ಉಡುಪಿ : ನಗರದ ಹೃದಯ ಭಾಗದಲ್ಲಿರುವ ಜಿಲ್ಲೆಯ ಏಕೈಕ ಬಾಲಕಿಯರ ಪದವಿ ಪೂರ್ವ ಕಾಲೇಜು ಹಾಗೂ ಪ್ರೌಢ ಶಾಲೆಗೆ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ಭೇಟಿ ನೀಡಿ ಪರಿಶೀಲನೆ ನಡೆಸಿ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಯಶ್ಪಾಲ್ ಸುವರ್ಣ ಉತ್ತಮ ಗುಣಮಟ್ಟದ ಶಿಕ್ಷಣ ವ್ಯವಸ್ಥೆಯಿಂದ ವರ್ಷದಿಂದ ವರ್ಷಕ್ಕೆ ಕಾಲೇಜಿನಲ್ಲಿ ಪ್ರವೇಶ ಪಡೆಯುವ ವಿದ್ಯಾರ್ಥಿನಿಯರ ಸಂಖ್ಯೆ ಹೆಚ್ಚಿತ್ತಿರುವ ಹಿನ್ನೆಲೆಯಲ್ಲಿ ಮೂಲ ಸೌಕರ್ಯ ಕೊರತೆಯಿಂದ ಸಮಸ್ಯೆ ಉಂಟಾಗುತ್ತಿದೆ. ಶಾಲಾ ಆವರಣದಲ್ಲಿ ಡಯಟ್ ಶಾಲೆ ಕೂಡಾ ಕಾರ್ಯನಿರ್ವಹಿಸುತ್ತಿದ್ದು, ಹಳೆಯ ಕಟ್ಟಡಗಳು ಶಿಥಿಲಾವಸ್ಥೆಯಲ್ಲಿದೆ. ಅವೈಜ್ಞಾನಿಕ ರೀತಿಯಲ್ಲಿ ಕಟ್ಟಡಗಳ ನಿರ್ಮಾಣದಿಂದ ಸ್ಥಳಾವಕಾಶ ಕೊರತೆ ಉಂಟಾಗಿದೆ. ಈ ಬಗ್ಗೆ ವೈಜ್ಞಾನಿಕ ರೀತಿಯಲ್ಲಿ ನೀಲ ನಕಾಶೆ ರಚಿಸಿ ಹಳೆ ಕಟ್ಟಡಗಳನ್ನು ತೆರವುಗೊಳಿಸಿ, ಸರ್ಕಾರಡ ಅನುದಾನ ಹಾಗೂ ದಾನಿಗಳ ಸಹಕಾರದಿಂದ ಮೂಲ ಸೌಕರ್ಯಗಳನ್ನು ರೂಪಿಸಿ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ನೀಡಲು ಮುಂದಾಗಬೇಕಿದೆ ಎಂದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ರವರು ಕಾಲೇಜಿನ ಮೂಲ ಸೌಕರ್ಯ, ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಅಗತ್ಯವಿರುವ ಕಾಲೇಜು ತರಗತಿ ಕೊಠಡಿ, ಪ್ರಯೋಗಾಲಯ ಹಾಗೂ ಕ್ರೀಡಾ ಚಟುವಟಿಕೆಗಳಿಗೆ ಪೂರಕ ಮೈದಾನ ಮೊದಲಾದ ಬೇಡಿಕೆಗಳ ಬಗ್ಗೆ ಕಾಲೇಜಿನ ಪ್ರಾಂಶುಪಾಲರಿಂದ ಮಾಹಿತಿ ಪಡೆದರು.
ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಜಗದೀಶ್, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಶ್ರೀ ಮಾರುತಿ, ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಮತಿ ಯಲ್ಲಮ್ಮ, ಕಾಲೇಜು ಅಭಿವೃದ್ದಿ ಸಮಿತಿಯ ಶ್ರೀಮತಿ ನಿರುಪಮಾ ಪ್ರಸಾದ್ ಶೆಟ್ಟಿ, ಸಂಸ್ಥೆಯ ಉಪನ್ಯಾಸಕರು, ಶಿಕ್ಷಕರು, ಶಾಲಾಭಿವೃದ್ಧಿ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.