ತು ಕಾಳಜಿ ಕೇಂದ್ರಗಳ ಸ್ಥಾಪನೆಯ ಬಗ್ಗೆ ಸ್ಥಳೀಯ ಅಧಿಕಾರಿಗಳಿಗೆ ಅವರು ಸೂಚನೆ ನೀಡಿದರು. ಕಾಳಜಿ ಕೇಂದ್ರಗಳಲ್ಲಿ ತಂಗಿರುವ ನಾಗರಿಕರೊಂದಿಗೆ ಸಮಾಲೋಚಿಸಿ, ಧೈಯ೯ ತುಂಬಿದ ಜಿಲ್ಲಾಧಿಕಾರಿಗಳು, ಸಹಜ ಪರಿಸ್ಥಿತಿ ಬರುವವರೆಗೆ ಎಲ್ಲ ರೀತಿಯ ನೆರವು ನೀಡಲಾಗುವುದು ಎಂದು ತಿಳಿಸಿದರು. ಹರೇಕಳ, ಬಂಟ್ವಾಳ, ಆಲಡ್ಕ, ಉಪ್ಪಿನಂಗಡಿ ಮತ್ತಿತರ ಕಡೆಗೆ ಜಿಲ್ಲಾಧಿಕಾರಿಗಳು ಭೇಟಿ ನೀಡಿ, ನೆರೆ ಪರಿಸ್ಥಿತಿ ವೀಕ್ಷಿಸಿದರು.
ಮಂಗಳೂರು ಉಪವಿಭಾಗಾಧಿಕಾರಿ ಹರ್ಷವರ್ಧನ್, ಬಂಟ್ವಾಳ ತಹಶೀಲ್ದಾರ್ ಅರ್ಚನಾ ಭಟ್, ಪುತ್ತೂರು ತಹಶೀಲ್ದಾರ್ ಪುರಂದರ ಹೆಗ್ಡೆ, ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.