ಉಡುಪಿ : ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್ ವತಿಯಿಂದ ಎಸ್.ಎಸ್.ಎಲ್.ಸಿ., ದ್ವಿತೀಯ ಪಿಯುಸಿ, ಪದವಿ ಹಾಗೂ ಸ್ನಾತಕೋತ್ತರ ವಿಭಾಗದ 1050 ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸುಮಾರು ₹25 ಲಕ್ಷ ಮೌಲ್ಯದ ಪ್ರತಿಭಾ ಪುರಸ್ಕಾರ ವಿತರಣೆ ಕಾರ್ಯಕ್ರಮವನ್ನು ಫೆಬ್ರವರಿ 8 ಶನಿವಾರ ಮಧ್ಯಾಹ್ನ 3 ಗಂಟೆಗೆ ಮಲ್ಪೆ ಏಳೂರು ಮೊಗವೀರ ಭವನ ಸಭಾಂಗಣದಲ್ಲಿ ಆಯೋಜಿಸಿರುವುದಾಗಿ ಮೀನು ಮಾರಾಟ ಫೆಡರೇಶನ್ ಅಧ್ಯಕ್ಷರಾದ ಉಡುಪಿ ಶಾಸಕ ಶ್ರೀ ಯಶ್ಪಾಲ್ ಸುವರ್ಣ ತಿಳಿಸಿದ್ದಾರೆ.
ಸಮಾರಂಭದ ಉದ್ಘಾಟನೆಯನ್ನು ಕರಾವಳಿ ಕಾವಲು ಪೊಲೀಸ್ ವರಿಷ್ಠಾಧಿಕಾರಿಗಳಾದ ಶ್ರೀ ಮಿಥುನ್ ಎಚ್. ನೆರವೇರಿಸಲಿದ್ದು, ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಅಧ್ಯಕ್ಷತೆ ವಹಿಸಲಿದ್ದಾರೆ.
ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಉಡುಪಿ ನಗರ ಸಭಾ ಅಧ್ಯಕ್ಷರಾದ ಶ್ರೀ ಪ್ರಭಾಕರ ಪೂಜಾರಿ, ಮಲ್ಪೆ ಮೀನುಗಾರರ ಸಂಘದ ಅಧ್ಯಕ್ಷರಾದ ಶ್ರೀ ದಯಾನಂದ ಕೆ. ಸುವರ್ಣ, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಶ್ರೀ ದಿನಕರ ಹೇರೂರು, ಮಲ್ಪೆ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾದ ಶ್ರೀ ಗೋಪಾಲ ಸಿ. ಬಂಗೇರ, ಹಾಗೂ ವಿವಿಧ ಗಣ್ಯರು ಭಾಗವಹಿಸಲಿದ್ದಾರೆ.
ಸಂಪನ್ಮೂಲ ವ್ಯಕ್ತಿ ಡಾ. ಜಿ. ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ ಪ್ರೊ. ಶ್ರೀಮತಿ ನಿಕೇತನರವರು ವಿದ್ಯಾರ್ಥಿಗಳಿಗೆ ವಿಶೇಷ ಉಪನ್ಯಾಸ ನೀಡಲಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ವಿದ್ಯಾರ್ಥಿಗಳಿಗೆ ಫೆಬ್ರವರಿ 15ರಂದು ಮಂಗಳೂರಿನಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಪ್ರತಿಭಾ ಪುರಸ್ಕಾರ ವಿತರಣೆ ಮಾಡುವುದಾಗಿ ಪ್ರಕಟಣೆಯಲ್ಲಿ ಯಶ್ಪಾಲ್ ಸುವರ್ಣ ತಿಳಿಸಿದ್ದಾರೆ.